ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೆ.30ಕ್ಕೆ ಮೆಗಾ ಲೋಕ ಅದಾಲತ್‌

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಾಗರಾಜ್ ಹೇಳಿಕೆ
Last Updated 13 ಸೆಪ್ಟೆಂಬರ್ 2021, 12:48 IST
ಅಕ್ಷರ ಗಾತ್ರ

ಕೋಲಾರ: ‘ವ್ಯಾಜ್ಯವಿಲ್ಲದೆ ರಾಜಿ ಮೂಲಕ ಪ್ರಕರಣ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಿಕೊಡಲು ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಸೆ.30ರಂದು ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಆರ್.ನಾಗರಾಜ್ ತಿಳಿಸಿದರು.

ಮೆಗಾ ಅದಾಲತ್‌ ಸಂಬಂಧ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಸರ್ವರಿಗೂ ನ್ಯಾಯ ಎಂಬುದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯ. ಜನಸಾಮಾನ್ಯರಿಗೆ ತ್ವರಿತವಾಗಿ ಹಾಗೂ ವ್ಯಾಜ್ಯವಿಲ್ಲದೆ ಸಂಧಾನದ ಮೂಲಕ ನ್ಯಾಯ ಒದಗಿಸುವ ಸದುದ್ದೇಶ ಹೊಂದಲಾಗಿದೆ’ ಎಂದರು.

‘ಕೋಲಾರ ಜಿಲ್ಲೆಯಲ್ಲಿ ಸುಮಾರು 41 ಸಾವಿರ ಪ್ರಕರಣಗಳು ಬಾಕಿಯಿದ್ದು, ಈ ಪೈಕಿ ರಾಜಿ ಆಗಬಹುದಾದ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಲು ವಕೀಲರು ಹಾಗೂ ಕಕ್ಷಿದಾರರು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಅದಾಲತ್‌ನಲ್ಲಿ ರಾಜಿ ಮೂಲಕ ಪ್ರಕರಣಗಳು ಇತ್ಯರ್ಥವಾದರೆ ಕಕ್ಷಿದಾರರಿಗೆ ಶೀಘ್ರ ನ್ಯಾಯ ಸಿಗುತ್ತದೆ. ಜತೆಗೆ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ. ಮಾನಸಿಕ ನೆಮ್ಮದಿಗೂ ಕಾರಣವಾಗುತ್ತದೆ ಮತ್ತು ಪ್ರಕರಣದಲ್ಲಿ ಎರಡೂ ಕಡೆಯವರು ರಾಜಿಗೆ ಒಪ್ಪುವುದರಿಂದ ಗ್ರಾಮಗಳಲ್ಲಿ ಸಂಬಂಧಗಳು ಸುಧಾರಿಸುತ್ತವೆ’ ಎಂದು ಅಭಿಪ್ರಾಯಪಟ್ಟರು.

ಸದುಪಯೋಗ ಪಡೆಯಿರಿ: ‘ಮೆಗಾ ಲೋಕ ಅದಾಲತ್‌ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾರ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು. ಕಕ್ಷಿದಾರರು ಹಾಗೂ ಸಾರ್ವಜನಿಕರು ಅದಾಲತ್‌ನ ಸದುಪಯೋಗ ಪಡೆಯಬೇಕು’ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂತೋಷ್ ಗಜಾನನಭಟ್ ಮನವಿ ಮಾಡಿದರು.

‘ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಬಾವಿ ಬೈಠಕ್‌ ನಡೆಯಲಿದೆ. ಜಿಲ್ಲೆಯಲ್ಲಿ ಸುಮಾರು 6 ಸಾವಿರ ವಿವಿಧ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸುವ ಗುರಿಯಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಮಾಹಿತಿ ನೀಡಿದರು.

‘ಅತಿ ಹೆಚ್ಚಿನ ಪ್ರಕರಣಗಳು ಜಿಲ್ಲೆಯಲ್ಲಿ ಇತ್ಯರ್ಥವಾಗಲು ಸಹಕಾರ ನೀಡಬೇಕು. ಅದಾಲತ್‌ನಿಂದ ನ್ಯಾಯಾಲಯದ ಮೇಲಿನ ಒತ್ತಡ ಕಡಿಮೆಯಾಗಲಿದ್ದು, ಮತ್ತಷ್ಟು ರಾಜಿ ಸಂಧಾನಕ್ಕೆ ಉತ್ತೇಜನ ನೀಡಿದಂತೆ ಆಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಧೀಶರಾದ ಬಿ.ಪಿ.ದೇವಮಾನಿ, ಕನುಮಯ್ಯ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ರಘುಪತಿಗೌಡ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT