ಭಾನುವಾರ, ಸೆಪ್ಟೆಂಬರ್ 26, 2021
27 °C
ರೈಲು ನಿಲ್ದಾಣದ ಎದುರು ಪ್ರತಿಭಟನೆ: ಬಿಜೆಪಿ ವಿರುದ್ಧ ಆಕ್ರೋಶ

ವಿದ್ಯುತ್‌ ಖಾಸಗೀಕರಣ ಮಸೂದೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಮಸೂದೆ ವಿರೋಧಿಸಿ ಸಾಮೂಹಿಕ ನಾಯಕತ್ವ ರೈತ ಸಂಘದ ಸದಸ್ಯರು ಇಲ್ಲಿ ಸೋಮವಾರ ರೈಲು ನಿಲ್ದಾಣದ ಎದುರು ಪ್ರತಿಭಟನೆ ಮಾಡಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲೋತ್ಪನ್ನಗಳು ಹಾಗೂ ಕೃಷಿ ಪರಿಕರಗಳ ಬೆಲೆ ದುಪ್ಪಟ್ಟಾಗಿದ್ದು, ರೈತರಿಗೆ ಕೃಷಿ ನಿರ್ವಹಣೆಯು ದೊಡ್ಡ ಸವಾಲಾಗಿದೆ. ಇಂತಹ ಸಂಕಷ್ಟದಲ್ಲಿ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಹೊರಟಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಆಳುವ ಸರ್ಕಾರಗಳು ಜನಾಭಿಪ್ರಾಯ ಲೆಕ್ಕಿಸದೆ ಬ್ರಿಟೀಷರ ಆಳ್ವಿಕೆ ಮರುಕಳಿಸುವಂತೆ ಇಷ್ಟ ಬಂದಂತೆ ಆಡಳಿತ ನಡೆಸುತ್ತಿವೆ. ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಕೃಷಿ ಕ್ಷೇತ್ರ ದಿವಾಳಿಯಾಗುತ್ತಿದೆ. ಸರ್ಕಾರಗಳು ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿವೆ’ ಎಂದು ರೈತ ಸಂಘ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ರೈತರಿಗೆ ಸಂಕಷ್ಟ ತಪ್ಪಿಲ್ಲ. ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ಸಿಗುತ್ತಿಲ್ಲ. ಸರ್ಕಾರಗಳು ರೈತರಿಗೆ ಮಾರುಕಟ್ಟೆ ವ್ಯವಸ್ಥೆ, ಬೆಂಬಲ ಬೆಲೆ ನೀಡುವುದನ್ನು ಮರೆತು ರೈತ ವಿರೋಧಿ ಧೋರಣೆ ತಳೆದಿವೆ. ಬಿಜೆಪಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಕೃಷಿ ಉದ್ದೇಶದ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಿ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಿ ರೈತ ಕುಲವನ್ನು ಬೀದಿಗೆ ತಳ್ಳುವ ಹುನ್ನಾರ ನಡೆದಿದೆ’ ಎಂದು ಆರೋಪಿಸಿದರು.

‘ವಿದ್ಯುತ್ ಕ್ಷೇತ್ರ ₹ 50 ಸಾವಿರ ಕೋಟಿ ಸಾಲದಲ್ಲಿದೆ. ಇದನ್ನು ಸರಿದೂಗಿಸಲು ವಿದ್ಯುತ್‌ ಕ್ಷೇತ್ರದ ಖಾಸಗೀಕರಣಗೊಳಿಸುವ ಪ್ರಯತ್ನ ನಡೆದಿದೆ. ಸಾಲ ತೀರಿಸಿ ನಂತರ ರೈತರ ಪಂಪ್‌ಸೆಟ್‌ಗಳ ವಿದ್ಯುತ್‌ ಶುಲ್ಕವನ್ನು ಸಬ್ಸಿಡಿ ದರದಲ್ಲಿ ನೀಡುತ್ತೇವೆ ಎಂದು ಸರ್ಕಾರ ಸುಳ್ಳು ಹೇಳಿ ರೈತರ ದಿಕ್ಕು ತಪ್ಪಿಸುತ್ತಿದೆ’ ಎಂದು ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌ ಗುಡುಗಿದರು.

ಮರಣ ಶಾಸನ: ‘ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆಗಳು ನಾಶವಾಗುತ್ತಿವೆ. ರೈತರು ಕೋವಿಡ್‌ ಸಂಕಷ್ಟ, ಲಾಕ್‌ಡೌನ್‌, ಬೆಲೆ ಕುಸಿತದಿಂದ ಕಂಗಾಲಾಗಿದ್ದು, ಸರ್ಕಾರ ವಿದ್ಯುತ್‍ ಕ್ಷೇತ್ರ ಖಾಸಗೀಕರಣಗೊಳಿಸಿ ಕೃಷಿ ಉದ್ದೇಶದ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಿ ಮರಣ ಶಾಸನ ಬರೆಯಲು ಹೊರಟಿದೆ’ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

‘ರೈತರು ಬೀದಿ ಪಾಲಾಗಿ ಕಾರ್ಪೊರೇಟ್‌ ಕಂಪನಿಗಳ ಬಾಗಿಲು ಕಾಯುವ ಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ಆಹಾರ ಸ್ವಾವಲಂಬನೆ ನಾಶವಾಗಿ ಹಸಿವು ತಾಂಡವವಾಡುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ರೈತರ ಮೇಲೆ ಶೋಷಣೆಯಾಗುತ್ತಿದೆ. ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಸಿಗುತ್ತಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ದೇಶದ ಜನ ಅನ್ನಕ್ಕಾಗಿ ಹೊರ ದೇಶಗಳತ್ತ ಕೈ ಚಾಚುವ ಸನ್ನಿವೇಶ ಸೃಷ್ಟಿಯಾಗುತ್ತದೆ’ ಎಂದು ಕಿಡಿಕಾರಿದರು.

ತೀವ್ರ ಹೋರಾಟ: ‘ಚಳಿಗಾಲದ ಸಂಸತ್ತು ಅಧಿವೇಶನದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಸೂದೆ ಮಂಡಿಸಬಾರದು. ಸರ್ಕಾರ ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದರೆ ರಾಜ್ಯದೆಲ್ಲೆಡೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ್, ಪ್ರಧಾನ ಕಾರ್ಯದರ್ಶಿ ಹನುಮಯ್ಯ, ರಾಜ್ಯ ಘಟಕದ ಸಂಚಾಲಕ ನಾಗರಾಜ್‌ಗೌಡ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ, ಮಾಲೂರು ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.