ಸೋಮವಾರ, ಏಪ್ರಿಲ್ 6, 2020
19 °C
ಕೊರೊನಾ ಸೋಂಕು: ಸಭೆಯಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ ಮನವಿ

ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿದೆ. ಸೋಂಕು ತಡೆಗೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮನವಿ ಮಾಡಿದರು.

ಕೊರೊನಾ ಸೋಂಕಿನ ಸಂಬಂಧ ಇಲ್ಲಿ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿ, ‘ಪಕ್ಕದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಜತೆಗೆ ಹೆಚ್ಚು ನಂಟು ಇರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅನಿವಾರ್ಯ’ ಎಂದರು.

‘ಜಿಲ್ಲೆಯ ಮೂಲಕ ಹಾದು ಹೋಗುವ ಹೆದ್ದಾರಿಗಳ ಬದಿಯಲ್ಲಿ ಸಣ್ಣ ವಾಹನಗಳನ್ನು ನಿಲ್ಲಿಸಿಕೊಂಡು ತಿಂಡಿ ತಿನಿಸು ಮಾರಾಟ ಮಾಡಲಾಗುತ್ತಿತ್ತು. ಅಂತಹ ಸ್ಥಳಗಳಲ್ಲಿ ಹೆಚ್ಚು ಜನ ಸೇರುತ್ತಿದ್ದರಿಂದ ಆ ವಾಹನಗಳನ್ನು ತೆರವು ಮಾಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಹೋಟೆಲ್‌ಗಳ ಅಡುಗೆ ಮನೆ ತೆರೆದು ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ಪಾರ್ಸಲ್ ನೀಡಲು ಅವಕಾಶ ನೀಡಲಾಗಿದೆ. ಆದರೆ, ಹೋಟೆಲ್‌ಗಳಲ್ಲೇ ಸೇವನೆಗೆ ಅವಕಾಶವಿಲ್ಲ. ನಗರಸಭೆ ಆಯುಕ್ತರು, ಪುರಸಭೆಗಳ ಮುಖ್ಯಾಧಿಕಾರಿಗಳು ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು. ಮದ್ಯದಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು’ ಎಂದು ಹೇಳಿದರು.

‘ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದನ್ನು ಸಹ ನಿರ್ಬಂಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿ ಪ್ರಯಾಣಿಕರನ್ನು ಕರೆದೊಯ್ದರೆ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಹೋಂ ಕ್ವಾರಂಟೈನ್: ‘ಜಿಲ್ಲೆಯಲ್ಲಿ ಈವರೆಗೆ 138 ಮಂದಿ ಮನೆಗಳಲ್ಲೇ ಪ್ರತ್ಯೇಕ ನಿಗಾದಲ್ಲಿ (ಹೋಂ ಕ್ವಾರಂಟೈನ್) ಇದ್ದಾರೆ. ಇವರು ಮನೆಯಿಂದ ಹೊರ ಹೋಗದಂತೆ ಆಯಾ ತಾಲ್ಲೂಕು ವೈದ್ಯಾಧಿಕಾರಿಗಳು ಎಚ್ಚರ ವಹಿಸಬೇಕು. ಹೋಂ ಕ್ವಾರಂಟೈನ್ ಅನುಷ್ಠಾನ ಹೇಗೆ ನಡೆಯುತ್ತಿದೆ ಎಂಬ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಯು ಇಲಾಖೆ ಸಿಬ್ಬಂದಿಯೊಂದಿಗೆ ಮನೆಗಳಿಗೆ ಜತೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ಆದೇಶಿಸಿದರು.

‘ನೆರೆಯ ರಾಜ್ಯಗಳಿಂದ ಜಿಲ್ಲೆಗೆ ಜನ ಸಂಚಾರ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಗಡಿ ಭಾಗದಲ್ಲಿ 12 ಕಡೆ ಹಾಗೂ ಜಿಲ್ಲೆಯೊಳಗೆ 5 ಕಡೆ ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಸರ್ಕಾರ ಹಾಗೂ ಸಾರಿಗೆಇಲಾಖೆ ಮಾರ್ಗಸೂಚಿ ಅನ್ವಯ ಕ್ರಮ ತೆಗೆದುಕೊಳ್ಳಲಾಗಿದೆ. 144 (3) ಸೆಕ್ಷನ್ ಮಾರ್ಚ್‌ 31ರವರೆಗೆ ಮುಂದುವರಿಯಲಿದೆ’ ಎಂದು ತಿಳಿಸಿದರು.

ರೊಟೇಷನ್ ಪದ್ಧತಿ: ‘ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಶೇ 50ರಷ್ಟು ಕಾರ್ಮಿಕರಿಗೆ ಮಾತ್ರ ಕಾರ್ಯ ನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ. ಕಾರ್ಖಾನೆ ಮಾಲೀಕರು ರೊಟೇಷನ್ ಪದ್ಧತಿ ಅನುಸರಿಸಬೇಕು. ಈ ಬಗ್ಗೆ ತಹಶೀಲ್ದಾರ್‌ಗಳ ಗಮನಹರಿಸಿ ಕಾರ್ಮಿಕರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸರ್ಕಾರದ ಆದೇಶ ಪಾಲಿಸದ ಕಾರ್ಖಾನೆಗಳ ವಿರುದ್ಧ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಬೇಕು’ ಎಂದು ಸೂಚನೆ ನೀಡಿದರು.

‘ವಿದೇಶದಲ್ಲಿ ನೆಲೆಸಿರುವ ಜಿಲ್ಲೆಯವರು ವಾಪಸ್‌ ಬಂದರೆ ಆ ಬಗ್ಗೆ ಅಂಜುಮಾನ್ ಇಸ್ಲಾಮಿಯಾ ಸಂಘಟನೆಯು ಮಾಹಿತಿ ನೀಡಬೇಕು. ಕೊರೊನಾ ಸೋಂಕಿನ ಸಂಬಂಧ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸಬೇಕು. ಮಾರ್ಚ್‌ 31ರವರೆಗೆ ಎಲ್ಲರೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು’ ಎಂದು ಹೇಳಿದರು.

ಮನೆಯಲ್ಲೇ ಹಬ್ಬ ಆಚರಿಸಿ: ‘ಯುಗಾದಿ ಸೇರಿಂದತೆ ಇತರೆ ಹಬ್ಬಗಳು ಬರಲಿವೆ. ಜನಗಳು ಹೊರಗೆ ಬಾರದೆ ಮನೆಗಳಲ್ಲೇ ಹಬ್ಬ ಆಚರಿಸಬೇಕು. ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿ ವಾಹನ ಹಾಗೂ ವ್ಯಕ್ತಿಯನ್ನೂ ತಪಾಸಣೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಮಾಹಿತಿ ನೀಡಿದರು.

ಮನೆಯಲ್ಲೇ ಇರಿ: ‘ಜಿಲ್ಲೆಯಲ್ಲಿ ಭಾನುವಾರದವರೆಗೆ (ಮಾರ್ಚ್‌ 22) 124 ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದರು. ಸೋಮವಾರ ಹೊಸದಾಗಿ 14 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಇವರು ಮನೆಯಿಂದ ಹೊರಗೆ ಹೋಗದಂತೆ ನಿಗಾ ವಹಿಸಲು ನಗರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಮಾರ್ಚ್‌ 31ರವರೆಗೆ ಮನೆಗಳಲ್ಲೇ ಇದ್ದರೆ ಒಳ್ಳೆಯದು. ಜನರು ಯಾವುದೇ ಕಾರಣಕ್ಕೂ ಜಿಲ್ಲಾ ಕೇಂದ್ರಕ್ಕೆ ಬರಬಾರದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್‌ಕುಮಾರ್ ಕೋರಿದರು.

ಜಿಲ್ಲಾಧಿಕಾರಿ ಸಭೆ ನಂತರ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಐಸೂಲೇಷನ್‌ ವಾರ್ಡ್‌ ಪರಿಶೀಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ, ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್, ಕೆಜಿಎಫ್ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು