ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಂದೋಲನ

ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಹೇಳಿಕೆ
Last Updated 25 ಸೆಪ್ಟೆಂಬರ್ 2019, 15:55 IST
ಅಕ್ಷರ ಗಾತ್ರ

ಕೋಲಾರ: ‘ಬಿಹಾರ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲೂ ನವೆಂಬರ್‌ನಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಆಂದೋಲನ ಹಮ್ಮಿಕೊಳ್ಳಲಾಗುವುದು’ ಎಂದು ಸಂಯುಕ್ತ ಜನತಾ ದಳ (ಜೆಡಿಯು) ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಹೇಳಿದರು.

ಜೆಡಿಯು ಜಿಲ್ಲಾ ಅಲ್ಪಸಂಖ್ಯಾತರ ಘಟಕವು ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿ, ‘ಸಂಪೂರ್ಣವಾಗಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್‌ ಆಂದೋಲನ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ’ ಎಂದರು.

‘ಪಕ್ಷವು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಕೋಲಾರ ಜಿಲ್ಲೆಯನ್ನು ಪ್ರವಾಸೋದ್ಯಮ ಜಿಲ್ಲೆಯಾಗಿ ಮಾಡಲು ಸಂಕಲ್ಪ ಮಾಡಿದೆ. ಈ ಹಿಂದೆ ಜಿಲ್ಲೆಯ ತರಕಾರಿ, ಹಣ್ಣು ಗುಣಮಟ್ಟದಿಂದ ಕೊಡಿದ್ದವು ಮತ್ತು ರುಚಿಕರವಾಗಿದ್ದವು. ಆದರೆ, ಇತ್ತೀಚಿನ ವರ್ಷಗಳಲ್ಲಿ ವಾತಾವರಣ ವೈಪರೀತ್ಯ ಹಾಗೂ ರಾಸಾಯನಿಕಗಳ ಅತಿಯಾದ ಬಳಕೆಯಿಂದ ರುಚಿ ಮತ್ತು ಗುಣಮಟ್ಟ ಕಡಿಮೆಯಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯನ್ನು ಭವಿಷ್ಯದಲ್ಲಿ ಸಂಪದ್ಭರಿತ ಜಿಲ್ಲೆಯಾಗಿ ಮಾಡಲು ಪ್ರಯತ್ನಿಸುತ್ತೇವೆ. ರಾಜ್ಯದಲ್ಲಿ ಸಹಕಾರಿ ಯೋಜನೆಯಡಿ ಕೈಗಾರಿಕೆ ಸ್ಥಾಪನೆ ಮೂಲಕ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಭರವಸೆ ನೀಡಿದರು.

ಸಂಘಟನೆಗೆ ಒತ್ತು: ‘ಕಾರ್ಯಕರ್ತರು ಪಕ್ಷದಲ್ಲಿ ನೋಂದಣಿ ಮಾಡಿಸಿಕೊಂಡು ಸದಸ್ಯತ್ವ ಪಡೆಯುವ ಮೂಲಕ ಸಂಘಟನೆಗೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ಶಕ್ತಿ ಮೀರಿ ಪಕ್ಷ ಸಂಘಟಿಸಬೇಕು’ ಎಂದು ಜೆಡಿಯು ರಾಜ್ಯ ಘಟಕದ ಕಾರ್ಯಾಧ್ಯಕ್ಷ ಜಿ.ವಿ.ರಾಮಚಂದ್ರಯ್ಯ ಕಿವಿಮಾತು ಹೇಳಿದರು.

‘ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ಜೆಡಿಯು ಭ್ರಷ್ಟಾಚಾರ ಸಹಿಸುವುದಿಲ್ಲ ಮತ್ತು ಕುಮ್ಮಕ್ಕು ನೀಡುವುದಿಲ್ಲ. ಆದ ಕಾರಣ ಜೆಡಿಯು ಬೆಂಬಲಿಸುವ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಮನವಿ ಮಾಡಿದರು.

ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಕೆ.ನಾಗರಾಜ್, ಜಿಲ್ಲಾ ಘಟಕದ ಅಧ್ಯಕ್ಷ ಶೇಖ್ ಬಾಬಾಜಾನ್, ಕಾರ್ಯಾಧ್ಯಕ್ಷ ತಬ್ರೇಜ್‌ ಖಾನ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT