ಭಾನುವಾರ, ಮೇ 22, 2022
21 °C
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ್ ಕಳವಳ

ಮಲ ಹೊರುವ ಪದ್ಧತಿ ಜೀವಂತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜೀತದಾಳು ಹಾಗೂ ಮಲ ಹೊರುವ ಪದ್ಧತಿಯು ಕಾನೂನುಬಾಹಿರ. ದೇಶದಲ್ಲಿ ಇಂದಿಗೂ ಈ ಪದ್ಧತಿ ಜೀವಂತವಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪ್ರತಿ ವ್ಯಕ್ತಿಯು ಗೌರವಯುತ ಕೆಲಸ ಮಾಡಿ ಬದುಕಲು ಸಂವಿಧಾನ ಅವಕಾಶ ಕಲ್ಪಿಸಿದೆ’ ಎಂದರು.

‘ದೇಶದಲ್ಲಿ ಜೀತದಾಳು ಹಾಗೂ ಮಲ ಹೊರುವ ಪದ್ಧತಿ ನಿರ್ಮೂಲನೆಗೆ ಕಾನೂನು ಜಾರಿಗೆ ತರಲಾಗಿದೆ. ಆದರೆ, ಇಂದಿಗೂ ನಿರ್ಮೂಲನೆ ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಈ ವೃತ್ತಿ ಮಾಡುವವರನ್ನು ಬೇರೆ ವೃತ್ತಿಯಲ್ಲಿ ತೊಡಗಿಸಲು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲದಿರುವುದು’ ಎಂದು ಅಭಿಪ್ರಾಯಪಟ್ಟರು.

‘ಕೇಂದ್ರ ಸರ್ಕಾರ 2013ರಲ್ಲಿ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿ ಕಾಯ್ದೆ ಜಾರಿಗೊಳಿಸಿತು. ಈ ಕಾಯ್ದೆ ಪ್ರಕಾರ ಸಫಾಯಿ ಕರ್ಮಚಾರಿಗಳನ್ನು ಕೆಲಸಕ್ಕೆ ನೇಮಿಸಿಕೊಂಡರೆ 1 ವರ್ಷ ಜೈಲು ಮತ್ತು ₹ 50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. 2ನೇ ಬಾರಿಗೆ ಕಾಯ್ದೆ ಉಲ್ಲಂಘಿಸಿದರೆ 2 ವರ್ಷ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ಅಥವಾ ಎರಡನ್ನೂ ವಿಧಿಸಬಹುದು’ ಎಂದು ಮಾಹಿತಿ ನೀಡಿದರು.

‘ಪ್ರಾಧಿಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉಚಿತವಾಗಿ ಕಾನೂನು ಸೇವೆ ನೀಡಲಾಗುತ್ತಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ₹ 3 ಲಕ್ಷಕ್ಕಿಂತ ಕಡಿಮೆ ಆದಾಯವುಳ್ಳ ಎಲ್ಲರೂ ಈ ಸೇವೆ ಪಡೆಯಬಹುದು’ ಎಂದು ತಿಳಿಸಿದರು.

ಮುಖ್ಯವಾಹಿನಿಗೆ ಬನ್ನಿ: ‘ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಮುಖ್ಯವಾಹಿನಿಗೆ ಬರಬೇಕು. ಸ್ವಚ್ಛತಾ ಕಾರ್ಯದ ನಿರ್ವಹಣೆಯು ಸಮಾಜಕ್ಕೆ ಅತ್ಯಗತ್ಯ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಲದ ಗುಂಡಿಗಳನ್ನು ಸ್ವಚ್ಛಗೊಳಿಸಲು ಯಂತ್ರೋಪಕರಣ ಬಳಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಅಥವಾ ಸಫಾಯಿ ಕರ್ಮಚಾರಿಗಳನ್ನು ಮಲದ ಗುಂಡಿಗೆ ಇಳಿಸುವಂತಿಲ್ಲ’ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ ಸೂಚಿಸಿದರು.

‘ಸಫಾಯಿ ಕರ್ಮಚಾರಿಗಳಿಗೆ ನೇರ ಸಾಲ ಯೋಜನೆ ಕಲ್ಪಿಸಬೇಕು. ಅವರನ್ನು ಮಲದ ಗುಂಡಿಗೆ ಇಳಿಸದೆ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಬಳಸಿ ಸ್ವಚ್ಛತಾ ಕಾರ್ಯ ನಿರ್ವಹಿಸುವಂತೆ ತಿಳಿವಳಿಕೆ ನೀಡಬೇಕು. ಅನೈರ್ಮಲ್ಯ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ಕಡ್ಡಾಯವಾಗಿ ಸುರಕ್ಷತಾ ಸಲಕರಣೆ ಬಳಸುವಂತೆ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

ಜಾಗೃತಿ ಶಿಬಿರ: ‘ಜಿಲ್ಲೆಯಲ್ಲಿ ಸದ್ಯ 411 ಸಫಾಯಿ ಕರ್ಮಚಾರಿಗಳಿದ್ದು, ಇವರಿಗೆ ಜಾಗೃತಿ ಶಿಬಿರ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ 2012–13ನೇ ಸಾಲಿನಲ್ಲಿ 148 ಸಫಾಯಿ ಕರ್ಮಚಾರಿಗಳಿಗೆ ತಲಾ ₹ 40 ಸಾವಿರ ನೀಡಲಾಗಿದೆ’ ಎಂದು ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ ವಿವರಿಸಿದರು.

‘ಸಫಾಯಿ ಕರ್ಮಚಾರಿಗಳಿಗೆ ಸ್ವಉದ್ಯೋಗ ಮಾಡಲು ಬ್ಯಾಂಕ್‌ಗಳಲ್ಲಿ ₹ 10 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ವಸತಿ ಇಲ್ಲದವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮದ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ನಿವೇಶನರಹಿತರಿಗೆ ನಿವೇಶನ ನೀಡಲು ಜಿಲ್ಲೆಯಲ್ಲಿ 110 ಎಕರೆ ಮೀಸಲಿಡಲಾಗಿದೆ’ ಎಂದು ಮಾಹಿತಿ ನೀಡಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿಚ್ಚಯ್ಯ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಾಲಾಜಿ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಎನ್‌.ಮಂಜುನಾಥ್‌ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.