ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಸಾಕ್ಷರತೆ ಪ್ರಮಾಣ ಹೆಚ್ಚಿಸಿ

Last Updated 14 ಸೆಪ್ಟೆಂಬರ್ 2020, 14:42 IST
ಅಕ್ಷರ ಗಾತ್ರ

ಕೋಲಾರ: ‘ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಲೋಕ ಶಿಕ್ಷಣ ಸಮಿತಿ ಸಹಯೋಗದಲ್ಲಿ ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ ಅವರನ್ನು ಅಕ್ಷರಸ್ಥರಾಗಿ ಮಾಡಬೇಕು’ ಎಂದು ಸೂಚಿಸಿದರು.

‘ಶಾಲೆಯಿಂದ ಹೊರಗುಳಿದಿರುವ ಕೂಲಿ ಕಾರ್ಮಿಕರ ಮಕ್ಕಳಿಗೆ ಹಾಗೂ ಅಕ್ಕಪಕ್ಕದ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡಬೇಕು. ದೇಶದ ಭವಿಷ್ಯದ ಪ್ರಜೆಗಳಾದ ಮಕ್ಕಳು ಸುಶಿಕ್ಷಿತರಾಗಬೇಕು. ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸಬೇಕು’ ಎಂದು ಸಲಹೆ ನೀಡಿದರು.

‘1965ರಲ್ಲಿ ಇರಾನ್‌ನ ಟೆಹ್ರಾನ್‌ನಲ್ಲಿ ನಡೆದ ಶಿಕ್ಷಣ ಸಚಿವರ ಸಭೆಯಲ್ಲಿ ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನ ಆಚರಿಸಲು ತೀರ್ಮಾನಿಸಲಾಯಿತು. ಅಂದಿನಿಂದ ಸಾಕ್ಷರತಾ ದಿನ ಆಚರಿಸಲಾಗುತ್ತಿದೆ. ಜಿಲ್ಲೆಯ 6 ತಾಲ್ಲೂಕುಗಳಲ್ಲೂ ಸಾಕ್ಷರತಾ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಾರ್ಯಕ್ರಮ ಅಧಿಕಾರಿ ಡಿ.ಆರ್‌.ರಾಜಪ್ಪ ವಿವರಿಸಿದರು.

ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ ಸಾಕ್ಷರತಾ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮೈಲಾರಪ್ಪ, ಸಹಾಯಕ ಯೋಜನಾಧಿಕಾರಿ ವಸಂತ್ ಹಾಗೂ ತಾಲ್ಲೂಕು ಮಟ್ಟದ ಸಾಕ್ಷರತಾ ಪ್ರೇರಕರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT