ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾವು: ಬೆಂಬಲ ಬೆಲೆಗೆ ಮನವಿ

Last Updated 21 ಜೂನ್ 2021, 16:06 IST
ಅಕ್ಷರ ಗಾತ್ರ

ಕೋಲಾರ: ರಾಜ್ಯ ಸರ್ಕಾರವು ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ₹ 10 ಸಾವಿರ ಬೆಂಬಲ ಬೆಲೆ ಘೋಷಿಸಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ ಸಚಿವ ಆರ್.ಶಂಕರ್ ಅವರಿಗೆ ಪತ್ರ ಬರೆದಿರುವ ನಾರಾಯಣಸ್ವಾಮಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ. ರಾಜ್ಯದಲ್ಲಿ ಶೇ 70ರಷ್ಟು ಮಾವನ್ನು ಈ ಜಿಲ್ಲೆಗಳಲ್ಲೇ ಬೆಳೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶ ವಿದೇಶಕ್ಕೆ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲ. ವ್ಯಾಪಾರಿಗಳು, ದಲ್ಲಾಳಿಗಳ ಹಾವಳಿಯಿಂದ ಪ್ರತಿ ಟನ್ ಮಾವಿಗೆ ಕೇವಲ ₹ 5 ಸಾವಿರ ಬೆಲೆ ನೀಡಿ ರೈತರನ್ನು ವಂಚಿಸಲಾಗುತ್ತಿದೆ ಎಂದು ದೂರಿದ್ದಾರೆ.

ಒಂದು ಎಕರೆ ಮಾವು ಬೆಳೆಯಲು ₹ 15 ಸಾವಿರದಿಂದ ₹ 20 ಸಾವಿರ ಖರ್ಚಾಗುತ್ತದೆ. ಆದರೆ, ಬೆಲೆ ಕುಸಿತದಿಂದಾಗಿ ಬೆಳೆಗೆ ಮಾಡಿದ ಖರ್ಚಿನ ಹಣ ಸಹ ರೈತರಿಗೆ ಸಿಗುತ್ತಿಲ್ಲ. ಇದರಿಂದ ಕಂಗಾಲಾಗಿರುವ ಮಾವು ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ಶೀಘ್ರವೇ ರೈತರ ರಕ್ಷಣೆಗೆ ಬರಬೇಕು. ಪ್ರತಿ ಟನ್ ಮಾವಿಗೆ ₹ 10 ಸಾವಿರ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ₹ 25 ಸಾವಿರ ವಿಶೇಷ ಪರಿಹಾರ ಪ್ಯಾಕೇಜ್‌ ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT