ಮಂಗಳವಾರ, ಜನವರಿ 21, 2020
28 °C

ಮಂಗಳೂರು ಗೋಲಿಬಾರ್‌| ಅಮಾಯಕರು ಬಲಿ: ಎಚ್‌.ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಮಂಗಳೂರಿನಲ್ಲಿ ನಡೆದ ಪೊಲೀಸ್‌ ಗೋಲಿಬಾರ್‌ನಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ದಾರೆ. ಇಂತಹ ಘಟನೆ ಮರುಕಳಿಸಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗುಂಪು ಘರ್ಷಣೆಗೆ ಅಮಾಯಕರು ಬಲಿಯಾಗಿದ್ದಾರೆ. ಇಂತಹ ಘಟನೆ ಮರುಕಳಿಸಬಾರದೆಂಬ ಕಾರಣಕ್ಕೆ ಪೊಲೀಸರು ಕಾಂಗ್ರೆಸ್‌್ ಮುಖಂಡರನ್ನು ಮಂಗಳೂರು ಪ್ರವೇಶಿಸದಂತೆ ತಡೆದಿರುವುದು ಸರಿಯಾಗಿದೆ’ ಎಂದು ಪೊಲೀಸರ ಕ್ರಮ ಸಮರ್ಥಿಸಿಕೊಂಡರು.

‘ಮುಸ್ಲಿಂ ಸಮುದಾಯದವರು ಹಾಗೂ ಕೆಲ ಸಂಘಟನೆಗಳ ಸದಸ್ಯರು ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಕೋಲಾರದಲ್ಲಿ ಸೋಮವಾರ (ಡಿ.23) ಹೋರಾಟ ನಡೆಸಲು ಉದ್ದೇಶಿಸಿದ್ದಾರೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮುಸ್ಲಿಂ ಸಮುದಾಯದವರಿಗೆ ಮನವಿ ಮಾಡಿದ್ದಾರೆ. ಜತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ’ ಎಂದು ವಿವರಿಸಿದರು.

‘ಜಿಲ್ಲೆಯ ಜನ ಶಾಂತಿ ಪ್ರಿಯರು. ಈ ಹಿಂದೆ ಜಿಲ್ಲೆಯಲ್ಲಿ ಕೋಮುಗಲಭೆ ನಡೆದ ಉದಾಹರಣೆಯಿಲ್ಲ. ಮುಸ್ಲಿಮರು ಮತ್ತು ಹಿಂದೂಗಳು ಸಹೋದರರಂತೆ ಬಾಳುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯು ಪ್ರತಿಭಟನೆ ಮಾಡದಂತೆ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುವ ಪ್ರಯತ್ನ ಮುಂದುವರಿಸಿದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಂತೆ ಜಿಲ್ಲೆಯಲ್ಲೂ ಬಿಜೆಪಿ ಸದೃಢವಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಸ್ಥಳೀಯ ಮುಖಂಡರು ಕಾರ್ಯೋನ್ಮುಖರಾದರೆ ಸಹಕಾರ ಕೊಡುತ್ತೇನೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು