ಬುಧವಾರ, ಜನವರಿ 29, 2020
23 °C
ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಧರಣಿ ನಡೆಸಲು ಅನುಮತಿ

ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚನೆ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ, ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ಶಾಂತಿ ಸಭೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಶಾಂತಿಯುತ ಧರಣಿ ನಡೆಸಲು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅನುಮತಿ ನೀಡಿದರು.

ಬಂದ್ ಆಚರಣೆಗೆ ಅವಕಾಶ ನೀಡುವಂತೆ ಮುಸ್ಲಿಂ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಸೂಚನೆ ಮೇರೆಗೆ ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಡಿಸಿ ಜೆ.ಮಂಜುನಾಥ್ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದರು.

ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಂ ಹಾಗೂ ಪ್ರಗತಿಪರ ಸಂಘಟನೆಗಳಿಂದ ಸೋಮವಾರ (ಡಿ.23) ಜಿಲ್ಲಾ ಬಂದ್‌ಗೆ ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ, ಅನುಮತಿ ನೀಡಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಕೋರಿದರು.

ಬಂದ್ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆಯೂ ಸಜ್ಜಾಗಿದೆ.

‘ನಗರದ ಅಮ್ಮವಾರಿ ಪೇಟೆಯಲ್ಲಿ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಪ್ರತಿಭಟನೆಗೆ ಅವಕಾಶ ನೀಡಲಾಗುವುದು. ಈ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗುವಂತಿಲ್ಲ, ಪೊಲೀಸ್ ವರಿಷ್ಟಾಧಿಕಾರಿಗಳು ಸೂಚಿಸುವ ನಿಯಮ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಸೂಚಿಸಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಕೆ.ಎಂ.ಜಮೀರ್ ಅಹಮ್ಮದ್ ಮಾತನಾಡಿ, ‘ಧರಣಿಯಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ, ಶಾಂತಿಯಿಂದ ಧರಣಿ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು’ ಎಂದು ಹೇಳಿದರು.

ನಗರಸಭೆ ಸದಸ್ಯ ಬಿ.ಎಂ.ಮುಬಾರಕ್ ಮಾತನಾಡಿ, ‘ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಹಕ್ಕು. ಆದರೆ ಹೋರಾಟವನ್ನು ದುರ್ಬಲಗೊಳಿಸುವುದು ಅಥವಾ ದುರುಪಯೋಗ ಮಾಡಲು ಯಾರೂ ಅವಕಾಶ ನೀಡಬಾರದು’ ಎಂದು ತಿಳಿಸಿದರು.

ಸಿಪಿಎಂ ಜಿಲ್ಲಾ ಘಟಕದ ಕಾರ್ಯಕಾರಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಹಿಂದೆ ನಡೆದ ಕೋಮುಗಲಭೆಯ ಬಳಿಕ ಜನರು ಎಚ್ಚೆತ್ತುಕೊಂಡು ಹಿಂದೂ, ಮುಸ್ಲಿಂ ಸಮುದಾಯ ಒಂದಾಗಿ ಬಾಳುತ್ತಿದ್ದಾರೆ. ಹಕ್ಕುಗಳಿಗೆ ಧಕ್ಕೆಯಾದಾಗ ಪ್ರತಿಭಟಿಸುವುದು ನಾಗರಿಕರ ಹಕ್ಕು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕರೆಡ್ಡಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ತಹಸೀಲ್ದಾರ್ ಶೋಭಿತಾ, ಡಿವೈಎಸ್ಪಿ ಆರ್.ವಿ.ಚೌಡಪ್ಪ ಹಾಜರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು