ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲಿ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್‌ ಸೂಚನೆ
Last Updated 5 ಮೇ 2021, 14:22 IST
ಅಕ್ಷರ ಗಾತ್ರ

ಕೋಲಾರ: ‘ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಕಾರ್ಯಪಡೆಗಳು ಸಮರ್ಥವಾಗಿ ಕಾರ್ಯ ನಿರ್ವಹಿಸಿದರೆ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಬಹುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್‌.ಎಂ.ನಾಗರಾಜ್‌ ಅಭಿಪ್ರಾಯಪಟ್ಟರು.

ತಾಲ್ಲೂಕಿನ ವಿವಿಧ ಗ್ರಾ.ಪಂಗಳ ವ್ಯಾಪ್ತಿಯ ಕಾರ್ಯಪಡೆಗಳ ಕಾರ್ಯ ನಿರ್ವಹಣೆ, ನರೇಗಾ ಕಾಮಗಾರಿ ಸ್ಥಳಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಬುಧವಾರ ಪರಿಶೀಲಿಸಿ ಮಾತನಾಡಿದರು.

‘ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿರುವ ಕಾರಣ ನಗರ ಪ್ರದೇಶದಲ್ಲಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಗಳಿಗೆ ಹಿಂದಿರುಗುತ್ತಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿದ್ದರೆ ಗ್ರಾಮಗಳಲ್ಲೂ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಹೀಗಾಗಿ ಕಾರ್ಯಪಡೆಗಳು ಸೋಂಕು ಹರಡುವಿಕೆ ತಡೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ನಗರಗಳಿಂದ ಗ್ರಾಮಗಳಿಗೆ ವಾಪಸ್ ಬಂದಿರುವ ಜನರನ್ನು ಪತ್ತೆ ಹಚ್ಚಿ ಅವರಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಬೇಕು. ಕೊರೊನಾ ಸೋಂಕು ದೃಢಪಟ್ಟು ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಜತೆಗೆ ನಿಯಮಿತವಾಗಿ ಸೋಂಕಿತರ ಆರೋಗ್ಯ ವಿಚಾರಿಸಬೇಕು’ ಎಂದು ಸೂಚಿಸಿದರು.

‘ಗ್ರಾಮಗಳಲ್ಲಿ 18 ವರ್ಷ ಮೀರಿದ ಪ್ರತಿ ವ್ಯಕ್ತಿಯೂ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು. ಕೊರೊನಾ ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಆಟೊ ಹಾಗೂ ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ಸಮುದಾಯ ಕಾಮಗಾರಿ: ‘ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣಕ್ಕೆ ನಗರ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆಗಳು, ಕೈಗಾರಿಗಳು, ಕಂಪನಿಗಳು ಸ್ಥಗಿತಗೊಂಡಿವೆ. ಇದರಿಂದ ಉದ್ಯೋಗವಿಲ್ಲದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗಕ್ಕೆ ವಲಸೆ ಬರುತ್ತಿದ್ದಾರೆ. ಈ ಜನರಿಗೆ ಕೆಲಸ ಕಲ್ಪಿಸುವ ನಿಟ್ಟಿನಲ್ಲಿ ಸಮುದಾಯ ಕಾಮಗಾರಿಗಳಿಗೆ ಒತ್ತು ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ’ ಎಂದು ವಿವರಿಸಿದರು.

‘ಗ್ರಾಮಗಳಲ್ಲಿ ನರೇಗಾ ಅಡಿ ಕೆರೆ, ಕುಂಟೆ ಹಾಗೂ ಕಾಲುವೆ ಪುನಶ್ಚೇತನದಂತಹ ಸಮುದಾಯ ಕಾಮಗಾರಿಗಳಿಗೆ ಹೆಚ್ಚು ಒತ್ತು ಕೊಡಬೇಕು. ಕಾಮಗಾರಿ ಸ್ಥಳದಲ್ಲಿ ಕೋವಿಡ್‌ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಅಂತರ ಪಾಲನೆ ಮತ್ತು ಮಾಸ್ಕ್‌ ಧರಿಸುವುದು ಕಡ್ಡಾಯ’ ಎಂದು ತಿಳಿಸಿದರು.

ಅರಾಭಿಕೊತ್ತನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕಅಯ್ಯೂರು ಗ್ರಾಮದಲ್ಲಿ ಜಲಶಕ್ತಿ ಅಭಿಯಾನದಡಿ ನಡೆಯುತ್ತಿರುವ ರಾಜಕಾಲುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಿಇಒ ಕಾಮಗಾರಿ ಸ್ಥಳದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು.

ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT