ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 3ನೇ ಅಲೆ ತಡೆಗೆ ಕ್ರಮವಹಿಸಿ

ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಸೂಚನೆ
Last Updated 24 ಜುಲೈ 2021, 5:54 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್ ಮೂರನೇ ಅಲೆ ಬರುವುದಕ್ಕೆ ಅವಕಾಶ ಮಾಡಿಕೊಡದೆ ಇರಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ, ಸೋಂಕು ಹೆಚ್ಚು ಹರಡುವುದನ್ನು ತಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು.

ನಗರದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಇರದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್‌ ನಿಗ್ರಹಕ್ಕೆ ಪ್ರಯತ್ನ ಮಾಡುವ ಆರೋಗ್ಯ ಸಿಬ್ಬಂದಿ,ಮುಂಚೂಣಿ ಕಾರ್ಯಕರ್ತರು ಮತ್ತು 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮೊದಲು ಲಸಿಕೆ ಹಾಕಿದೆಯೇ ಎಂಬುದನ್ನು ಪರಿಶೀಲಿಸಬೇಕು. ಪ್ರತಿ ಮನೆಗೂ ಭೇಟಿ ನೀಡಿ ಮಧುಮೇಹ ಕಾಯಿಲೆ ಬಗ್ಗೆ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು ಎಂದರು.

ಪ್ರತಿಯೊಂದು ತಾಲ್ಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಹಾಗೂ ಮಕ್ಕಳ ಆರೈಕೆ ಕೇಂದ್ರಗಳನ್ನು ಸಿದ್ಧ ಮಾಡಿಕೊಳ್ಳಿ. ಆಸ್ಪತ್ರೆಗಳಲ್ಲಿ ಆಮ್ಲಜನಕ ಬೆಡ್‍ಗಳ ಸಂಖ್ಯೆ ಹೆಚ್ಚಿಸಬೇಕು. ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗುವುದರಿಂದ ಪ್ರತಿಯೊಬ್ಬರೂ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಒಂದೂವರೆ ವರ್ಷದಿಂದ ಮಕ್ಕಳು ಶಾಲೆಗೆ ಬರದೇ ಹೊರಗೇ ಉಳಿದಿದ್ದಾರೆ. ಮಕ್ಕಳು ಶಾಲೆಗೆ ಬರುವುದಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಮತ್ತು ಶಾಲೆಗಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪ್ರತಿಯೊಂದು ಮಗುವಿಗೂ ಶೇ 100ರಷ್ಟು ಶಿಕ್ಷಣ ನೀಡುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ
ಸೂಚಿಸಿದರು.

ಅಪೌಷ್ಠಿಕ ಮಕ್ಕಳಿಗೆ ಹೆಚ್ಚಿನ ಪೌಷ್ಠಿಕ ಆಹಾರವನ್ನು ಒದಗಿಸಿ ಮಕ್ಕಳ ಆರೈಕೆಯ ಬಗ್ಗೆ ತಾಯಂದಿರಲ್ಲಿ ಅರಿವು ಮೂಡಿಸಬೇಕು. ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಲ್ಲಿ ಪ್ರತಿಯೊಬ್ಬ ನಾಗರಿಕರನ್ನು 7 ವಾರಗಳಲ್ಲಿ ನೊಂದಾಯಿಸಿ ಅವರಿಗೆ ಚೀಟಿಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮಳೆಯು ಚೆನ್ನಾಗಿ ಆಗುತ್ತಿರುವುದರಿಂದ ನರೇಗಾ ಯೋಜನೆಯಡಿ ಎಲ್ಲಾ ತಾಲ್ಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯ ಕೃಷಿ ಹೊಂಡಗಳನ್ನು ನಿರ್ಮಿಸಿ ಎಂದು ಕೃಷಿ ಅಧಿಕಾರಿಗಳಿಗೆ ಮಹದೇವನ್ ಸೂಚಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಸೋಂಕಿತರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT