ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ರಥದಲ್ಲಿ ಪೆಟ್ರೋಲ್‌–ಡೀಸೆಲ್‌ ಮೆರವಣಿಗೆ- ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ತೈಲೋತ್ಪನ್ನ–ಅಡುಗೆ ಅನಿಲದ ಬೆಲೆ ಏರಿಕೆ
Last Updated 27 ಅಕ್ಟೋಬರ್ 2021, 13:49 IST
ಅಕ್ಷರ ಗಾತ್ರ

ಕೋಲಾರ: ತೈಲೋತ್ಪನ್ನಗಳು ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ರೈತ ಸಂಘ ಸದಸ್ಯರು ಇಲ್ಲಿ ಬುಧವಾರ ಪೆಟ್ರೋಲ್, ಡೀಸೆಲ್‌ ಹಾಗೂ ಗ್ಯಾಸ್‌ ಸಿಲಿಂಡರ್‌ ಅನ್ನು ರಥದಲ್ಲಿ ಮೆರವಣಿಗೆ ಮಾಡಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ರಸ್ತೆ ಮಧ್ಯೆ ಸೌದೆ ಒಲೆ ಹಾಕಿ ಅಡುಗೆ ಮಾಡಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರು ಗತಿಯಲ್ಲೇ ಸಾಗಿದೆ. ಕೇಂದ್ರವು ಕೋವಿಡ್‌ ಸಂಕಷ್ಟದಲ್ಲಿರುವ ಜನಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ ಮತ್ತು ಮಧ್ಯಮ ವರ್ಗದ ಜನ, ಕಾರ್ಮಿಕರು, ರೈತರು ತೊಂದರೆ ಅನುಭವಿಸುವಂತಾಗಿದೆ. ಪ್ರಧಾನಿ ಮೋದಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ’ ಎಂದು ಕಿಡಿಕಾರಿದರು.

‘ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ದೇಶದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ.ಜನರ ಮೇಲೆ ತೆರಿಗೆ ಹೊರೆ ಹೆಚ್ಚಿದೆ. ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಣ ಲೂಟಿ: ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ತೈಲೋತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ತೈಲ ಕಂಪನಿಗಳು ಬಡ ಜನರ ಹಣ ಲೂಟಿ ಮಾಡುತ್ತಿವೆ. ದೇಶ ಮತ್ತು ರಾಜ್ಯದಲ್ಲಿ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ಬಡ ಜನರಿಗೆ ಆಹಾರ ಭದ್ರತೆಯಿಲ್ಲದೆ ಬೀದಿ ಪಾಲಾಗಿದ್ದಾರೆ’ ಎಂದು ಪ್ರತಿಭಟನಾಕಾರರು ಗುಡುಗಿದರು.

‘ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇಂದ್ರದ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ. ತೈಲೋತ್ಪನ್ನಗಳ ಮೇಲಿನ ಸೆಸ್ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಜನ ಬೀದಿಗಿಳಿದು ಹೋರಾಟ ಮಾಡುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

‘ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದಿದ್ದರೆ ಮತ್ತಷ್ಟು ಕಷ್ಟದ ದಿನಗಳು ಎದುರಾಗುತ್ತವೆ. ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಬೇಕು. ತೈಲೋತ್ಪನ್ನ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು.

ಸಂಘಟನೆಯ ರಾಜ್ಯ ಘಟಕದ ಸಂಚಾಲಕ ನಾಗರಾಜಗೌಡ, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹನುಮಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್‌, ಮಾಲೂರು ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ತಿಮ್ಮಣ್ಣ, ಆಂಜಿನಪ್ಪ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT