ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೊಳವೆ ಬಾವಿಗೆ ಅನುಮತಿ ನೀಡುವ ಬಗ್ಗೆ ಚರ್ಚಿಸಿ -ಜಿಲ್ಲಾಧಿಕಾರಿ ಸೆಲ್ವಮಣಿ

Last Updated 2 ಆಗಸ್ಟ್ 2021, 12:59 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯ ಕೋಲಾರ ಮತ್ತು ಮಾಲೂರು ತಾಲ್ಲೂಕು ವ್ಯಾಪ್ತಿಯ ಕೈಗಾರಿಕೆಗಳಲ್ಲಿ ವಾಣಿಜ್ಯ ಬಳಕೆ, ಕುಡಿಯುವ ನೀರು ಹಾಗೂ ಇತರೆ ಉದ್ದೇಶಕ್ಕೆ ಹೊಸದಾಗಿ ಕೊಳವೆ ಬಾವಿ ಕೊರೆಯಲು ಜಿಲ್ಲಾ ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ನೀಡುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಿ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಸೋಮವಾರ ನಡೆದ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ‘ಕೋಲಾರ ಮತ್ತು ಮಾಲೂರು ತಾಲ್ಲೂಕು ವ್ಯಾಪ್ತಿಯಲ್ಲಿರುವ ಮಹಿಂದ್ರಾ ಏರೋಸ್ಟ್ರಕ್ಚರ್ಸ್‌ ಪ್ರೈವೇಟ್‌ ಲಿಮಿಟೆಡ್‌, ನೀಲ್ ಮೆಟಲ್ ಪ್ರಾಡಕ್ಟ್ಸ್‌ ಲಿಮಿಟೆಡ್‌ ಮತ್ತು ಕ್ಲೋರೈಡ್ ಮೆಟಲ್ ಲಿಮಿಟೆಡ್‌ ಕೊಳವೆ ಬಾವಿ ಕೊರೆಯಲು ಅನುಮತಿ ಕೋರಿವೆ’ ಎಂದರು.

‘ನಗರಸಭೆ ಹಾಗೂ ಪುರಸಭೆಗಳಿಂದ ಕುಡಿಯುವ ನೀರಿನ ಉದ್ದೇಶಕ್ಕೆ ಕೊಳವೆ ಬಾವಿ ಕೊರೆಯಲು ಪ್ರಸ್ತಾವ ಸಲ್ಲಿಕೆಯಾಗಿದೆ. ಅದೇ ರೀತಿ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆ, ರಾಜ್ಯ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮಗಳಿಂದ ಪ್ರಸ್ತಾವ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ’ ಎಂದು ತಿಳಿಸಿದರು.

‘ಕೆ.ಸಿ ವ್ಯಾಲಿ ಯೋಜನೆ ವ್ಯಾಪಿಯಲ್ಲಿ ಕೊಳವೆ ಬಾವಿ ಕೊರೆಯಲು ಸ್ಥಳಗಳನ್ನು ಗುರುತಿಸಲಾಗಿದೆ. ಅಟಲ್‌ ಭೂಜಲ ಯೋಜನೆಯಡಿ ಜಿಲ್ಲೆಯ 39 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ. 37 ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕುಡಿಯುವ ನೀರಿಗಾಗಿ ಕೊರೆದು ಕಡಿಮೆ ಇಳುವರಿ ಇರುವ ಕೊಳವೆ ಬಾವಿಗಳನ್ನು ಅಧ್ಯಯನ ಕೊಳವೆ ಬಾವಿಗಳಾಗಿ ಆಯ್ಕೆ ಮಾಡಲಾಗುವುದು’ ಎಂದು ಭೂವಿಜ್ಞಾನಿಗಳು ವಿವರಿಸಿದರು.

ನೋಂದಣಿ ಕಡ್ಡಾಯ: ‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನಗರಸಭೆ, ಪುರಸಭೆ, ನಿಗಮ, ಮಂಡಳಿಗಳಿಂದ ಹೊಸದಾಗಿ ಕೊರೆಯಲಾದ ಕೊಳವೆ ಬಾವಿಗಳನ್ನು ಜಿಲ್ಲಾ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಬೇಕು. ನೋಂದಣಿ ಮಾಡದ ಇಲಾಖೆಗಳು 15 ದಿನದೊಳಗೆ ಎಲ್ಲಾ ಕೊಳವೆ ಬಾವಿಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು’ ಎಂದು ಜಿಲ್ಲಾಧಿಕಾರಿ ಆದೇಶಿಸಿದರು.

ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಸಗಿಯವರ ಸ್ಥಳಗಳಲ್ಲಿ ಗೃಹ ಬಳಕೆ, ಕುಡಿಯುವ ಉದ್ದೇಶಕ್ಕೆ ಕೊಳವೆ ಬಾವಿ ಕೊರೆಯಲು ಅನುಮತಿ ನೀಡುವ ಬಗ್ಗೆ, ಕೋಲಾರ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕು ವ್ಯಾಪ್ತಿಯ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ ಕುಡಿಯುವ ನೀರಿಗಾಗಿ ಹೊಸದಾಗಿ ಕೊಳವೆ ಬಾವಿ ಕೊರೆಯಲು ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT