ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ವಿರುದ್ಧ ಆಕ್ರೋಶ: ಪ್ರತಿಭಟನೆ

ರೈತರ ಮೇಲಿನ ಪೊಲೀಸ್‌ ದೌರ್ಜನ್ಯಕ್ಕೆ ಕೆಪಿಆರ್‌ಎಸ್‌– ರೈತ ಸಂಘ ಖಂಡನೆ
Last Updated 28 ನವೆಂಬರ್ 2020, 13:11 IST
ಅಕ್ಷರ ಗಾತ್ರ

ಕೋಲಾರ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಅಶ್ರುವಾಯು ಷೆಲ್‌ ಸಿಡಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.

‘ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತು ರೈತರ ಹಕ್ಕುಗಳ ರಕ್ಷಣೆಗಾಗಿ ನ್ಯಾಯಯುತ ರೀತಿಯಲ್ಲಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಹರಿಯಾಣ ಸರ್ಕಾರ ಪೊಲೀಸ್‌ ಬಲ ಬಳಸಿ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಈ ಜನ ವಿರೋಧಿ ನಡೆಯಿಂದ ಇಡೀ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬರಲಿದೆ’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್.ರಾಮೇಗೌಡ ಕಳವಳ ವ್ಯಕ್ತಪಡಿಸಿದರು.

‘ಸರ್ಕಾರಗಳು ಕೃಷಿ ಕ್ಷೇತ್ರ ನಾಶ ಮಾಡಿ ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸುತ್ತಿವೆ. ರೈತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ಪೊಲೀಸ್‌ ಬಳಸಿಕೊಂಡು ರೈತರನ್ನು ಶೋಷಿಸುತ್ತಿವೆ. ರೈತ ವಿರೋಧಿ ಕಾಯ್ದೆಗಳನ್ನು ಮಂಡಿಸಿ ತುಘಲಕ್‌ ದರ್ಬಾರ್‌ ನಡೆಸುತ್ತಿವೆ. ಲಜ್ಜೆಗೆಟ್ಟ ಸರ್ಕಾರಗಳಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ’ ಎಂದು ಗುಡುಗಿದರು.

ಖಂಡನೀಯ: ‘ದೇಶದ ವಿವಿಧೆಡೆಯಿಂದ ದೆಹಲಿಗೆ ತೆರಳುತ್ತಿದ್ದ ರೈತರನ್ನು ನಿಕೃಷ್ಟವಾಗಿ ನಡೆಸಿಕೊಳ್ಳಲಾಗಿದೆ. ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ರಸ್ತೆಯಲ್ಲಿ ಮುಳ್ಳು ಬೇಲಿ, ಬ್ಯಾರಿಕೇಡ್‌ ಹಾಕಿ ಮಣ್ಣು ತುಂಬಿದ ಲಾರಿಗಳನ್ನು ಅಡ್ಡ ನಿಲ್ಲಿಸಲಾಗಿದೆ. ಸರ್ಕಾರದ ಈ ನಡೆ ಖಂಡನೀಯ’ ಎಂದು ಕೆಪಿಆರ್‌ಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರಗಳು ರೈತರನ್ನು ಬೀದಿಗೆ ತಳ್ಳಿ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿವೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಣ್ಣ ಭೂ ಹಿಡುವಳಿದಾರರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ಕಿಡಿಕಾರಿದರು.

ಅಪಾಯಕಾರಿ ಕಾಯ್ದೆ: ‘ಕೇಂದ್ರ ಸರ್ಕಾರವು ಬ್ರಿಟೀಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ. ರೈತ ಕುಲಕ್ಕೆ ಮಾರಕವಾಗಿರುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು. ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸಬೇಕು. ಹೋರಾಟನಿರತ ರೈತರ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು. ಜನಪ್ರತಿನಿಧಿಗಳು ಪಕ್ಷಾತೀತವಾಗಿ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಬೇಕು. ರೈತರು, ಕಾರ್ಮಿಕರು, ಬಡ ಜನರ ಪರವಾಗಿ ಕಾಯ್ದೆಗಳನ್ನು ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು. ಇಲ್ಲವಾದರೆ ಜನಪ್ರತಿನಿಧಿಗಳ ಮನೆ ಮುಂದೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT