ಗುರುವಾರ , ಜುಲೈ 29, 2021
23 °C
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್‌ ಸೂಚನೆ

ಕೋಲಾರ | ಕೊರೊನಾ ಸೋಂಕಿತರ ಸಾವು ತಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಗುಣಮುಖರಾಗಿಸುವ ಸಂಕಲ್ಪ ಮಾಡಿ. ಯಾವುದೇ ಕ್ಲಿಷ್ಟ ಪರಿಸ್ಥಿತಿ ಎದುರಾದರೂ ಸೋಂಕಿತರ ಸಾವು ಆಗದಂತೆ ತಡೆಯಿರಿ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್‌ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯರಿಗೆ ಸೂಚನೆ ನೀಡಿದರು.

ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ನಗರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಹರಡುವಿಕೆ ತಡೆಗೆ ಎಚ್ಚರ ವಹಿಸಬೇಕು. ಎಸ್‍ಎನ್‍ಆರ್ ಆಸ್ಪತ್ರೆಯನ್ನು 200 ಮಂದಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಷ್ಟು ಸಾಮರ್ಥ್ಯವುಳ್ಳ ಆಸ್ಪತ್ರೆಯಾಗಿ ಸಜ್ಜುಗೊಳಿಸಿ. ಇದಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಸೌಕರ್ಯ ಒದಗಿಸುತ್ತೇವೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಈವರೆಗೆ 23 ಮಂದಿ ಸೋಂಕಿತರಲ್ಲಿ 9 ಮಂದಿ ಗುಣಮುಖರಾಗಿರುವುದು ಒಳ್ಳೆಯ ಬೆಳವಣಿಗೆ. ವೈದ್ಯರು ಇದೇ ಪ್ರಯತ್ನ ಮುಂದುವರಿಸಬೇಕು. ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪೌಷ್ಟಿಕ ಆಹಾರ ನೀಡಬೇಕು. ಆಸ್ಪತ್ರೆಯಲ್ಲಿ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಿ’ ಎಂದು ಸಲಹೆ ನೀಡಿದರು.

‘ಜಿಲ್ಲೆಯ ಆಸ್ಪತ್ರೆಗಳಿಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ವಿಪತ್ತು ಪರಿಹಾರ ನಿಧಿ (ಸಿಆರ್‌ಎಫ್‌‌) ಅನುದಾನದಲ್ಲಿ ಖರೀದಿಸಲು ಅವಕಾಶವಿದೆ. ಈ ಅನುದಾನ ಬಳಸಿಕೊಂಡು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಿ’ ಎಂದು ತಿಳಿಸಿದರು.

‘ಸರ್ಕಾರಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಕೊರೊನಾ ಸೋಂಕಿತರನ್ನು ಗುಣಮುಖರಾಗಿಸುವ ಸಾಮರ್ಥ್ಯ ಸರ್ಕಾರಿ ಆಸ್ಪತ್ರೆಗಳಿಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದೀರಿ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮೆಚ್ಚುಗೆ ವ್ಯಕ್ತಪಡಿಸಿದರು.

‘ಬಡ ರೋಗಿಗಳು ಹೆಚ್ಚಾಗಿ ನಂಬಿಕೊಂಡಿರುವ ಎಸ್‍ಎನ್‍ಆರ್ ಆಸ್ಪತ್ರೆಯನ್ನು ಸರ್ವ ರೀತಿಯಲ್ಲೂ ಸಜ್ಜುಗೊಳಿಸಬೇಕು. ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಗುಣಮುಖರಾಗಿಸಿ ಮನೆಗೆ ಕಳುಹಿಸುವುದರ ಜತೆಗೆ ವೈದ್ಯಕೀಯ ಸೇವೆಯಲ್ಲಿ ಎಸ್‌್ಎನ್‌ಆರ್‌ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದು ನಮ್ಮ ಗುರಿ’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು