ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಕಚೇರಿ ಎದುರು ಸೇರಿದ ಪ್ರತಿಭಟನಕಾರರು, ರಾಜ್ಯಪಾಲರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಕೈಗೊಂಬೆ, ಪಕ್ಷಪಾತಿ, ಸಂವಿಧಾನದ ಕಗ್ಗೊಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮೆರವಣಿಗೆ ಮೂಲಕ ಮೆಕ್ಕೆ ವೃತ್ತದತ್ತ ತೆರಳಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಅವರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ರವಾನಿಸಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಕೆ.ವೈ.ನಂಜೇಗೌಡ, ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.