ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಿ

ಗಾಂಧಿ ಜಯಂತಿಯಲ್ಲಿ ಸಂಸದ ಮುನಿಸ್ವಾಮಿ ಕಿವಿಮಾತು
Last Updated 2 ಅಕ್ಟೋಬರ್ 2019, 14:07 IST
ಅಕ್ಷರ ಗಾತ್ರ

ಕೋಲಾರ: ‘ಮಹಾತ್ಮ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ಕಿವಿಮಾತು ಹೇಳಿದರು.

ಜಿಲ್ಲಾಡಳಿತವು ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಉದ್ಘಾಟಿಸಿ ಮಾತನಾಡಿ, ‘ಅಹಿಂಸೆಯ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಗಾಂಧೀಜಿಯ ತತ್ವಾದರ್ಶ ಸಮಾಜಕ್ಕೆ ದಾರಿದೀಪ’ ಎಂದು ಅಭಿಪ್ರಾಯಪಟ್ಟರು.

‘ಗಾಂಧೀಜಿಯು ದೇಶದ ಒಳಿತಿಗಾಗಿ ಸಾಕಷ್ಟು ಕನಸು ಕಂಡಿದ್ದರು. ಅವರ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಣ ತೊಡಬೇಕು. ಜಿಲ್ಲಾ ಕೇಂದ್ರದಲ್ಲಿನ ಕಸದ ಸಮಸ್ಯೆ ಪರಿಹರಿಸಿ ಕೋಲಾರವನ್ನು ಸುಂದರ ನಗರವಾಗಿಸಲು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಕೇಂದ್ರ ಸರ್ಕಾರವು ಸ್ವಚ್ಛ ಭಾರತಕ್ಕಾಗಿ ಜನ ಜಾಗೃತಿ ಆಂದೋಲನ ಆರಂಭಿಸಿದೆ. ದೇಶದ 543 ಲೋಕಸಭಾ ಕ್ಷೇತ್ರಗಳ ಸದಸ್ಯರು 150 ಕಿ.ಮೀ ಪಾದಯಾತ್ರೆ ಕೈಗೊಂಡು ನೀರಿನ ಮಹತ್ವ, ಸ್ವಚ್ಛತೆಯ ಅರಿವು, ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣ, ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುತ್ತಾರೆ’ ಎಂದು ವಿವರಿಸಿದರು.

‘ದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಇದರಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಿದ್ದು, ಜನರು ಸ್ವಯಂಪ್ರೇರಿತರಾಗಿ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ತ್ಯಜಿಸಬೇಕು. ಪ್ಲಾಸ್ಟಿಕ್‌ನ ದುಷ್ಪರಿಣಾಮದ ಬಗ್ಗೆ ವಿದ್ಯಾರ್ಥಿಗಳು ಪೋಷಕರನ್ನು ಜಾಗೃತಗೊಳಿಸಬೇಕು’ ಎಂದು ಮನವಿ ಮಾಡಿದರು.

ಸಮ ಸಮಾಜ: ‘ಗಾಂಧೀಜಿ ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ಆದರೆ, ದೇಶದಲ್ಲಿ ಜಾತೀಯತೆ, ತಾರತಮ್ಯ ಹೆಚ್ಚುತ್ತಿದೆ. ಸುಶಿಕ್ಷಿತ ವರ್ಗದ ಜನರಲ್ಲೇ ಜಾತೀಯತೆ ಬಲವಾಗಿರುವುದು ದುರಂತ. ಜಾತಿ, ಕುಲ, ಮತ, ಧರ್ಮದ ಹೆಸರಲ್ಲಿ ಭೇದ ಭಾವ ಮಾಡಬಾರದು. ಆಗ ಮಾತ್ರ ಗಾಂಧೀಜಿಯ ಕನಸಿನ ಸಮ ಸಮಾಜ ಕಟ್ಟಬಹುದು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

‘ದೇಶದ ಸ್ವಾತಂತ್ರ್ಯಕ್ಕಾಗಿ ಸಾಕಷ್ಟು ಚಳವಳಿ ನಡೆದವು. ಈ ಹೋರಾಟಕ್ಕೆ ಗಾಂಧೀಜಿಯವರು ಬಂದ ನಂತರ ಇದು ದೊಡ್ಡ ಆಂದೋಲನವಾಗಿ ಹೊರಹೊಮ್ಮಿತು. ದೇಶದ ಸಂಸ್ಕೃತಿ ಗ್ರಾಮಗಳಲ್ಲಿ ಅಡಗಿದೆ. ಗ್ರಾಮಗಳ ಉದ್ಧಾರವಾದರೆ ಮಾತ್ರ ದೇಶದ ಉದ್ಧಾರ ಸಾಧ್ಯ ಎಂಬುದು ಗಾಂಧೀಜಿಯ ನಂಬಿಕೆಯಾಗಿತ್ತು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ವಿವರಿಸಿದರು.

‘ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧ ಸಂಬಂಧ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಅ.7ರೊಳಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್ ಶೇಖರಿಸಿ ವಿಲೇವಾರಿ ಮಾಡಲಾಗುವುದು. ಪ್ಲಾಸ್ಟಿಕ್ ಬಳಕೆ ಮುಕ್ತ ದೇಶ ನಿರ್ಮಾಣಕ್ಕೆ ದೃಢ ಸಂಕಲ್ಪ ಮಾಡಬೇಕು’ ಎಂದು ಕೋರಿದರು.

ಕಿರುಚಿತ್ರ ಪ್ರದರ್ಶನ: ಗಾಂಧೀಜಿ ಜೀವನ ಚರಿತ್ರೆ ಪರಿಚಯಿಸುವ ಪಾಪು-–ಬಾಪು ಪುಸ್ತಕ ಬಿಡುಗಡೆಗೊಳಿಸಲಾಯಿತು. ಗಾಂಧೀಜಿಯ ಜೀವನ, ಹೋರಾಟ, ಸಂದೇಶವನ್ನು ಪರಿಚಯಿಸುವ ಕಿರುಚಿತ್ರ ಪ್ರದರ್ಶಿಸಲಾಯಿತು. ಚಿನ್ಮಯ ಶಾಲಾ ಮಕ್ಕಳು ಗಾಂಧೀಜಿ ಕುರಿತ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಪಿಯುಸಿ ಕನ್ನಡ ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ.ಜಿ.ನಾಗರಾಜ್ ಉಪನ್ಯಾಸ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ನಗರದ ಬಡಾವಣೆಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ, ಸದಸ್ಯ ಚಿನ್ನಸ್ವಾಮಿಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ, ಮಾಜಿ ಶಾಸಕ ವೈ.ಸಂಪಂಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರತ್ನಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT