ಗುರುವಾರ , ಮೇ 26, 2022
31 °C
ಜಿಲ್ಲಾಧಿಕಾರಿ ವೆಂಕಟ್‌ರಾಜಾ ಜತೆ ಕೆಜಿಎಫ್‌ ಶಾಸಕಿ ರೂಪಕಲಾ ಚರ್ಚೆ

ಕಳಪೆ ಕಾಮಗಾರಿ: ಶಿಸ್ತುಕ್ರಮಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯ ಕೆಜಿಎಫ್ ನಗರದಲ್ಲಿ ‌ನಗರೋತ್ಥಾನ ಹಾಗೂ ಅಮೃತ್‌ ಯೋಜನೆ ಕಾಮಗಾರಿಗಳು ಸಕಾಲಕ್ಕೆ ಪೂರ್ಣಗೊಂಡಿಲ್ಲ. ಜತೆಗೆ ಕಾಮಗಾರಿ ಗುಣಮಟ್ಟ ಕಳಪೆಯಾಗಿದ್ದು, ಗುತ್ತಿಗೆದಾರರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಶಾಸಕಿ ಎಂ.ರೂಪಕಲಾ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರಿಗೆ ಮನವಿ ಮಾಡಿದರು.

ಕೆಜಿಎಫ್ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಇಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿದ ಅವರು, ‘ಹೊರ ರಾಜ್ಯದ ಗುತ್ತಿಗೆದಾರರು ಕೆಜಿಎಫ್‌ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್‌ ಪಡೆದಿದ್ದಾರೆ. ಅವರು ಮಾಡಿರುವ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿದ್ದು, ಜನರಿಗೆ ಉತ್ತರ ಕೊಡಲು ಆಗುತ್ತಿಲ್ಲ. ಅಧಿಕಾರಿಗಳಿಗೆ ಸ್ವಲ್ಪವೂ ಜವಾಬ್ದಾರಿ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕೆಜಿಎಫ್‌ ನಗರದಲ್ಲಿ 75 ಕಿ.ಮೀ ಯುಜಿಡಿ ಕಾಮಗಾರಿ ನಡೆಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ₹ 150 ಕೋಟಿ ಅಂದಾಜು ವೆಚ್ಚದಲ್ಲಿ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ, ಈವರೆಗೂ ಕೆಲಸ ಮುಗಿದಿಲ್ಲ. ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರು ವೆಚ್ಚ ಪರಿಷ್ಕರಣೆಗೆ ಬೇಡಿಕೆ ಇಡುತ್ತಿದ್ದಾರೆ’ ಎಂದು ಹೇಳಿದರು.

ಕೈಗಾರಿಕೆ ಸ್ಥಾಪನೆ: ‘ಕೇಂದ್ರ ಸರ್ಕಾರಕ್ಕೆ ಸೇರಿದ 2 ಸಾವಿರ ಎಕರೆ ಬಿಜಿಎಂಎಲ್ ಜಾಗ ಖಾಲಿಯಿದೆ. ಆ ಜಾಗದಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸಚಿವರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದಾರೆ. ಚಿನ್ನದ ಗಣಿಗಾರಿಕೆ ಸ್ಥಗಿತಗೊಂಡು ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಪಾಲಾಗಿವೆ. ಈ ನಿರುದ್ಯೋಗಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಿಜಿಎಂಎಲ್‌ನ ಖಾಲಿ ಜಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವಂತೆ ಜಿಲ್ಲಾಡಳಿತವು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಕೋರಿದರು.

‘ವಸತಿ ರಹಿತರಿಗೆ ಸೂರು ಕಲ್ಪಿಸಲು 15 ಎಕರೆ ಜಾಗ ಗುರುತಿಸಲಾಗಿದೆ. ಆ ಜಾಗವು ಉಪ ವಿಭಾಗಾಧಿಕಾರಿಗಳ ಹೆಸರಿನಲ್ಲಿ ಇದೆ. ಆ ಜಾಗವನ್ನು ಶೀಘ್ರವೇ ನಗರಸಭೆಗೆ ಹಸ್ತಾಂತರ ಮಾಡುವಂತೆ ಮನವಿ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಜಾಗಕ್ಕೆ ಸಂಬಂಧಪಟ್ಟ ಕಡತ ತಮ್ಮ ಕಚೇರಿಗೆ ಬಂದ ತಕ್ಷಣ ಮಂಜೂರಾತಿ ನೀಡುತ್ತೇವೆ’ ಎಂದು ಭರವಸೆ ನೀಡಿದರು.

ಕ್ರಿಯಾಯೋಜನೆ: ‘ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಪಂಗಡ ಕಾಲೊನಿಗಳ ಅಭಿವೃದ್ಧಿಗೆ ಸರ್ಕಾರ ₹ 3 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ಷೇತ್ರದ ಶಾಸಕರ ಗಮನಕ್ಕೆ ತರಾದೆ ಕ್ರಿಯಾಯೋಜನೆ ರೂಪಿಸಿದ್ದಾರೆ. ಹೊರಗಿನ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಅವರು ನೀಡಿರುವ ಕ್ರಿಯಾಯೋಜನೆಯನ್ನು ಅನುಮೋದಿಸಲು ಹೊರಟಿದ್ದಾರೆ. ಆ ಕ್ರಿಯಾಯೋಜನೆಗೆ ಯಾವುದೇ ಕಾರಣಕ್ಕೂ ಅನುಮೋದನೆ ನೀಡಬಾರದು. ನಾನು ಕಳುಹಿಸಿ ಕೊಡುವ ಕ್ರಿಯಾಯೋಜನೆಯನ್ನು ಅನುಮೋದಿಸಬೇಕು’ ಎಂದು ಒತ್ತಾಯಿಸಿದರು.

‘ಕೆಜಿಎಫ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮುಂಡಾಲ ಜಾತಿಗೆ ಸೇರಿದವರಿಗೆ ತಹಶೀಲ್ದಾರ್‌ ಜಾತಿ ಪ್ರಮಾಣಪತ್ರ ನೀಡುತ್ತಿಲ್ಲ. ಇದರಿಂದ ಆ ಸಮುದಾಯದ ಮಕ್ಕಳ ಶಿಕ್ಷಣಕ್ಕೆ, ಉದ್ಯೋಗ ಪಡೆಯಲು ತೊಂದರೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ತಾಲ್ಲೂಕುಗಳಲ್ಲಿ ಇರುವ ಮುಂಡಾಲ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ನೀಡಲಾಗುತ್ತಿದೆ. ಹಿಂದಿನ ತಹಶೀಲ್ದಾರ್‌ಗಳು ಸಹ ಜಾತಿ ಪ್ರಮಾಣಪತ್ರ ಕೊಟ್ಟಿದ್ದಾರೆ. ಆದರೆ, ಈಗಿನ ತಹಶೀಲ್ದಾರ್‌ ಕೊಡುತ್ತಿಲ್ಲ’ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಮುಂಡಾಲ ಸಮುದಾಯವರಿಗೆ ಜಾತಿ ಪ್ರಮಾಣಪತ್ರ ಕೊಡುವಂತೆ ಕೆಜಿಎಫ್ ತಹಶೀಲ್ದಾರ್‌ಗೆ ಸೂಚನೆ ಕೊಡುತ್ತೇನೆ’ ಎಂದು ಹೇಳಿದರು.

ಕೆಜಿಎಫ್‌ ನಗರಸಭೆ ಅಧ್ಯಕ್ಷ ವಿ.ಮುನಿಸ್ವಾಮಿ, ಆಯುಕ್ತ ನವೀನ್‌ಚಂದ್ರ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.