ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಕೆರೆಗಳ ಅಭಿವೃದ್ಧಿಗೆ ಆದ್ಯತೆ

ಒಳಾಂಗಣ ಕ್ರೀಡಾಂಗಣ ಕಾಮಗಾರಿ ಶಂಕುಸ್ಥಾಪನೆಯಲ್ಲಿ ಸಂಸದ ಮುನಿಸ್ವಾಮಿ ಹೇಳಿಕೆ
Last Updated 25 ಜೂನ್ 2020, 5:51 IST
ಅಕ್ಷರ ಗಾತ್ರ

ಬಂಗಾರಪೇಟೆ: ಜಿಲ್ಲೆಯ ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚರ್ಚೆ ನಡೆದಿದೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ₹2 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ರೈತ ಬೆಳೆ ಬೆಳೆದರೆ ಮಾತ್ರ ದೇಶ ಸಮೃದ್ಧಿಯಾಗಿರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕೆ.ಸಿ.ವ್ಯಾಲಿ, ಎತ್ತಿನಹೊಳೆ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ಹರಿಸಿ ರೈತರ ಮುಖದಲ್ಲಿ ಮಂದಹಾಸ ಕಾಣುವುದೇ ನಮ್ಮ ಆಶಯ. ರೈತರೇ ದೇಶದ ಜೀವಾಳ ಎಂದರು.

ಕೆಜಿಎಫ್ ಚಿನ್ನದ ಗಣಿ ಪುನರಾರಂಭಿಸಲು ಮನವಿ ಮಾಡಲಾಗಿದೆ. ಅಧಿಕಾರಿಗಳ ತಂಡ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ. ಅಲ್ಲದೆ ಚಿನ್ನದ ಗಣಿಯನ್ನು ಪ್ರವಾಸೋದ್ಯಮ ತಾಣವಾಗಿ ಮಾರ್ಪಡಿಸುವ ಪ್ರಯತ್ನ ನಡೆದಿದೆ ಎಂದರು.

ಕೆಜಿಎಫ್ ವ್ಯಾಪ್ತಿಯಲ್ಲಿ ಕೈಗಾರಿಕೆ ಪಾರ್ಕ್ ಅಭಿವೃದ್ಧಿ ಪಡಿಸುವ ಪ್ರಸ್ತಾಪವಿದೆ. ಈ ಭಾಗದಲ್ಲಿ 12,600 ಎಕರೆ ಜಾಗವಿದ್ದು, ಆ ಪೈಕಿ ಸಾವಿರ ಎಕರೆ ಸುಪರ್ದಿಗೆ ಪಡೆಯಲಾಗಿದೆ. ಇನ್ನೂ ಸಾವಿರದಿಂದ 1,500 ಎಕರೆ ವಶಕ್ಕೆ ಪಡೆದು ಪಾರ್ಕ್ ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಭಾಗದಿಂದ 20 ಸಾವಿರ ಜನ ಕೆಲಸ ಅರಸಿ ನಿತ್ಯ ಬೆಂಗಳೂರಿಗೆ ಹೋಗಿ ಬರುತ್ತಿದ್ದಾರೆ. ಚಿನ್ನದ ಗಣಿ, ಸೋಲಾರ್ ಬಿಡಿ ಭಾಗಗಳ ಕಾರ್ಖಾನೆ ಆರಂಭಿಸಿ ಅವರಿಗೆ ಕೆಲಸ ಕೊಡುವ ಉದ್ದೇಶವಿದೆ. ಜತೆಗೆ ಗಿಡಮರಗಳ ಬೆಳೆಸಿ ಮಲೆನಾಡಿನ ಪರಿಸರ ರೂಪಿಸಬೇಕಾಗಿದೆ ಎಂದು ಹೇಳಿದರು.

‌ಕೊರೊನಾ ಸೋಂಕು ತಡೆಯುವಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ವಿಶ್ವನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸರ್ಕಾರದ ಮಾರ್ಗಸೂಚಿ ಪಾಲಿಸುವ ಮೂಲಕ ಕೊರೊನಾ ಸೋಂಕನ್ನು ಮೆಟ್ಟಿನಿಲ್ಲಬೇಕಿದೆ ಎಂದರು.

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವ್, ಜಿಲ್ಲಾ ಪಂಚಾಯಿತಿ ಸದಸ್ಯ ಶಾಹಿದ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ನಾರಾಯಣಗೌಡ ಭಾಗವಹಿಸಿದ್ದರು.

***

ಯರಗೋಳು ಯೋಜನೆ ಉದ್ಘಾಟನೆ

ಮುಂದಿನ ಗಣರಾಜ್ಯೋತ್ಸಕ್ಕೆ ಯರಗೋಳು ಯೋಜನೆ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.

ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕ್ಷೇತ್ರದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಕೈಗೊಂಡಿರುವ ಕಾರ್ಯ ಇತರರಿಗೆ ಸ್ಫೂರ್ತಿ ಎಂದರು.

ತಾಲ್ಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುತ್ತಿರುವುದು ಕ್ರೀಡಾಪಟುಗಳಿಗೆ ವರದಾನವಾಗಲಿದೆ. ಎಲ್ಲ ತಾಲ್ಲೂಕುಗಳಲ್ಲೂ ಇದೇ ರೀತಿಯ ಕ್ರೀಡಾಂಗಣ ಅಗತ್ಯವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT