ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲವಂತದ ಸಾಲ ವಸೂಲಾತಿ ಬೇಡ: ರೈತ ಸಂಘ ಸದಸ್ಯರ ಮನವಿ

ಲೀಡ್ ಬ್ಯಾಂಕ್‌ ವ್ಯವಸ್ಥಾಪಕರಿಗೆ ರೈತ ಸಂಘ ಸದಸ್ಯರ ಮನವಿ
Last Updated 3 ಡಿಸೆಂಬರ್ 2021, 15:36 IST
ಅಕ್ಷರ ಗಾತ್ರ

ಕೋಲಾರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿ ಸಂಕಷ್ಟದಲ್ಲಿರುವ ರೈತರಿಗೆ ಯಾವುದೇ ಕಾರಣಕ್ಕೂ ನೋಟಿಸ್ ನೀಡಿ ಬಲವಂತದ ಸಾಲ ವಸೂಲಾತಿಗೆ ಮುಂದಾಗಬಾರದು ಎಂದು ಒತ್ತಾಯಿಸಿ ರೈತ ಸಂಘದ ಸದಸ್ಯರು ಇಲ್ಲಿ ಗುರುವಾರ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

‘ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಎಲ್ಲೆಡೆ ಬೆಳೆಗಳು ಸಂಪೂರ್ಣ ನಾಶವಾಗಿವೆ. ಕೋವಿಡ್‌ ಮತ್ತು ಲಾಕ್‌ಡೌನ್‌ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲೇ ಮಳೆಯು ರೈತರಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಬ್ಯಾಂಕ್‌ಗಳು ಯಾವುದೇ ಕಾರಣಕ್ಕೂ ರೈತರಿಗೆ ಬಲವಂತವಾಗಿ ಸಾಲ ವಸೂಲಿ ಮಾಡಬಾರದು’ ಎಂದು ಸಂಘದ ಸದಸ್ಯರು ಆಗ್ರಹಿಸಿದರು.

‘ಸಾವಿರಾರು ಕೋಟಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್‌ ಮಲ್ಯ, ನೀರವ್‌ ಮೋದಿ ಅವರಂತಹ ವಂಚಕ ವಿರುದ್ಧ ಕ್ರಮ ಕೈಗೊಳ್ಳದ ಬ್ಯಾಂಕ್ ಅಧಿಕಾರಿಗಳು ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ರೈತರಿಗೆ ನೋಟಿಸ್ ನೀಡಿ ಆಸ್ತಿ ಹರಾಜು ಹಾಕುವುದಾಗಿ ಬೆದರಿಸುತ್ತಿದ್ದಾರೆ’ ಎಂದು ಸಂಘದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಕಿಡಿಕಾರಿದರು.

‘ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಆದರೆ, ಬ್ಯಾಂಕ್‌ ಅಧಿಕಾರಿಗಳಿಗೆ ರೈತರ ಕಷ್ಟದ ಅರಿವಿಲ್ಲ. ಅವರಿಗೆ ರೈತರ ಸಮಸ್ಯೆಗಿಂತ ಸಾಲ ವಸೂಲಾತಿಯೇ ಮುಖ್ಯವಾಗಿದೆ. ಸಣ್ಣಪುಟ್ಟ ಸಾಲ ವಸೂಲಾತಿಗೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ಹರಾಜು ಬೆದರಿಕೆ: ‘ಅತಿವೃಷ್ಟಿಯಿಂದ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಹಲವು ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಕೊಟ್ಟು ಆಸ್ತಿ ಹರಾಜು ಹಾಕುವುದಾಗಿ ಬೆದರಿಸುತ್ತಿವೆ. ಬ್ಯಾಂಕ್‌ ಅಧಿಕಾರಿಗಳು ರೈತರ ಮಾನ ಕಳೆಯುತ್ತಿದ್ದಾರೆ. ಸರ್ಕಾರದಿಂದ ಬರುವ ವಿವಿಧ ಸಬ್ಸಿಡಿ ಹಾಗೂ ಹಾಲಿನ ಬಟವಾಡೆ ಹಣವನ್ನು ಏಕಾಏಕಿ ಸಾಲದ ಕಂತಿಗೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಬೇಜವಾಬ್ದಾರಿಯುತವಾಗಿ ಮಾತನಾಡುತ್ತಾರೆ’ ಎಂದು ಸಂಘದ ಆಕ್ರೋಶ ವ್ಯಕ್ತಪಡಿಸಿದರು.

‘ಸಾಲ ಕಟ್ಟುವಂತೆ ರೈತರಿಗೆ ನೋಟಿಸ್‌ ಕೊಡುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ರೈತರಿಗೆ ಬರುವ ಹಾಲಿನ ಬಟವಾಡೆ ಸೇರಿದಂತೆ ಸರ್ಕಾರದ ಸಬ್ಸಿಡಿ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಎಲ್ಲಾ ಬ್ಯಾಂಕ್ ಅಧಿಕಾರಿಗಳಿಗೆ ಲಿಖಿತ ಆದೇಶ ಹೊರಡಿಸಬೇಕು. ಸಾಲ ಪಾವತಿಗೆ ಕಾಲಾವಕಾಶ ಕೊಡಬೇಕು’ ಎಂದು ಮನವಿ ಮಾಡಿದರು.

ಸಂಘದ ರಾಜ್ಯ ಘಟಕದ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಇ.ಮಂಜುನಾಥ್, ತಿಮ್ಮಣ್ಣ, ನಾಗೇಶ್, ಹನುಮಯ್ಯ, ಸಂದೀಪ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT