ಗುರುವಾರ , ಮಾರ್ಚ್ 23, 2023
21 °C
ಮಾರುಕಟ್ಟೆಯಲ್ಲಿ ಜನಜಾತ್ರೆ: ವಹಿವಾಟು ಜೋರು

ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಗ್ರಾಹಕರು ಪೂಜಾ ಸಾಮಗ್ರಿ ಖರೀದಿಸಲು ನಗರದ ಮಾರುಕಟ್ಟೆಗಳಿಗೆ ಬುಧವಾರ ಮುಗಿಬಿದ್ದರು. ವಸ್ತುಗಳ ಬೆಲೆ ಏರಿಕೆ ನಡುವೆಯೂ ಮಾರುಕಟ್ಟೆಯಲ್ಲಿ ವಹಿವಾಟು ಜೋರಾಗಿತ್ತು.

ಹಳೆ ಬಸ್‌ ನಿಲ್ದಾಣ, ಎಂ.ಜಿ.ರಸ್ತೆ, ಹೊಸ ಬಸ್‌ ನಿಲ್ದಾಣ, ದೊಡ್ಡಪೇಟೆ, ವಾಸವಿ ದೇವಸ್ಥಾನ ರಸ್ತೆ, ಕಾಳಮ್ಮ ಗುಡಿ ರಸ್ತೆ, ಅಮ್ಮವಾರಿಪೇಟೆ ಸೇರಿದಂತೆ ಪ್ರಮುಖ ವಾಣಿಜ್ಯ ಸ್ಥಳಗಳ ಸುತ್ತಮುತ್ತ ಹೆಚ್ಚಿನ ಜನಜಂಗುಳಿ ಕಂಡುಬಂತು. ಇಡೀ ದಿನ ವಹಿವಾಟು ಭರ್ಜರಿಯಾಗಿ ನಡೆಯಿತು.

ಹಣ್ಣು, ತರಕಾರಿ, ದಿನಸಿ, ಬಟ್ಟೆ ಹಾಗೂ ಸಿಹಿ ತಿನಿಸು ಅಂಗಡಿಗಳು ಗ್ರಾಹಕರಿಂದ ತುಂಬಿ ಹೋಗಿದ್ದವು. ಪ್ರಮುಖ ರಸ್ತೆಗಳ ಬದಿಯಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವರ್ತಕರು ಹೂವು, ಹಣ್ಣು, ಬಾಳೆಕಂದು, ಬಿದಿರಿನ ಮೊರ, ನೋಮು ದಾರ, ಮಾವಿನ ಸೊಪ್ಪು ಮಾರುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ಕೆಲ ವ್ಯಾಪಾರಿಗಳು ತಳ್ಳು ಗಾಡಿಗಳಲ್ಲಿ ಹಬ್ಬದ ಸಾಮಗ್ರಿಗಳನ್ನು ಮಾರುತ್ತಿದ್ದ ದೃಶ್ಯ ಬಡಾವಣೆಗಳಲ್ಲಿ ಕಂಡುಬಂತು. ಟಿ.ಚನ್ನಯ್ಯ ರಂಗಮಂದಿರ ಮುಂಭಾಗದ ರಸ್ತೆ ಬದಿಯ ಹಣ್ಣಿನ ಅಂಗಡಿಗಳು ಗ್ರಾಹಕರಿಂದ ಗಿಜಿಗುಡುತ್ತಿದ್ದವು.

ಗಗನಕ್ಕೇರಿದ ಬೆಲೆ: ಹಬ್ಬದ ಹಿನ್ನೆಲೆಯಲ್ಲಿ ವಸ್ತುಗಳ ಬೆಲೆ ಗಗನಕ್ಕೇರಿದ್ದವು. ಏಲಕ್ಕಿ ಬಾಳೆ ಕೆ.ಜಿಗೆ ₹ 60, ಪಚ್ಚ ಬಾಳೆ ₹ 30, ಕಿತ್ತಳೆ ₹ 200, ಸೇಬು ₹ 140, ಮೋಸಂಬಿ ₹ 90, ದಾಳಿಂಬೆ ₹ 160, ಬಿಳಿ ದ್ರಾಕ್ಷಿ ₹ 240, ಕಪ್ಪು ದ್ರಾಕ್ಷಿ ₹ 100, ಸಪೋಟ ₹ 80, ಸೀಬೆ ₹ 60 ಇತ್ತು. ತೆಂಗಿನಕಾಯಿ ಒಂದಕ್ಕೆ ₹ 25, ಮಾವಿನ ಸೊಪ್ಪು ಕಟ್ಟಿಗೆ ₹ 15 ಹಾಗೂ ಬಾಳೆಕಂದು ಎರಡಕ್ಕೆ ₹ 80 ಬೆಲೆ ಇತ್ತು.

ಮಲ್ಲಿಗೆ ಬಿಡಿ ಹೂವು ಕೆ.ಜಿಗೆ ₹ 1,200, ಕನಕಾಂಬರ ₹ 1,500, ಕಾಕಡ ₹ 500, ಗುಲಾಬಿ ₹ 150, ಮಾರಿ ಗೋಲ್ಡ್‌ ₹ 80, ಸೇವಂತಿಗೆ ₹ 120, ಮಲ್ಲೆ ₹ 1 ಸಾವಿರ, ಚೆಂಡು ಹೂವು ₹ 40, ಸುಗಂಧರಾಜ ಹೂವು ₹ 130 ಇತ್ತು. ಹೂವು, ಹಣ್ಣಿನ ಜತೆಗೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದ್ದವು. ಪೂಜಾ ಸಾಮಗ್ರಿಗಳ ಖರೀದಿಗಾಗಿ ಮಾರುಕಟ್ಟೆಗೆ ಬಂದಿದ್ದ ಗ್ರಾಹಕರಿಗೆ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿತು.

ಸಂಚಾರ ನಿರ್ಬಂಧ: ಸಮಯ ಕಳೆದಂತೆ ಮಾರುಕಟ್ಟೆಗೆ ಬರುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಾ ಹೋಯಿತು. ಪ್ರಮುಖ ವಾಣಿಜ್ಯ ಸ್ಥಳಗಳಲ್ಲಿ ಸಂಜೆ ವಾಹನ ದಟ್ಟಣೆ ಉಂಟಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ವಾಹನ ಸಂಚಾರ ಹಾಗೂ ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿತ್ತು. ಮಾರುಕಟ್ಟೆ ಪ್ರದೇಶಗಳ ಸುತ್ತಮುತ್ತ ಸಂಚಾರ ನಿರ್ವಹಣೆಗೆ ಹೆಚ್ಚಿನ ಪೊಲೀಸರು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪರಸ್ಥಳದ ಜನರು ಹಬ್ಬ ಆಚರಣೆಗಾಗಿ ಸ್ವಂತ ಊರುಗಳಿಗೆ ಹೋಗಲು ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದ ದೃಶ್ಯ ಕಂಡುಬಂತು. ರಾತ್ರಿ ವೇಳೆಗೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಇತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.