ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಎಪಿಎಂಸಿ ತಿದ್ದುಪಡಿ ಮಸೂದೆಗೆ ವಿರೋಧ

ಸರ್ಕಾರದಿಂದ ರೈತ ಕುಲ ನಾಶ: ರೈತ ಸಂಘಟನೆಗಳ ಆಕ್ರೋಶ
Last Updated 13 ಮೇ 2020, 14:21 IST
ಅಕ್ಷರ ಗಾತ್ರ

ಕೋಲಾರ: ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ ತಿದ್ದುಪಡಿ ಮಸೂದೆ ಜಾರಿ ಮಾಡದಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಪೊರೇಟ್‌ ಕಂಪನಿಗಳ ಹಿತರಕ್ಷಣೆಗಾಗಿ ರೈತ ವಿರೋಧಿ ಧೋರಣೆ ಅನುಸರಿಸುತ್ತಿವೆ. ಇದರ ಭಾಗವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತರಾತುರಿಯಲ್ಲಿ ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ ತಿದ್ದುಪಡಿ ಮಸೂದೆ ಜಾರಿಗೆ ತರಲು ಮುಂದಾಗಿದೆ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಹಸಿರು ಶಾಲು ಧರಿಸಿ ರೈತರ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತ ಕುಲ ನಾಶ ಮಾಡಲು ಹೊರಟಿದ್ದಾರೆ. ಪ್ರಧಾನಿ ಮೋದಿಯವರ ಕೈಗೊಂಬೆಯಾಗಿರುವ ಅವರಿಗೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ರಾಜ್ಯದ ರೈತರು ಲಾಕ್‌ಡೌನ್‌, ಬೆಲೆ ಕುಸಿತ, ಬರ ಪರಿಸ್ಥಿತಿಯಿಂದ ತೊಂದರೆಗೆ ಸಿಲುಕಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲು ಹೊರಟಿದೆ. ಸರ್ಕಾರದ ಅವೈಜ್ಞಾನಿಕ ನೀತಿಗಳಿಗೆ ರೈತರು ಬಲಿಪಶುವಾಗುತ್ತಿದ್ದಾರೆ’ ಎಂದು ಆರೋಪಿಸಿದರು.

7 ಸಾವಿರ ಎಪಿಎಂಸಿ: ‘ನಿಯಮದ ಪ್ರಕಾರ ದೇಶದಲ್ಲಿ ಪ್ರತಿ 5 ಕಿಲೋ ಮೀಟರ್‌ಗೆ ಒಂದು ಎಪಿಎಂಸಿ ಇರಬೇಕು. ಇದರಂತೆ 42 ಸಾವಿರ ಎಪಿಎಂಸಿ ಸ್ಥಾಪಿಸಬೇಕು. ಆದರೆ, ದೇಶದಲ್ಲಿ ಕೇವಲ 7 ಸಾವಿರ ಎಪಿಎಂಸಿಗಳಿವೆ. ಸರ್ಕಾರವು ವ್ಯವಸ್ಥಿತ ಮಾರುಕಟ್ಟೆ ಜಾಲ ಕಲ್ಪಿಸುವ ಬದಲು ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹೊರಟಿದೆ’ ಎಂದು ಸದಸ್ಯರು ಕಿಡಿಕಾರಿದರು.

‘ಸರ್ಕಾರ ಕಾರ್ಪೊರೇಟ್‌ ಕಂಪನಿಗಳು ಹಾಗೂ ಬಂಡವಾಳಶಾಹಿಗಳ ಹಿತ ಕಾಯುವುದನ್ನು ಬಿಟ್ಟು ರೈತರ ಪರವಾಗಿ ವರ್ತಿಸಬೇಕು. ಎಪಿಎಂಸಿ ತಿದ್ದುಪಡಿ ಮಸೂದೆ ಜಾರಿ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೆದ್ದಾರಿ ಬಂದ್‌ ಮಾಡಿ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ತಿಮ್ಮಣ್ಣ, ವೆಂಕಟೇಶಪ್ಪ, ಹನುಮಯ್ಯ ಹಾಜರಿದ್ದರು.

ಮರಣ ಶಾಸನ: ‘ಸರ್ಕಾರ ಮಾರುಕಟ್ಟೆ ವ್ಯವಸ್ಥೆ ಸುಧಾರಿಸಿ ರೈತರಿಗೆ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸುವ ಮೂಲಕ ಸ್ಪರ್ಧಾತ್ಮಕ ಬೆಲೆ ಕೊಡಿಸಬೇಕು. ರೈತರಿಗೆ ಮರಣ ಶಾಸನವಾಗಿರುವ ಎಪಿಎಂಸಿ ತಿದ್ದುಪಡಿ ಮಸೂದೆ ಕೈಬಿಡಬೇಕು’ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್‌ ಬಣ) ಸದಸ್ಯರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಕಾರ್ಯದರ್ಶಿ ವೀರಭದ್ರಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್.ರಾಮೇಗೌಡ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಗೌರವಾಧ್ಯಕ್ಷ ಶಾಮಣ್ಣ, ಉಪಾಧ್ಯಕ್ಷ ಚಂದ್ರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT