ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಆರೋಪಿಗಳ ಬಂಧನಕ್ಕೆ ಮೀನಮೇಷ: ಆರೋಪ

Last Updated 4 ಡಿಸೆಂಬರ್ 2021, 16:33 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಕರಿನಾಯಕನಹಳ್ಳಿಯಲ್ಲಿ ಹಲ್ಲೆಗೊಳಗಾಗಿದ್ದ ಹೋಂಡಾ ಕಂಪನಿ ಉದ್ಯೋಗಿ ಚಮತ್‌ರೆಡ್ಡಿ ಅವರ ಸ್ಥಿತಿ ಗಂಭೀರವಾಗಿದ್ದು, ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.‌

ಚಮತ್‌ರೆಡ್ಡಿ, ಮಾಲೂರು ತಾಲ್ಲೂಕಿನ ಕರಿನಾಯಕನಹಳ್ಳಿಯ ಬಾಡಿಗೆ ಮನೆಯಲ್ಲಿ ಸಹೋದ್ಯೋಗಿಗಳ ಜತೆ ವಾಸವಾಗಿದ್ದರು. ದುಷ್ಕರ್ಮಿಗಳು ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಪೋಷಕರು ಮಾಲೂರು ಠಾಣೆಗೆ ನ.9ರಂದು ದೂರು ಕೊಟ್ಟಿದ್ದರು.

ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿಯ ಚಮತ್‌ರೆಡ್ಡಿ ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಅವರು ಕರಿನಾಯಕನಹಳ್ಳಿಯಲ್ಲಿ ವಾಸವಾಗಿದ್ದ ಮನೆಯ ಕಾಂಪೌಂಡ್‌ ಬಳಿ ನ.8ರಂದು ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದರು. ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ವಿಚಾರಣೆ ವೇಳೆ, ತನ್ನ ಮೇಲೆ ಯಾರೂ ಹಲ್ಲೆ ನಡೆಸಿಲ್ಲ. ತಾನೇ ಆಕಸ್ಮಿಕವಾಗಿ ಬಿದ್ದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯನ್ನು ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಮಾಲೂರು ಪೊಲೀಸರು ತಿಳಿಸಿದ್ದಾರೆ.

ಚಮತ್‌ರೆಡ್ಡಿ ಪೋಷಕರು ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ದೂರು ಆಧರಿಸಿ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಮತ್‌ರೆಡ್ಡಿ ಜತೆ ಇದ್ದ ಸಹೋದ್ಯೋಗಿಗಳ ವಿಚಾರಣೆ ನಡೆಸಲಾಗಿದ್ದು, ಅವರು ತಾವು ಹಲ್ಲೆ ನಡೆಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಾಳುಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಗಾಯದ ಸ್ವರೂಪ ನೋಡಿದರೆ ಚಮತ್‌ರೆಡ್ಡಿ ಮೇಲೆ ಹಲ್ಲೆ ನಡೆದಿರುವ ಸಾಧ್ಯತೆ ಕಡಿಮೆ. ಬದಲಿಗೆ ಅವರು ಬಿದ್ದು ಗಾಯಗೊಂಡಿರಬಹುದು ಎಂದ ವೈದ್ಯಕೀಯ ವರದಿ ಕೊಟ್ಟಿದ್ದಾರೆ. ಚಮತ್‌ರೆಡ್ಡಿ ದೇಹಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT