ಮಂಗಳವಾರ, ಮಾರ್ಚ್ 9, 2021
28 °C
ಸರ್ಕಾರದ ವಿರುದ್ಧ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರ ಆಕ್ರೋಶ

ಕೇಂದ್ರದ ಕಾಯ್ದೆಗೆ ವಿರೋಧ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು ಇಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.

ನಚಿಕೇತ ವಿದ್ಯಾರ್ಥಿನಿಲಯದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ಬಂದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಬಿಜೆಪಿಗೆ ರೈತರು, ಕಾರ್ಮಿಕರು ಹಾಗೂ ಬಡ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸರ್ಕಾರಗಳು ಬ್ರಿಟೀಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ’ ಎಂದು ಒಕ್ಕೂಟದ ಸದಸ್ಯೆ ಶಾಂತಮ್ಮ ಕಿಡಿಕಾರಿದರು.

‘ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಾಗಿರುವ ಪ್ರಧಾನಿ ಮೋದಿಯವರು ಸುಗ್ರೀವಾಜ್ಞೆ ಮೂಲಕ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಅವರ ಕೃಷಿ ವಿರೋಧಿ ನಡೆಯಿಂದ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬರಲಿದೆ’ ಎಂದು ಒಕ್ಕೂಟದ ಸದಸ್ಯೆ ಪುಷ್ಪಾ ಆತಂಕ ವ್ಯಕ್ತಪಡಿಸಿದರು.

ದೊಡ್ಡ ಆಘಾತ: ‘ಕೇಂದ್ರ ಸರ್ಕಾರ ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತ ಸಮುದಾಯಕ್ಕೆ ಕೊರೊನಾ ಸೋಂಕಿಗಿಂತಲೂ ದೊಡ್ಡ ಆಘಾತ ನೀಡಿದೆ. ರೈತರ ಮನೆ ಹಾಳು ಮಾಡಲು ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲಾಗಿದೆ. ಈ ಕಾಯ್ದೆಗಳಿಗೆ ರೈತರ ಸಂಪೂರ್ಣ ವಿರೋಧವಿದೆ. ಕೇಂದ್ರದಲ್ಲಿ ಇರುವುದು ರೈತ ವಿರೋಧಿ ಸರ್ಕಾರ’ ಎಂದು ಪ್ರತಿಭಟನಾಕಾರರು ದೂರಿದರು.

‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಬಗ್ಗೆ ಜಾಗತಿಕವಾಗಿ ಚರ್ಚೆಯಾಗುತ್ತಿದೆ. ಹಲವು ದೇಶಗಳು ಈ ಬಗ್ಗೆ ಪ್ರಶ್ನೆ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರಧಾನಿ ಮೋದಿ ಸರ್ವಾಧಿಕಾರಿ ಹಿಟ್ಲರ್‌ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ರೈತ ಕುಲ ರಕ್ಷಿಸಿ: ‘ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತ್ರಿಪಡಿಸಬೇಕು. ಸಂಕಷ್ಟದಲ್ಲಿರುವ ರೈತ ಕುಲವನ್ನು ರಕ್ಷಣೆ ಮಾಡಬೇಕು. ಇಲ್ಲದಿದ್ದರೆ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜನಪದ ಕಲಾವಿದರು ರೈತರ ಸಮಸ್ಯೆಗಳನ್ನು ಬಿಂಬಿಸುವ ಕಿರು ನಾಟಕ ಪ್ರದರ್ಶಿಸಿದರು. ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಳಿನಿಗೌಡ, ಒಕ್ಕೂಟದ ಸದಸ್ಯರಾದ ಲಕ್ಷಮ್ಮ, ಮಂಜುಳಾ, ಮಲ್ಲಮ್ಮ, ನೇತ್ರಾವತಿ, ಮಹಾಲಕ್ಷ್ಮಿ, ಪವಿತ್ರಾ, ಚಂದ್ರಮ್ಮ, ದಿವ್ಯಾ, ರತ್ನಮ್ಮ, ಭಾಗ್ಯ ಪಾಲ್ಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು