ಸೋಮವಾರ, ಆಗಸ್ಟ್ 8, 2022
23 °C

ಪ್ರಧಾನಿ ಮೋದಿ ಯುವಶಕ್ತಿಗೆ ಪ್ರೇರಣೆ: ಸಂದೀಪ್‌ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಪ್ರಧಾನಿ ನರೇಂದ್ರ ಮೋದಿ ಅವರು ಜಗ ಮೆಚ್ಚಿದ ಮಹಾನ್ ನಾಯಕ. ಅವರು ದೇಶದ ಯುವಶಕ್ತಿಗೆ ಪ್ರೇರಣಾ ಶಕ್ತಿಯಾಗಿದ್ದಾರೆ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಕೆ.ಸಿ.ಸಂದೀಪ್‌ಕುಮಾರ್‌ ಬಣ್ಣಿಸಿದರು.

ಮೋದಿ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ‘ಮೋದಿ ಅವರು ಸ್ವಾರ್ಥಿಯಲ್ಲ. ಅವರು ತನಗಾಗಿ ಬದುಕುವುದಿಲ್ಲ. ದೇಶದ ಭವಿಷ್ಯ ಉಜ್ವಲಗೊಳಿಸಲು ಮತ್ತು ಭಾರತವನ್ನು ವಿಶ್ವ ಗುರುವಾಗಿ ಮಾಡುವ ನಿಟ್ಟಿನಲ್ಲಿ ಹಗಲಿರುಳು ದುಡಿಯುತ್ತಿದ್ದಾರೆ’ ಎಂದು ಹೇಳಿದರು.

‘ಚೈತನ್ಯದ ಚಿಲುಮೆಯಂತಿರುವ ಮೋದಿ ಅವರು ಯುವ ಪೀಳಿಗೆಗೆ ಆಶಾಕಿರಣ. ಅವರ ರಾಜನೀತಿ ಹಾಗೂ ಆಡಳಿತ ಮಾದರಿಯಾಗಿದೆ. ಜಗತ್ತಿನ ಹಲವು ರಾಷ್ಟ್ರಗಳು ಮೋದಿ ಅವರನ್ನು ಮೆಚ್ಚಿಕೊಂಡಿವೆ. ಮೋದಿಯವರ ದೂರದೃಷ್ಟಿಯ ಫಲವಾಗಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ನಡೆದುಕೊಳ್ಳಬೇಕು. ಆದರೆ, ಕಾರ್ಯಕ್ರಮಕ್ಕೆ ಬಂದಿರುವ ಕಾರ್ಯಕರ್ತರಲ್ಲಿ ಶಿಸ್ತು ಕಾಣಿಸುತ್ತಿಲ್ಲ. ಇದು ಸಾಮಾನ್ಯ ಸಭೆಯಲ್ಲ. ಕಾರ್ಯಕರ್ತರಿಗೆ ಸಭೆಯ ಶಿಷ್ಟಾಚಾರ ತಿಳಿಯದಿರುವುದು ದುರಂತ’ ಎಂದು ಬೇಸರ ವ್ಯಕ್ತಪಡಿಸಿದರು.

ಸಂಪರ್ಕ ಸೇತುವೆ: ‘ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಜನರಿಗೆ ಅರಿವ ಮೂಡಿಸಿ ಯೋಜನೆಗಳು ಯಶಸ್ವಿಯಾಗುವಂತೆ ಮಾಡಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ಸಿಗಬೇಕು. ಕಾರ್ಯಕರ್ತರು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಸಿಟಿಂಗ್‌ ಕಾರ್ಡ್‌ಗೆ ಸೀಮಿತವಾಗಬಾರದು. ಜನರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಜನ ಸೇವೆಯ ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಸೇವೆ ಮೂಲಕ ಜನರನ್ನು ಪಕ್ಷದತ್ತ ಸೆಳೆಯಬೇಕು’ ಎಂದು ಸಲಹೆ ನೀಡಿದರು.

ರಕ್ತ ಸಂಗ್ರಹ: ‘ಕೋವಿಡ್‌–19 ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಎದುರಾಗಿತ್ತು. ಹೀಗಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕವು ರಕ್ತದಾನ ಶಿಬಿರಗಳನ್ನು ನಡೆಸಿ ಸುಮಾರು 2 ಸಾವಿರ ಯೂನಿಟ್ ರಕ್ತ ಸಂಗ್ರಹಿಸಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲರೆಡ್ಡಿ ಮಾಹಿತಿ ನೀಡಿದರು.

‘ಯುವಕರು ರಕ್ತದಾನ ಶಿಬಿರದ ಮೂಲಕ ರಕ್ತದ ಕೊರತೆ ನೀಗಿಸಲು ಮುಂದೆ ಬಂದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದಂತೆ ಮುಂದೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಸಂಘಟನೆ ಬಲಪಡಿಸಬೇಕು’ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

ಪಕ್ಷದ ಕಾರ್ಯಕರ್ತರು ನಗರದ ವಿವಿಧೆಡೆ ಜನರಿಗೆ ಹಣ್ಣು ಹಂಪಲು ವಿತರಿಸಿದರು. ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಉಪಾಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ನಾಗರಾಜ್, ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ವಸಂತ್, ಕಾರ್ಯದರ್ಶಿ ಅರವಿಂದ್, ನಗರಸಭೆ ಸದಸ್ಯ ಶ್ರೀನಾಥ್, ಕುಡಾ ಸದಸ್ಯ ಅಪ್ಪಿ ನಾರಾಯಣಸ್ವಾಮಿ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು