ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ಶಾಸಕ ಶ್ರೀನಿವಾಸಗೌಡ ಕಿವಿಮಾತು

Last Updated 24 ಜನವರಿ 2019, 14:19 IST
ಅಕ್ಷರ ಗಾತ್ರ

ಕೋಲಾರ: ‘ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ. ಎಲ್ಲರೂ ಒಗ್ಗೂಡಿ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಿವಿಮಾತು ಹೇಳಿದರು.

ನಗರದ ಅಂತರಗಂಗೆ ರಸ್ತೆಯ ವಿಭೂತಿಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ‘ಕ್ಷೇತ್ರದಲ್ಲಿ ಹಿಂದಿನ 10 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ. ಕೆಲವರು ಅಭಿವೃದ್ಧಿ ಹೆಸರಿನಲ್ಲಿ ಹಣ ಮಾಡಿಕೊಂಡರು’ ಎಂದು ಪರೋಕ್ಷವಾಗಿ ಮಾಜಿ ಶಾಸಕ ವರ್ತೂರು ಪ್ರಕಾಶ್‌ ವಿರುದ್ಧ ವಾಗ್ದಾಳಿ ನಡೆಸಿದರು.

‘ಕ್ಷೇತ್ರದಲ್ಲಿ ಬಹುತೇಕ ರಸ್ತೆಗಳು ಹಾಳಾಗಿವೆ. ನಾನು ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಮಾಡಿಸಿದ್ದ ರಸ್ತೆಗಳಿಗೆ ಡಾಂಬರು ಸಹ ಹಾಕಿಲ್ಲ. ಜನ ಹಿಂದಿನ 2 ಚುನಾವಣೆಗಳಲ್ಲಿ ವಿಶ್ರಾಂತಿ ನೀಡಿದ್ದರು. ಈ ಬಾರಿ 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಆಶೀರ್ವಾದದಿಂದ ಮತ್ತೊಮ್ಮೆ ಶಾಸಕನಾಗಿದ್ದೇನೆ. ಜನರ ಆಶಯಕ್ಕೆ ಬದ್ಧನಾಗಿ ಅಭಿವೃದ್ಧಿ ಕೆಲಸಕ್ಕೆ ಆದ್ಯತೆ ನೀಡುತ್ತೇನೆ’ ಎಂದರು.

‘ಚುನಾವಣೆ ಬರುತ್ತವೆ ಹೋಗುತ್ತವೆ. ಆಗ ಮಾತ್ರ ಪಕ್ಷದಿಂದ ಗುರುತಿಸಿಕೊಳ್ಳುತ್ತೇನೆ. ಜನರ ಹಿತರಕ್ಷಣೆ ಹಾಗೂ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಈಗ ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

‘ವಿಭೂತಿಪುರ ಬಡಾವಣೆಯ ಜನರ ಬಹುದಿನಗಳ ಬೇಡಿಕೆಯಂತೆ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ ನಗರಸಭೆ ವತಿಯಿಂದ ಕೊಳವೆ ಬಾವಿ ಕೊರೆಸಲಾಗಿದೆ. ಕೊಳವೆ ಬಾವಿಯಿಂದ ನೀರು ಸರಬರಾಜಿಗೆ ಚಾಲನೆ ನೀಡಲಾಗಿದೆ. ಕಾಳಿದಾಸ ಬಡಾವಣೆ ಮತ್ತು ಕೀಲುಕೋಟೆಯ ಅಡ್ಡ ರಸ್ತೆಗಳಿಗೆ ಡಾಂಬರು ಹಾಕಿಸಲಾಗುತ್ತಿದೆ’ ಎಂದು ವಿವರಿಸಿದರು.

ಸಮಸ್ಯೆಗೆ ಪರಿಹಾರ: ‘ನಗರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ, ಅಮೃತ್ ಯೋಜನೆ ಮತ್ತು ನಗರೋತ್ಥಾನದ ಅನುದಾನದಲ್ಲಿ ಹಲವು ಯೋಜನೆ ರೂಪಿಸಿದ್ದು, ರಸ್ತೆ, ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.

‘ನಗರದ ಸುತ್ತ ವರ್ತುಲ ರಸ್ತೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ₹ 250 ಕೋಟಿ ಅಂದಾಜು ವೆಚ್ಚದಲ್ಲಿ ವರ್ತುಲ ರಸ್ತೆ ನಿರ್ಮಿಸಲಾಗುತ್ತದೆ. ಮೊದಲ ಹಂತದಲ್ಲಿ ₹ 81 ಕೋಟಿ ವೆಚ್ಚದಲ್ಲಿ 6 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ನಂತರ ಉಳಿದ ರಸ್ತೆ ನಿರ್ಮಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಕಟ್ಟಡ ನಿರ್ಮಿಸಿ: ‘ಬಡಾವಣೆಯ ಅಂಗನವಾಡಿ ಕೇಂದ್ರವು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸಿ ಕೊಡಬೇಕು’ ಎಂದು ವಿಭೂತಿಪುರ ನಿವಾಸಿ ವೆಂಕಟಸ್ವಾಮಿ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಶಾಸಕರು, ‘ಬಡಾವಣೆಯಲ್ಲಿನ ಸಮುದಾಯ ಭವನ ಶಿಥಿಲವಾಗಿದ್ದು, ಅದನ್ನು ಕೆಡವಿ ಆ ಜಾಗದಲ್ಲಿ ಅಂಗನವಾಡಿ ನಿರ್ಮಿಸುತ್ತೇವೆ’ ಎಂದು ತಿಳಿಸಿದರು.

ಕೋಚಿಮುಲ್‌ ನಿರ್ದೇಶಕ ರಾಮಕೃಷ್ಣ, ನಗರಸಭೆ ಮಾಜಿ ಸದಸ್ಯ ಕೃಷ್ಣಪ್ಪ, ವಕೀಲರಾದ ಗೋಪಾಲರೆಡ್ಡಿ, ವೆಂಕಟೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT