ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಘಟಕ: ಕಾಮಗಾರಿ ಶೀಘ್ರ ಪೂರ್ಣ

ಎಸ್‌ಎನ್‌ಆರ್‌ ಆಸ್ಪತ್ರೆ ಭೇಟಿ ಬಳಿಕ ಸಂಸದ ಮುನಿಸ್ವಾಮಿ ಭರವಸೆ
Last Updated 4 ಮೇ 2021, 16:05 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಕೇಂದ್ರದ ಎಸ್‌ಎನ್‌ಆರ್‌ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ಆಮ್ಲಜನಕ ಘಟಕದ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಭರವಸೆ ನೀಡಿದರು.

ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ವೈದ್ಯಕೀಯ ಆಮ್ಲಜನಕ ಘಟಕದ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ಮಾತನಾಡಿ, ‘ಆಮ್ಲಜನಕ ಘಟಕದ ಕೆಲಸವನ್ನು ಸಾಧ್ಯವಾದಷ್ಟು ಬೇಗನೆ ಪೂರ್ಣಗೊಳಿಸುವಂತೆ ಗುತ್ತಿಗೆ ಏಜೆನ್ಸಿ ಮೇಲೆ ಒತ್ತಡ ಹಾಕುತ್ತೇನೆ’ ಎಂದರು.

‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಆಮ್ಲಜನಕ ಹೆಚ್ಚು ಅಗತ್ಯವಿದೆ. ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಬೇಗನೆ ಕಾರ್ಯಾರಂಭ ಮಾಡಿದರೆ ಹಳೆಯ ಘಟಕದ ಮೇಲಿನ ಒತ್ತಡ ತಗ್ಗಲಿದೆ. ಜತೆಗೆ ಹೆಚ್ಚಿನ ಸೋಂಕಿತರಿಗೆ ಚಿಕಿತ್ಸೆ ನೀಡಬಹುದು’ ಎಂದು ಅಭಿಪ್ರಾಯಪಟ್ಟರು.

ವಾರ್ಡ್‌ಗೆ ಭೇಟಿ: ಪಿಪಿಇ ಕಿಟ್ ಧರಿಸಿ ಆಸ್ಪತ್ರೆಯ ಕೋವಿಡ್‌ ವಾರ್ಡ್‌ಗೆ ಭೇಟಿ ನೀಡಿದ ಸಂಸದರು ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದರು. ಅಲ್ಲದೇ, ಕೋವಿಡ್ ವಾರ್ಡ್‌ನಲ್ಲಿ ಸಿಗುತ್ತಿರುವ ವೈದ್ಯಕೀಯ ಸೇವೆಯ ಬಗ್ಗೆ ಸೋಂಕಿತರಿಂದ ಮಾಹಿತಿ ಪಡೆದರು.

‘ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಸಂಪರ್ಕವುಳ್ಳ ಐಸಿಯು ಬೆಡ್‌ಗಳಿಗೆ ಬೇಡಿಕೆ ಹೆಚ್ಚಿದೆ. ಆದ ಕಾರಣ ಗುಣಮುಖರಾದ ಮತ್ತು ದೇಹಸ್ಥಿತಿ ಗಂಭೀರವಿಲ್ಲದ ಸೋಂಕಿತರನ್ನು ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಿ. ತುರ್ತಾಗಿ ವೈದ್ಯಕೀಯ ಆಮ್ಲಜನಕದ ಅಗತ್ಯವಿರುವ ಸೋಂಕಿತರನ್ನು ಐಸಿಯುಗೆ ದಾಖಲಿಸಿ’ ಎಂದು ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.

‘ಪ್ರತಿಯೊಬ್ಬರ ಜೀವ ಅಮೂಲ್ಯ. ಚೇತರಿಸಿಕೊಂಡ ಸೋಂಕಿತರು ಸಂಕಷ್ಟದಿಂದ ನರಳುತ್ತಿರುವ ಇತರೆ ಸೋಂಕಿತರಿಗೆ ವೈದ್ಯಕೀಯ ಆಮ್ಲಜನಕದ ಸಂಪರ್ಕವುಳ್ಳ ಐಸಿಯು ಬೆಡ್‌ ಸೌಲಭ್ಯ ಸಿಗುವಂತೆ ಮಾಡಲು ನೆರವಾಗಬೇಕು’ ಎಂದು ಸೋಂಕಿತರಿಗೆ ಮನವಿ ಮಾಡಿದರು.

‘ಇಟಿಸಿಎಂ ಆಸ್ಪತ್ರೆಯನ್ನು ಹೊರ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲಿ ಇತರೆ ರೋಗಿಗಳ ಚಿಕಿತ್ಸೆಗೆ ಅಗತ್ಯ ಸೌಲಭ್ಯ ಒದಗಿಸಿ’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್, ಎಸ್‌ಎನ್‌ಆರ್‌ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT