ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಏರಿಕೆ: ಕಾಂಗ್ರೆಸ್‌ನಿಂದ ಸೈಕಲ್‌ ರ್‍ಯಾಲಿ, ಎತ್ತಿನ ಬಂಡಿ ಮೆರವಣಿಗೆ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ
Last Updated 7 ಜುಲೈ 2021, 12:52 IST
ಅಕ್ಷರ ಗಾತ್ರ

ಕೋಲಾರ: ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇಲ್ಲಿ ಬುಧವಾರ ಸೈಕಲ್‌ ರ್‍ಯಾಲಿ ಹಾಗೂ ಎತ್ತಿನ ಬಂಡಿ ಮೆರವಣಿಗೆಯೊಂದಿಗೆ ಪ್ರತಿಭಟನೆ ನಡೆಸಿದರು.

ಪಕ್ಷದ ಕಚೇರಿಯಿಂದ ಬಂಗಾರಪೇಟೆ ವೃತ್ತದವರೆಗೆ ಸೈಕಲ್‌ ಮತ್ತು ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ಹೋದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರು ಗತಿಯಲ್ಲೇ ಸಾಗಿದೆ. ಕೇಂದ್ರವು ಕೋವಿಡ್‌ ಸಂಕಷ್ಟದಲ್ಲಿರುವ ಜನಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ’ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಗೋವಿಂದರಾಜು ಕಿಡಿಕಾರಿದರು.

‘ಯುಪಿಎ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ ಶೇ 9ರಷ್ಟು ತೆರಿಗೆ ವಿಧಿಸಲಾಗಿತ್ತು. ಆದರೆ, ಈಗಿನ ಕೇಂದ್ರದ ಬಿಜೆಪಿ ಸರ್ಕಾರ ಶೇ 35ಕ್ಕಿಂತ ಹೆಚ್ಚು ತೆರಿಗೆ ವಿಧಿಸಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ’ ಎಂದು ಗುಡುಗಿದರು.

‘ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ ಮತ್ತು ಮಧ್ಯಮ ವರ್ಗದ ಜನ, ಕಾರ್ಮಿಕರು, ರೈತರು ತೊಂದರೆ ಅನುಭವಿಸುವಂತಾಗಿದೆ. ಪ್ರಧಾನಿ ಮೋದಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ’ ಎಂದು ದೂರಿದರು.

ತೆರಿಗೆ ಹೊರೆ: ‘ಜನರ ಮೇಲೆ ತೆರಿಗೆ ಹೊರೆ ಹೆಚ್ಚಿದೆ. ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇಂದ್ರದ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ದೂರಿದರು.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ತೈಲೋತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ತೈಲ ಕಂಪನಿಗಳು ಬಡ ಜನರ ಹಣ ಲೂಟಿ ಮಾಡುತ್ತಿವೆ. ದೇಶ ಮತ್ತು ರಾಜ್ಯದಲ್ಲಿ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ಬಡ ಜನರಿಗೆ ಆಹಾರ ಭದ್ರತೆಯಿಲ್ಲದೆ ಬೀದಿ ಪಾಲಾಗಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಕಷ್ಟಕ್ಕೆ ದೂಡಬಾರದು: ‘ಸರ್ಕಾರಕ್ಕೆ ವಿವಿಧ ಮೂಲಗಳಿಂದ ಕೋಟ್ಯಂತರ ರೂಪಾಯಿ ಆದಾಯ ಬರುತ್ತಿದೆ. ಆದರೂ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವುದು ಎಷ್ಟು ಸರಿ? ಸರ್ಕಾರ ಕಷ್ಟ ಕಾಲದಲ್ಲಿ ಜನರ ನೆರವಿಗೆ ಬರಬೇಕು. ಅದು ಬಿಟ್ಟು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಜಿಲ್ಲಾ ಉಸ್ತುವಾರಿ ಮಲ್ಲಾಜಮ್ಮ, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಕಾಂಗ್ರೆಸ್‌ ಕಿಸಾನ್‌ ಖೇತ್‌ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉದಯಶಂಕರ್, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಎಸ್.ಮಂಜುನಾಥ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT