ಭಾನುವಾರ, ಸೆಪ್ಟೆಂಬರ್ 19, 2021
29 °C
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ

ಕೋಲಾರ ನಗರಸಭೆ ಚುನಾವಣೆ: ಕಾಂಗ್ರೆಸ್‌ಗೆ ಅಧಿಕಾರ ನಿಶ್ಚಿತ-ಮುನಿಯಪ್ಪ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯ ಮೂರೂ ನಗರಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಬಹುಮತ ದೊರೆಯಲಿದ್ದು, ಪಕ್ಷವು ಅಧಿಕಾರ ಹಿಡಿಯುವುದು ನಿಶ್ಚಿತ’ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಂಡಾಯ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆ ಸರಿದು ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯ ಕೋಲಾರ, ಮುಳಬಾಗಿಲು ಹಾಗೂ ಕೆಜಿಎಫ್‌ನ 101 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಪಕ್ಷದ ಮುಖಂಡರೆಲ್ಲಾ ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. 92 ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. 9 ವಾರ್ಡ್‌ಗಳಲ್ಲಿ ಬೇರೆ ಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸಲಾಗುತ್ತಿದೆ’ ಎಂದು ವಿವರಿಸಿದರು.

‘ಕೋಲಾರದ ಕೆಲ ವಾರ್ಡ್‌ಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕೆಲವರು ಬಂಡಾಯವಾಗಿ ಸ್ಪರ್ಧಿಸಿದ್ದಾರೆ. ಆ ಬಂಡಾಯ ಅಭ್ಯರ್ಥಿಗಳು ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬುದನ್ನು ಅರಿತು ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿ ಕಣದಿಂದ ಹಿಂದಕ್ಕೆ ಸರಿದು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಮುಂದೆ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುತ್ತೇವೆ’ ಎಂದು ಭರವಸೆ ನೀಡಿದರು.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ‘ಚುನಾವಣೆ ನಂತರ ಎಲ್ಲಾ ವಿಚಾರ ಮಾತನಾಡುತ್ತೇನೆ’ ಎಂದರು.

‘ಕೋಲಾರ ನಗರಸಭೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ಮುಖಂಡ ಸೈಯದ್ ಜಮೀರ್ ಪಾಷಾ ಅವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿತ್ತು. ಹೀಗಾಗಿ ನಿಷ್ಠಾವಂತರಿಗೆ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ ಆಗುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.

ಅಮೃತ್‌ ಸಿಟಿ: ‘ನಾನು ಸಂಸದನಾಗಿದ್ದ ಅವಧಿಯಲ್ಲಿ ಕೋಲಾರ ಮತ್ತು ಕೆಜಿಎಫ್ ನಗರಸಭೆಗೆ ಕೇಂದ್ರವು ಅಮೃತ್‌ ಸಿಟಿ ಯೋಜನೆ ಜಾರಿಗೊಳಿಸಿ ತಲಾ ₹ ೧೦೦ ಕೋಟಿ ಅನುದಾನ ಮಂಜೂರು ಮಾಡಿತು. ಈ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿ ಗುಣಮಟ್ಟ ಕಳಪೆಯಾಗಿದ್ದರೆ ಜಿಲ್ಲಾಧಿಕಾರಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಎತ್ತಿನಹೊಳೆ, ಕೆ.ಸಿ ವ್ಯಾಲಿ ನೀರಾವರಿ ಯೋಜನೆ ಜಾರಿ ಮಾಡಿದರು. ಎತ್ತಿನಹೊಳೆ ಕಾಮಗಾರಿ 3 ವರ್ಷದಲ್ಲಿ ಪೂರ್ಣಗೊಂಡು ಜಿಲ್ಲೆಗೆ ನೀರು ಬರಲಿದೆ. ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನರ ಆಶೋತ್ತರ ಈಡೇರಿಸಲು ಕ್ರಮ ವಹಿಸಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಟೀಕಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್.ಎ.ಮಂಜುನಾಥ್ ಅವರಿಗೆ ಮುನಿಯಪ್ಪ ಹಾಗೂ ಪಕ್ಷದ ಕಾರ್ಯಕರ್ತರು ಅಭಿನಂದಿಸಿದರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯಶಂಕರ್, ಪ್ರಸಾದ್‌ಬಾಬು, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್‌ಟಿ ಘಟಕದ ಅಧ್ಯಕ್ಷ ನಾಗರಾಜ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು