ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ನಾಶದಿಂದ ಪ್ರಾಕೃತಿಕ ಅಸಮತೋಲನ

Last Updated 18 ಅಕ್ಟೋಬರ್ 2019, 13:33 IST
ಅಕ್ಷರ ಗಾತ್ರ

ಕೋಲಾರ: ‘ಹಿಂದಿನ ಕಾಲದಲ್ಲಿ ಅರಣ್ಯ ಸಂಪತ್ತು ಸಮೃದ್ಧವಾಗಿತ್ತು. ಸಕಾಲಕ್ಕೆ ಮಳೆಯಾಗಿ ಕೆರೆ ಕುಂಟೆಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಆದರೆ, ಈಗ ಗಿಡ ಮರ ನಾಶದಿಂದ ವಾತಾವರಣ ಕಲುಷಿತಗೊಂಡು ಆರೋಗ್ಯ ಸಮಸ್ಯೆ ಎದುರಾಗಿದೆ’ ಎಂದು ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಡಳಿತವು ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಈ ಹಿಂದೆ ಖಾಲಿ ಜಾಗದಲ್ಲಿ ಗಿಡ ಮರ ಕಾಣುತ್ತಿದ್ದೆವು. ಆದರೆ, ಈಗ ಖಾಲಿ ಜಾಗದಲ್ಲಿ ಗಗನಚುಂಬಿ ಕಟ್ಟಡಗಳು ತಲೆ ಎತ್ತಿವೆ. ಅರಿವಿನ ಕೊರತೆಯಿಂದ ಮನುಷ್ಯ ಪರಿಸರದ ಮೇಲೆ ದಾಳಿ ನಡೆಸುತ್ತಿದ್ದು, ಪ್ರಾಕೃತಿಕ ಅಸಮತೋಲನವಾಗುತ್ತಿದೆ’ ಎಂದು ವಿಷಾದಿಸಿದರು.

‘ಮರ ಗಿಡ ಕಡಿದಿರುವುದರಿಂದ ಪ್ರಾಣಿ ಪಕ್ಷಿ ಸಂಕುಲ ನಾಶವಾಗುತ್ತಿದೆ. ಜನಸಂಖ್ಯೆಗೆ ಹೋಲಿಸಿದರೆ ಮರಗಳ ಸಂಖ್ಯೆ ಕಡಿಮೆಯಿದ್ದು, ಶುದ್ಧ ಗಾಳಿ ಸಿಗುತ್ತಿಲ್ಲ. ಇದರಿಂದ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಅರಣ್ಯ ನಾಶದಿಂದ ಭೂ ಸವಕಳಿ ಹೆಚ್ಚುತ್ತಿದೆ. ಜಲ ಮಾಲಿನ್ಯದಿಂದ ಅಂತರ್ಜಲ ಕಲುಷಿತಗೊಳ್ಳುತ್ತಿದೆ. ಜನ ಎಚ್ಚೆತ್ತು ಪರಿಸರ ಮಾಲಿನ್ಯ ತಡೆಯಬೇಕು. ಇಲ್ಲದಿದ್ದರೆ ಮನುಕುಲಕ್ಕೆ ಉಳಿಗಾಲವಿಲ್ಲ’ ಎಂದರು.

‘ಶಿಕ್ಷಕರು ಶಾಲಾ ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಬೇಕು. ಮರ ಗಿಡ ಬೆಳೆಸುವುದರಿಂದ ಆಗುವ ಪ್ರಯೋಜನದ ಬಗ್ಗೆ ವಿವರಿಸಬೇಕು. ಗ್ರಾಮದ ಖಾಲಿ ಜಾಗ ಹಾಗೂ ಶಾಲೆ ಆವರಣದಲ್ಲಿ ಸಸಿ ನೆಡಬೇಕು. ಹೆಚ್ಚಾಗಿ ಗಿಡ ಮರ ಬೆಳೆಸಿದರೆ ಕಾಲ ಕಾಲಕ್ಕೆ ಉತ್ತಮ ಮಳೆಯಾಗಿ ನೀರಿನ ಸಮಸ್ಯೆ ಬಗೆಹರಿಯುತ್ತದೆ’ ಎಂದು ಕಿವಿಮಾತು ಹೇಳಿದರು.

‘ತೆಂಗು, ಅಡಿಕೆ ಮರ ಬೆಳೆಸುವುದರಿಂದ ಆದಾಯದ ಜೊತೆಗೆ ಪರಿಸರ ಪೋಷಿಸಿದಂತಾಗುತ್ತದೆ. ಭಾರತ ಸರ್ಕಾರ ನನ್ನ ಸೇವೆ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿರುವುದಕ್ಕೆ ಸಂತೋಷವಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

‘ಸಾಲುಮರದ ತಿಮ್ಮಕ್ಕ ಅವರನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯ. ತಿಮ್ಮಕ್ಕ ಅವರು ಯಾರ ಸಹಾಯವಿಲ್ಲದೆ 385ಕ್ಕೂ ಹೆಚ್ಚು ಆಲದ ಮರ ನೆಟ್ಟು ಪೋಷಿಸಿದ್ದಾರೆ. ಅವರ ಜೀವನವೇ ದೊಡ್ಡ ಸಂದೇಶ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT