ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ: ಡಿಸಿಎಂ ಅಶ್ವತ್ಥನಾರಾಯಣ

ಚುನಾವಣಾ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ವಾಗ್ದಾಳಿ
Last Updated 22 ಅಕ್ಟೋಬರ್ 2020, 16:22 IST
ಅಕ್ಷರ ಗಾತ್ರ

ಕೋಲಾರ: ‘ಎಲ್ಲಾ ಸವಾಲು ಮೀರಿ ಬೆಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಆದರೆ, ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದರು.

ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ.ಗೌಡ ಪರ ಇಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಜಾಗತಿಕವಾಗಿ ಎಲ್ಲಾ ದೇಶಗಳು ಕೋವಿಡ್‌ನಿಂದ ತತ್ತರಿಸಿವೆ. ಮೋದಿ ಅವರ ಮುನ್ನೆಚ್ಚರಿಕೆಯಿಂದ ದೇಶದಲ್ಲಿ ಅನಾಹುತ ತಪ್ಪಿಸಲು ಸಾಧ್ಯವಾಗಿದೆ’ ಎಂದರು.

‘ಮೋದಿ ಅವರ ನೇತೃತ್ವದಲ್ಲಿ ದೇಶಕ್ಕೆ ಉತ್ತಮ ಭವಿಷ್ಯವಿದೆ. ಭಾರತವನ್ನು ಜಾಗತಿಕವಾಗಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಮೋದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ವಿಪಕ್ಷಗಳ ಮುಖಂಡರು ರಾಜಕೀಯ ದುರುದ್ದೇಶಕ್ಕಾಗಿ ಅಡ್ಡಿಪಡಿಸುತ್ತಿದ್ದಾರೆ’ ಎಂದು ದೂರಿದರು.

‘ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ನೀಡಿದ್ದಾರೆ. ಅನುಭವಿ ವ್ಯಕ್ತಿಯಾಗಿರುವ ಅವರ ಆಯ್ಕೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗುತ್ತದೆ. ಸುಶಿಕ್ಷಿತ ಪದವೀಧರ ಮತದಾರರು ಬಿಜೆಪಿ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲುವಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಪಕ್ಷಕ್ಕೆ ಶಕ್ತಿ ತುಂಬಿ: ‘ಅನುಭವಿ ಹಾಗೂ ಸುಶಿಕ್ಷಿತ ವ್ಯಕ್ತಿಯನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿದರೆ ಮಾತ್ರ ಸಫಲತೆ ಕಾಣಬಹುದು. ಚಿದಾನಂದಗೌಡ ಅವರನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕು. ಬಿಜೆಪಿ ಕೋಲಾರ ಜಿಲ್ಲೆಯ ಜನರ ಕೈಹಿಡಿದಿದೆ. ಸರ್ಕಾರ ಜಿಲ್ಲೆಗೆ ಎತ್ತಿನಹೊಳೆ ಯೋಜನೆಯಿಂದ ಕುಡಿಯುವ ನೀರು ನೀಡಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆ ರೂಪಿಸಲಾಯಿತು’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

‘ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಕುಸಿದಿದ್ದ ಆಡಳಿತವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಸಂಕಷ್ಟದ ನಡುವೆಯೂ ತಹಬಂದಿಗೆ ತಂದು ಪುನಶ್ಚೇತನ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಅಭಿಪ್ರಾಯಪಟ್ಟರು.

‘ಕೋವಿಡ್‌ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಸಿದ್ದರಾಮಯ್ಯ ಅವರು ಭಾರತದ ಹಾಗೂ ಜಗತ್ತಿಗೆ ಇತರೆ ದೇಶಗಳ ಜನಸಂಖ್ಯೆ ಎಷ್ಟು ಎಂಬುದನ್ನು ಮೊದಲು ತಿಳಿಯಬೇಕು. ದೇಶದಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಕಡಿಮೆಯಿದೆ. ಇದೀಗ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.

ಸಚಿವರಾದ ಡಾ.ಕೆ.ಸುಧಾಕರ್, ಎಚ್.ನಾಗೇಶ್, ಸಂಸದ ಎಸ್.ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಅಭ್ಯರ್ಥಿ ಚಿದಾನಂದಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ಪ್ರಭಾರಿ ಜಯಚಂದ್ರರೆಡ್ಡಿ, ಸಹ ಪ್ರಭಾರಿ ಪುಷ್ಪಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT