ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲಿಯೊ ಲಸಿಕೆ: ವದಂತಿಗೆ ಕಿವಿಗೊಡಬೇಡಿ

ಆರೋಗ್ಯವಂತ ಸಮಾಜ ನಿರ್ಮಿಸಿ: ಪೋಷಕರಿಗೆ ಸಂಸದ ಮುನಿಸ್ವಾಮಿ ಕಿವಿಮಾತು
Last Updated 31 ಜನವರಿ 2021, 12:19 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ಕಿವಿಮಾತು ಹೇಳಿದರು.

ಇಲ್ಲಿ ಭಾನುವಾರ ಗಾಂಧಿನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ ಮಾತನಾಡಿ, ‘ಪೋಲಿಯೊ ನಿರ್ಮೂಲನೆಯಲ್ಲಿ ಭಾರತವು ಗಣನೀಯ ಪ್ರಗತಿ ಸಾಧಿಸಿದ್ದು 2014ರಲ್ಲೇ ಪೋಲಿಯೊ ಮುಕ್ತ ರಾಷ್ಟ್ರವಾಗಿದೆ’ ಎಂದು ತಿಳಿಸಿದರು.

‘ಭಾರತದಲ್ಲಿ 2011ರಿಂದ ಹೊಸದಾಗಿ ಯಾವುದೇ ಪೋಲಿಯೊ ಪ್ರಕರಣ ವರದಿಯಾಗಿಲ್ಲ. ಭಾರತವು ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಪೋಲಿಯೊ ಮುಕ್ತ ರಾಷ್ಟ್ರವೆಂಬ ಪ್ರಮಾಣಪತ್ರ ಪಡೆದಿದೆ. ನೆರೆಯ ದೇಶಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣ ಕಂಡುಬಂದಿರುವುದರಿಂದ ಹಾಗೂ ಪೋಲಿಯೊ ಮತ್ತೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಲಸಿಕೆ ಅಭಿಯಾನ ಮುಂದುವರಿಸಲಾಗಿದೆ’ ಎಂದರು.

‘ಕರ್ನಾಟಕದಲ್ಲಿ ಕೊನೆಯ ಪೋಲಿಯೊ ಪ್ರಕರಣ 2007ರಲ್ಲಿ ರಾಜ್ಯಕ್ಕೆ ವಲಸೆ ಬಂದಿದ್ದ ಗುಂಪಿನಲ್ಲಿ ಪತ್ತೆಯಾಗಿತ್ತು. ಆ ನಂತರ ಈವರೆಗೆ ಪೋಲಿಯೊ ಪ್ರಕರಣ ಪತ್ತೆಯಾಗಿಲ್ಲ. ಪೋಷಕರು ಯಾವುದೇ ವದಂತಿಗೆ ಕಿವಿಗೊಡದೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು’ ಎಂದು ಸಲಹೆ ನೀಡಿದರು.

‘ಕೇಂದ್ರ ಸರ್ಕಾರದ ನಿರ್ದೇಶನದಂತೆ ಪೋಲಿಯೊ ನಿರ್ಮೂಲನೆಗಾಗಿ ಈ ವರ್ಷ ಒಂದು ಸುತ್ತಿನ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಮೊದಲನೇ ದಿನ ಬೂತ್‌ಗಳಲ್ಲಿ ಹಾಗೂ ನಂತರದ 2 ದಿನ ಮನೆ ಮನೆ ಭೇಟಿ ಮೂಲಕ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.

ಲಸಿಕೆ ಉಚಿತ: ‘ಪೋಲಿಯೊ ಲಸಿಕೆ ಅಭಿಯಾನದ ಯಶಸ್ಸಿಗೆ ಆರೋಗ್ಯ ಇಲಾಖೆ ಜತೆಗೆ ಇತರೆ ಇಲಾಖೆ ಸಿಬ್ಬಂದಿಯು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು. ಮಕ್ಕಳ ಆರೋಗ್ಯಕರ ಬೆಳವಣಿಗೆ ಹಾಗೂ ಬಾಲ್ಯಾವಸ್ಥೆಯಲ್ಲಿ ಯಾವುದೇ ದೈಹಿಕ ನ್ಯೂನತೆ ಬಾರದಂತೆ ತಡೆಯಲು ಸರ್ಕಾರ ಉಚಿತವಾಗಿ ಈ ಅಭಿಯಾನ ನಡೆಸುತ್ತಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಮಾಹಿತಿ ನೀಡಿದರು.

‘ಹಿಂದಿನ ಕಾಲದಲ್ಲಿ ಕಾಲರ, ಪ್ಲೇಗ್‌ನಂತಹ ಸಾಂಕ್ರಾಮಿಕ ಕಾಯಿಲೆ ಬರುತ್ತಿದ್ದವು. ಲಸಿಕೆ ಮೂಲಕ ಈ ಕಾಯಿಲೆಗಳನ್ನು ನಿಯಂತ್ರಣದಲ್ಲಿ ಇಡಲಾಗಿದೆ. ಪೋಲಿಯೊ ಸಮಸ್ಯೆ ಹೆಚ್ಚಾಗಿ ಚಿಕ್ಕ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ. ಪೋಲಿಯೊ ಕಾಯಿಲೆಗೆ ತುತ್ತಾದ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ’ ಎಂದರು.

ಲಸಿಕೆ ಗುರಿ: ‘ಪೋಲಿಯೊ ಲಸಿಕೆ ಅಭಿಯಾನದಲ್ಲಿ ಜಿಲ್ಲೆಯ 1,57,125 ಮಕ್ಕಳಿಗೆ ಲಸಿಕೆ ಹಾಕುವ ಗುರಿಯಿದೆ. ಒಟ್ಟಾರೆ 743 ಬೂತ್‌, 46 ಸಂಚಾರ ತಂಡ ಹಾಗೂ 1 ಮೊಬೈಲ್ ತಂಡದೊಂದಿಗೆ ಮೊದಲ ದಿನ ಲಸಿಕೆ ಹಾಕಲಾಗುತ್ತದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್‌ಕುಮಾರ್‌ ಮಾಹಿತಿ ನೀಡಿದರು.

‘2 ಮತ್ತು 3ನೇ ದಿನ 3,58,398 ಮನೆಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 1,913 ಗಂಡಾಂತರ ಪ್ರದೇಶ ಗುರುತಿಸಿದ್ದು, ಇಲ್ಲಿನ ಮಕ್ಕಳಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ, ನಗರಸಭೆ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಪ್ರವೀಣ್, ರಾಜ್ಯ ಪೋಲಿಯೊ ಸರ್ವೇಕ್ಷಣಾಧಿಕಾರಿ ಡಾ.ಮಿಸ್ಬಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ.ನಾರಾಯಣಸ್ವಾಮಿ, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT