ಮಂಗಳವಾರ, ಸೆಪ್ಟೆಂಬರ್ 21, 2021
21 °C

ಸಮಸ್ಯಾತ್ಮಕ ಗ್ರಾಮಗಳಿಗೆ ಡಿಸಿ, ಸಿಇಒ ಭೇಟಿ; ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಸಾರ್ವಜನಿಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಶ್ರೀನಿವಾಸಪುರ, ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ನೀರು ಮತ್ತು ಚರಂಡಿ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ಅಂಗನವಾಡಿ ಕಟ್ಟಡಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಬಂಧ ಗ್ರಾಮಸ್ಥರೊಂದಿಗೆ ಚರ್ಚಿಸಿದ್ದೇವೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ಬೇಸಿಗೆ ಕಾರಣಕ್ಕೆ ಜಿಲ್ಲೆಯಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಯಾವುದೇ ಸಮಸ್ಯೆ ಆಗಬಾರದೆಂಬ ಉದ್ದೇಶಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ವಿವರಿಸಿದರು.

‘ಮೊದಲ ಹಂತದಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇರೆಗೆ ಪಡೆದು ನೀರು ಪೂರೈಕೆ ಮಾಡಲು ಪ್ರಯತ್ನಿಸುತ್ತೇವೆ. ಕೊಳವೆ ಬಾವಿ ಲಭ್ಯವಾಗದಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು’ ಎಂದು ಹೇಳಿದರು.

ದೂರು ಬಂದಿವೆ

‘ನೀರಿನ ಜತೆಗೆ ಗ್ರಾಮಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಬಗ್ಗೆಯೂ ಜನರಿಂದ ದೂರು ಬಂದಿವೆ. ಪಿಂಚಣಿ, ವೃದ್ಧಾಪ್ಯ ವೇತನ ಪಾವತಿ ಆಗದಿರುವ ಸಂಗತಿಯನ್ನು ಜನ ಗಮನಕ್ಕೆ ತಂದಿದ್ದು, ಈ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಈಗಾಗಲೇ ನಿರ್ಮಿಸಿರುವ ಚೆಕ್‌ಡ್ಯಾಂಗಳಲ್ಲಿ ಮಳೆ ನೀರು ತುಂಬಿಕೊಂಡಿದೆ. ನರೇಗಾ ಅಡಿ ಕೆರೆಗಳಲ್ಲಿ ಹೂಳು ತೆಗೆದಿರುವ ಹೊಂಡಗಳಿಗೆ ನೀರು ಬಂದಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮೇವಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿದಿದೆ’ ಎಂದು ಮಾಹಿತಿ ನೀಡಿದರು.

ಪ್ರತಿಯೊಬ್ಬರ ಜವಾಬ್ದಾರಿ

‘ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸುವ ಮನೋಭಾವ ಜನರಲ್ಲಿ ಮೂಡಬೇಕು. ಯಾವುದೇ ಸಮಸ್ಯೆ ಎದುರಾದರೂ ಎದುರಿಸಬಹುದು. ಆದರೆ, ನೀರಿನ ಸಮಸ್ಯೆ ತೀವ್ರಗೊಂಡರೆ ಜನ ತೊಂದರೆ ಅನುಭವಿಸಬೇಕಾಗುತ್ತದೆ. ನೀರು ಮತ್ತು ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಜಿ.ಪಂ ಸಿಇಒ ಜಗದೀಶ್ ಕಿವಿಮಾತು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು