ಶುಕ್ರವಾರ, ಜುಲೈ 1, 2022
27 °C
ಜಿಲ್ಲೆಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ

ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘2021-22ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ 6ರಿಂದ 8ನೇ ತರಗತಿ ಶಿಕ್ಷಕ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಡೆಸುತ್ತಿರುವ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗೆ 1,004 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದು, ಪರೀಕ್ಷಾ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ' ಎಂದು ಜಿಲ್ಲಾಧಿಕಾರಿ ವೆಂಕಟ್‍ರಾಜಾ ತಿಳಿಸಿದರು.

ಪರೀಕ್ಷೆ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿ, ‘ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ನಿಗಾ ವಹಿಸಿ. ಪರೀಕ್ಷೆ ನಡೆಯುವ ಮೇ 21 ಹಾಗೂ 22ರಂದು ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗುತ್ತದೆ. ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಗಮನಹರಿಸಿ’ ಎಂದು ಸೂಚಿಸಿದರು.

‘ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು, ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶ ನಿರ್ಬಂಧಿಸಿ. ಕೇಂದ್ರದಲ್ಲಿ ಕ್ಯಾಮೆರಾ, ಮೊಬೈಲ್ ಬಳಕೆಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಅನುಮಾನಾಸ್ಪದ ವರ್ತನೆಗಳು ಕಂಡು ಬಂದರೆ ಕಠಿಣ ಕ್ರಮ ಜರುಗಿಸುತ್ತೇವೆ’ ಎಂದು ಖಡಕ್‌ ಎಚ್ಚರಿಕೆ ನೀಡಿದರು.

‘ಜಿಲ್ಲಾ ಕೇಂದ್ರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿನ್ಮಯ ವಿದ್ಯಾಲಯದಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದ್‌ ಮಾಡಿಸಬೇಕು’ ಎಂದರು.

2 ಹಂತದ ತಪಾಸಣೆ: ‘ವಿಶೇಷವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ 2 ಹಂತದ ತಪಾಸಣೆಗೆ ಒಳಪಡಬೇಕಾಗುತ್ತದೆ. ಮೊದಲನೇ ಹಂತದಲ್ಲಿ ಪರೀಕ್ಷಾ ಸಿಬ್ಬಂದಿ ಅಭ್ಯರ್ಥಿಗಳನ್ನು ಗುರುತಿಸಿ ನಿಷೇಧಿತ ವಸ್ತುಗಳಾದ ಮೊಬೈಲ್, ಬ್ಲೂಟೂತ್ ಡಿವೈಸ್, ಕ್ಯಾಲುಕಲೇಟರ್, ಕೈಗಡಿಯಾರ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಇಲ್ಲದಿರುವ ಬಗ್ಗೆ ಪರಿಶೀಲಿಸುತ್ತಾರೆ’ ಎಂದು ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ ನೀಡಿದರು.

‘2ನೇ ಹಂತದಲ್ಲಿ ಪೊಲೀಸ್‌ ಸಿಬ್ಬಂದಿ ಲೋಹ ಶೋಧಕ (ಮೆಟಲ್ ಡಿಟೆಕ್ಟರ್) ಮೂಲಕ ನಿಷೇಧಿತ ವಸ್ತುಗಳ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡುತ್ತಾರೆ. ಅಭ್ಯರ್ಥಿಗಳು ಪ್ರವೇಶಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ದಿನದಂದು ಬೆಳಿಗ್ಗೆ 9.30ಕ್ಕೆ ಹಾಗೂ ಮಧ್ಯಾಹ್ನದ ಅಧಿವೇಶನಕ್ಕೆ 2 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿ ತಪಾಸಣೆಗೆ ಒಳಪಡುವುದು ಕಡ್ಡಾಯ’ ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.