ಮಂಗಳವಾರ, ಏಪ್ರಿಲ್ 13, 2021
24 °C

ಜನಸಂಖ್ಯೆ ನಿಯಂತ್ರಣ ಎಲ್ಲರ ಜವಾಬ್ದಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿದ್ದು, ಜನಸಂಖ್ಯೆ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಜಿ.ನಾರಾಯಣಸ್ವಾಮಿ ಹೇಳಿದರು.

ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

‘1987ರಲ್ಲಿ ಮೊದಲ ಬಾರಿಗೆ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು. ಅಂದಿನಿಂದ ಆರೋಗ್ಯ ಇಲಾಖೆಯು ಪ್ರತಿ ವರ್ಷ ಈ ದಿನವನ್ನು ಆಚರಿಸುತ್ತಿದೆ. ಜನಸಂಖ್ಯಾ ಸ್ಫೋಟ ನಿಯಂತ್ರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಜಾಥಾದ ಮುಖ್ಯ ಉದ್ದೇಶ’ ಎಂದು ತಿಳಿಸಿದರು.

‘ದೇಶದಲ್ಲಿ ಜನಸಂಖ್ಯೆ ನಿಯಂತ್ರಣವಾಗಬೇಕಾದರೆ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಕೆಲ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಚುನಾವಣೆ ಸಂದರ್ಭದಲ್ಲಿ ಪಕ್ಷಗಳು ಸಂವಿಧಾನದ 79ನೇ ವಿಧಿಯನ್ವಯ ಚುನಾವಣಾ ಪ್ರಣಾಳಿಕೆಯಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಪ್ರಸ್ತಾವ ಹೊರಡಿಸಬೇಕು. ಅಧಿಕಾರಕ್ಕೆ ಬಂದ ನಂತರ ಅದನ್ನು ಪಾಲಿಸಬೇಕು. ಭ್ರೂಣ ಹತ್ಯೆ ತಡೆಗಟ್ಟಿ ಮಹಿಳೆಯರ ಶಿಕ್ಷಣಕ್ಕೆ ಆದ್ಯತೆ ನೀಡಬೇಕು’ ಎಂದರು.

‘ಚೀನಾದಲ್ಲಿ ದಂಪತಿ ಒಂದು ಮಗುವಿಗೆ ಮಾತ್ರ ಜನನ ನೀಡಬೇಕು. ಅಂತಹವರಿಗೆ ಮಾತ್ರ ಸರ್ಕಾರದಿಂದ ಎಲ್ಲಾ ಸೌಲಭ್ಯ ಕಲ್ಪಿಸಲಾಗುತ್ತದೆ. ಇಲ್ಲವಾದರೆ ಯಾವುದೇ ಸೌಲಭ್ಯ ನೀಡುವುದಿಲ್ಲ. ದೇಶದಲ್ಲೂ ಇಂತಹ ಕಾನೂನು ಜಾರಿಗೆ ತರಬೇಕು. ಆಗ ಮಾತ್ರ ಜನಸಂಖ್ಯೆ ನಿಯಂತ್ರಿಸಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

‘ಆರೋಗ್ಯ ಇಲಾಖೆ ಸೌಲಭ್ಯವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಬಾಲ್ಯ ವಿವಾಹ ತಡೆಯಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್‌ಕುಮಾರ್‌ ಸಲಹೆ ನೀಡಿದರು.

ಕುಟುಂಬ ಕಲ್ಯಾಣ ಯೋಜನೆಯ ಮಾಹಿತಿ ಒಳಗೊಂಡ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಭಾರತಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರಸನ್ನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.