ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.14ಕ್ಕೆ ಮೆಗಾ ಲೋಕ ಅದಾಲತ್

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್‌ ಮಾಹಿತಿ
Last Updated 8 ಜುಲೈ 2021, 14:32 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆ.14ರಂದು ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್.ನಾಗರಾಜ್‌ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಾದ್ಯಂತ ಆ.14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ 24 ಲೋಕ ಅದಾಲತ್ ಬೆಂಚ್‌ಗಳು ಕಾರ್ಯ ನಿರ್ವಹಿಸಲಿವೆ’ ಎಂದರು.

‘ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ. ಕಕ್ಷಿದಾರರು ಅದಾಲತ್‌ನ ಸದುಪಯೋಗ ಪಡೆಯಬೇಕು’ ಎಂದು ಮನವಿ ಮಾಡಿದರು.

‘ಲೋಕ ಅದಾಲತ್‌ನಲ್ಲಿ ಒಬ್ಬ ನ್ಯಾಯಾಧೀಶರು ಮತ್ತು ಒಬ್ಬ ವಕೀಲರು ಸೇರಿ ಪ್ರಕರಣಗಳ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡುತ್ತಾರೆ. ಸಿವಿಲ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಹಣಕಾಸು, ಕಾರ್ಮಿಕ, ಅಕ್ರಮ ಮರಳು ಸಾಗಾಣಿಕೆ, ಮನೆ ಬಾಡಿಗೆ ವಿವಾದ, ಕೌಟುಂಬಿಕ ಕಲಹ, ಭೂಸ್ವಾಧೀನ, ಸಾಲ ವಸೂಲಾತಿ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ’ ಎಂದು ವಿವರಿಸಿದರು.

‘ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರು ವಾಹನ ಅಪಘಾತ, ಕಾರ್ಮಿಕರ ವೇತನ ಹಾಗೂ ಉದ್ಯೋಗದಲ್ಲಿ ಪುನರ್ ಸ್ಥಾಪನೆ, ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಅನುಭೋಗದ ಹಕ್ಕು, ನಿರ್ಬಂಧಕಾಜ್ಞೆ ಮೊಕದ್ದಮೆಗಳನ್ನು ಕಕ್ಷಿದಾರರು ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಬಹುದು’ ಎಂದರು.

40,103 ಪ್ರಕರಣ: ‘ಜಿಲ್ಲೆಯ ನ್ಯಾಯಾಲಯಗಳಲ್ಲಿ 40,103 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಈ ಪೈಕಿ 6,290 ಪ್ರಕರಣಗಳು ರಾಜಿ ಆಗಬಹುದಾದ ಪ್ರಕರಣಗಳೆಂದು ಗುರುತಿಸಲಾಗಿದೆ. ಲೋಕ ಅದಾಲತ್‌ನಲ್ಲಿ ಪ್ರಕರಣಗಳು ಶೀಘ್ರ ವಿಲೇವಾರಿಯಾಗುತ್ತವೆ. ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ’ ಎಂದು ಮಾಹಿತಿ ನೀಡಿದರು.

‘ಅದಾಲತ್‌ನಲ್ಲಿ ನ್ಯಾಯ ವಿಳಂಬವಾಗದೆ ಶೀಘ್ರವಾಗಿ ದೊರೆಯುತ್ತದೆ. ಪರಸ್ಪರ ಒಪ್ಪಿಗೆಯಿಂದ ವ್ಯಾಜ್ಯ ಕೊನೆಗೊಳ್ಳುವುದರಿಂದ ಸಂಬಂಧಗಳು ಸುಧಾರಿಸುತ್ತವೆ. ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಶುಲ್ಕ ಪಾವತಿಸಬೇಕಿಲ್ಲ. ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ರಾಜಿ ಮಾಡಿಕೊಂಡರೆ ಮಾಡಿಕೊಂಡಲ್ಲಿ ನ್ಯಾಯಾಲಯದ ಶುಲ್ಕ ಮರುಪಾವತಿ ಮಾಡಲಾಗುತ್ತದೆ’ ಎಂದು ಹೇಳಿದರು.

‘ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದರೆ ಮಾತ್ರ ರಾಜಿ ಮಾಡಿಕೊಳ್ಳಬಹುದು. ಸಂಧಾನ ವಿಫಲವಾದರೆ ಆ ಪ್ರಕ್ರಿಯೆಯಲ್ಲಿ ಆದ ಚರ್ಚೆಗಳು ನ್ಯಾಯಾಲಯದ ತೀರ್ಮಾನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂರವಾಣಿ ಸಂಖ್ಯೆ 08152 228811ಕ್ಕೆ ಕರೆ ಮಾಡಬಹುದು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿ ಕಚೇರಿ ಸಂಪರ್ಕಿಸಬಹುದು’ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್‌.ಗಂಗಾಧರ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT