ಭಾನುವಾರ, ಜೂನ್ 26, 2022
29 °C
ಕಾಯ್ದೆಗಳ ಪ್ರತಿ ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ಸಂಪೂರ್ಣ ಕ್ರಾಂತಿ ದಿನದ ಅಂಗವಾಗಿ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶನಿವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ನೂತನ ಕೃಷಿ ಕಾಯ್ದೆಗಳ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

‘ಕೃಷಿ ವಿರೋಧಿ ಕಾಯ್ದೆಗಳ ವಿರುದ್ಧ ಲಕ್ಷಾಂತರ ರೈತರು ದೆಹಲಿ ಗಡಿಯಲ್ಲಿ 6 ತಿಂಗಳಿನಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಸುಮಾರು 200 ರೈತರು ಮೃತಪಟ್ಟಿದ್ದಾರೆ. ಈ ಬಗ್ಗೆ ಗಮನ ಹರಿಸದ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಿಡಿಕಾರಿದರು.

‘ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಈ ಜನ ವಿರೋಧಿ ನಡೆಯಿಂದ ಇಡೀ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬಂದಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ನೂತನ ಕೃಷಿ, ಕಾರ್ಮಿಕ ಕಾಯ್ದೆಗಳ ಜಾರಿಯಿಂದ ಆಗುವ ಅನಾಹುತಗಳ ಬಗ್ಗೆ ತಜ್ಞರು, ಚಿಂತಕರು ಹಲವು ವಿಚಾರ ಮುಂದಿಟ್ಟಿದ್ದಾರೆ. ರೈತ ಸಂಘದ ರಾಷ್ಟ್ರೀಯ ನಾಯಕರು ದೇಶದ ಮೂಲೆ ಮೂಲೆಯಲ್ಲಿ ಸಮಾವೇಶ ನಡೆಸಿದ್ದಾರೆ. ಈ ಕಾಯ್ದೆಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದರೂ ಕೇಂದ್ರವು ರೈತರ ಹೋರಾಟ ಕಡೆಗಣಿಸಿರುವುದು ನಾಚಿಕೆಗೇಡು’ ಎಂದು ದೂರಿದರು.

ಬೆಲೆ ಏರಿಕೆ ಪೆಟ್ಟು: ‘ಕೋವಿಡ್‌ ಹಾಗೂ ಲಾಕ್‌ಡೌನ್‌ ಹೊಡೆತದಿಂದ ತತ್ತರಿಸಿರುವ ರೈತರಿಗೆ ಕೃಷಿ ಪರಿಕರಗಳು, ರಸಗೊಬ್ಬರ ಹಾಗೂ ತೈಲೋತ್ಪನ್ನಗಳ ಬೆಲೆ ಏರಿಕೆಯು ದೊಡ್ಡ ಪೆಟ್ಟು ಕೊಟ್ಟಿದೆ. ಕೃಷಿ ಉತ್ಪನ್ನಗಳ ಬೆಲೆ ಕುಸಿತದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಕಂಗಾಲಾಗಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಹೇಳಿದರು.

‘ಬಿಜೆಪಿ ಸರ್ಕಾರದ ದಮನಕಾರಿ ಮತ್ತು -ವಿಭಜನಕಾರಿ ನೀತಿ ಖಂಡಿಸಿ ರೈತರು ದೆಹಲಿ ಗಡಿಯಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಸಾಕಷ್ಟು ರೈತರು ಹುತಾತ್ಮರಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ’ ಎಂದು ಟೀಕಿಸಿದರು.

ರೈತರಿಗೆ ಅವಮಾನ: ‘ರೈತರು ದೇಶಕ್ಕೆ ಅನ್ನ ನೀಡುವ ಜನ ತಾವೆಂದು ಸಂಭ್ರಮಿಸುವ ಬದಲು ಸಮಸ್ಯೆ ಮುಂದಿಟ್ಟುಕೊಂಡು ಬೀದಿಗಿಳಿದು ಹೋರಾಟ ಮಾಡುವ ದುಸ್ಥಿತಿ ಬಂದಿದೆ. ಜವಾಬ್ದಾರಿಯುತ ಕೇಂದ್ರ ಸರ್ಕಾರ ಹೋರಾಟನಿರತ ರೈತರನ್ನು ಕರೆದು ಚರ್ಚಿಸುವ ಬದಲು ರೈತರಿಗೆ ಅವಮಾನ ಮಾಡುತ್ತಿದೆ’ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರಗಳು ಕೃಷಿ ಕ್ಷೇತ್ರ ನಾಶ ಮಾಡಿ ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸುತ್ತಿವೆ. ರೈತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ರೈತರನ್ನು ಶೋಷಿಸುತ್ತಿವೆ. ರೈತ ವಿರೋಧಿ ಕಾಯ್ದೆಗಳನ್ನು ಮಂಡಿಸಿ ತುಘಲಕ್‌ ದರ್ಬಾರ್‌ ನಡೆಸುತ್ತಿವೆ. ಲಜ್ಜೆಗೆಟ್ಟ ಸರ್ಕಾರಗಳಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ. ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಗುಡುಗಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ವಿ.ಮಂಜುನಾಥ್, ಸದಸ್ಯರಾದ ಮುನಿಯಪ್ಪ, ರಾಜಶೇಖರ್ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.