ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆ ವ್ಯಾಮೋಹ: ದಾಖಲಾತಿ ಕುಸಿತ

ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಜಯರಾಮರೆಡ್ಡಿ ಕಳವಳ
Last Updated 2 ಫೆಬ್ರುವರಿ 2021, 16:06 IST
ಅಕ್ಷರ ಗಾತ್ರ

ಕೋಲಾರ: ‘ಖಾಸಗಿ ಶಾಲೆಗಳ ಬಗೆಗಿನ ವ್ಯಾಮೋಹದಿಂದ ಸರ್ಕಾರಿ ಶಾಲೆಗಳ ಮಕ್ಕಳ ದಾಖಲಾತಿ ಕುಸಿಯುತ್ತಿದೆ. ಇದು ಮುಂದುವರಿದರೆ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬರಬಹುದು’ ಎಂದು ಡಯಟ್ ಪ್ರಾಂಶುಪಾಲ ಕೆ.ಎಂ.ಜಯರಾಮರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಶಿಕ್ಷಕ ಗೆಳೆಯರ ಬಳಗವು ನಗರದ ಪಿ.ಸಿ.ಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಶಿಕ್ಷಕರಲ್ಲಿ ಬದ್ಧತೆ ಹಾಗೂ ಇಚ್ಛಾಶಕ್ತಿ ಜತೆಗೆ ಶಾಲೆಯಿರುವ ಗ್ರಾಮದ ಜನರೊಂದಿಗೆ ಸೌಹಾರ್ದಯುತ ಸಂಬಂಧವಿದ್ದರೆ ಮಾತ್ರ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ’ ಎಂದರು.

‘ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಿಗೆ ಬಡ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪೋಷಕರು ಶಿಕ್ಷಕರ ಮೇಲೆ ನಂಬಿಕೆಯಿಟ್ಟು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಶಿಕ್ಷಕರು ನಡೆದುಕೊಳ್ಳಬೇಕು. ಬಡ ಮಕ್ಕಳನ್ನು ಸಾಧಕರನ್ನಾಗಿ ಮಾಡಿದರೆ ಅದಕ್ಕಿಂತ ಪುಣ್ಯದ ಕೆಲಸ ಬೇರೊಂದಿಲ್ಲ’ ಎಂದು ಕಿವಿಮಾತು ಹೇಳಿದರು.

‘ಶಿಕ್ಷಕರ ಮನಸ್ಥಿತಿ ಬದಲಾಗಬೇಕು. ಅನ್ನ ನೀಡುತ್ತಿರುವ ಶಾಲೆಯ ಋಣ ತೀರಿಸಲು ಮುಂದಾಗಬೇಕು. ಶಿಕ್ಷಕರು ಮನಸ್ಸು ಮಾಡಿದರೆ ಯಾವುದೇ ಸಾಧನೆ ಕಷ್ಟವಲ್ಲ ಎಂಬುದನ್ನು ಸಾಬೀತು ಮಾಡಬೇಕು. ಸರ್ಕಾರದ ಸೌಲಭ್ಯಗಳ ಜತೆಗೆ ದಾನಿಗಳು, ಆಯಾ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳ ನೆರವು ಪಡೆದು ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡಬೇಕು’ ಎಂದು ಸಲಹೆ ನೀಡಿದರು.

ಕಲಿಕೆಗೆ ನೆರವು: ‘ಇಲಾಖೆಯು ಕೋವಿಡ್ ಆತಂಕದ ನಡುವೆಯೂ ವಿದ್ಯಾಗಮದಂತಹ ಒಳ್ಳೆಯ ಕಾರ್ಯಕ್ರಮ ರೂಪಿಸಿ ಮಕ್ಕಳ ಕಲಿಕೆಗೆ ನೆರವಾಗಿದೆ. ಕೆಲವು ಕಾರಣಗಳಿಂದ ವಿದ್ಯಾಗಮನಕ್ಕೂ ಅಡ್ಡಿಯಾಯಿತು. ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಯಲ್ಲಿ ಸಿಗಬಹುದಾದ ಎಲ್ಲಾ ಆಧುನಿಕ ಸೌಲಭ್ಯಗಳು ಮಕ್ಕಳಿಗೆ ಸಿಗುವಂತಾಗಬೇಕು ಎಂದು ಆಶಿಸಿದರು.

‘ಸರ್ಕಾರಿ ಶಾಲೆಗಳಲ್ಲೂ ಉತ್ತಮ ಫಲಿತಾಂಶ ಬರುತ್ತಿದೆ. ಇದಕ್ಕೆ ಹಿಂದಿನ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವೇ ಸಾಕ್ಷಿ. ಕೋವಿಡ್ ಆತಂಕದಿಂದ ಶಾಲೆಯಿಂದ ದೂರವುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಬರುವಂತೆ ಮಾಡುವುದು ಸವಾಲಿನ ಕೆಲಸ. ಆದರೂ ಪೋಷಕರನ್ನು ಸಂಪರ್ಕಿಸಿ ಮಕ್ಕಳನ್ನು ಶಾಲೆಗೆ ಕರೆತನ್ನಿ’ ಎಂದು ಸಲಹೆ ನೀಡಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ವೀರಣ್ಣಗೌಡ, ಶಾಲೆಯ ಮುಖ್ಯ ಶಿಕ್ಷಕ ಚಂದ್ರಪ್ಪ, ಶಿಕ್ಷಕ ಚಂದ್ರಪ್ಪ, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ಎಸ್‌.ನಾರಾಯಣಸ್ವಾಮಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT