ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಆರೋಪಿಗಳ ಭೂತದಹನ: ಸರ್ಕಾರದ ವಿರುದ್ಧ ರೈತ ಸಂಘ ಸದಸ್ಯರ ಆಕ್ರೋಶ
Last Updated 28 ಆಗಸ್ಟ್ 2021, 15:14 IST
ಅಕ್ಷರ ಗಾತ್ರ

ಕೋಲಾರ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಸಾಮೂಹಿಕ ನಾಯಕತ್ವದ ರೈತ ಸಂಘದ ಸದಸ್ಯರು ಇಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.

ಗಾಂಧಿವನದ ಬಳಿ ಪ್ರಕರಣದ ಆರೋಪಿಗಳ ಭೂತದಹನ ಮಾಡಿದ ಪ್ರತಿಭಟನಾಕಾರರು, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಕೃತ್ಯಗಳು ಹೆಚ್ಚಿದ್ದು, ಮಹಿಳೆಯರು ಹಾಗೂ ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಆಡಳಿತಾತ್ಮಕ ಅರಾಜಕತೆ ಸೃಷ್ಟಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ಇದೆ. ಮೈಸೂರಿನ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಿಡಿಕಾರಿದರು.

‘ಬಿಜೆಪಿಯು ರಾಮಮಂದಿರ ಕಟ್ಟಲು ಹೊರಟಿದೆ. ಆದರೆ, ಆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಮನೆಯಿಂದ ಹೊರ ಹೋಗಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಮತ್ತು ಪೊಲೀಸ್‌ ಇಲಾಖೆಯು ಮಹಿಳೆಯರ ಸುರಕ್ಷತೆ ನಿರ್ಲಕ್ಷಿಸಿವೆ. ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಆತಂಕಗೊಂಡಿದ್ದಾರೆ’ ಎಂದು ಹೇಳಿದರು.

ಕಾಳಜಿಯಿಲ್ಲ: ‘ಘಟನೆ ಸಂಬಂಧ ಮೈಸೂರಿನ ಪೊಲೀಸರು ಶೀಘ್ರವೇ ದೂರು ದಾಖಲಿಸದೆ ಪ್ರಕರಣ ಮರೆಮಾಚಲು ಯತ್ನಿಸಿದ್ದರು. ಮತ್ತೊಂದೆಡೆ ಗೃಹ ಸಚಿವರು, ಬಿಜೆಪಿ ಶಾಸಕರು, ಸಂಸದರು ಪ್ರಕರಣದ ಬಗ್ಗೆ ಲಘುವಾಗಿ ಮಾತನಾಡಿ ಬೇಜವಾಬ್ದಾರಿ ತೋರಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ರಕ್ಷಣೆ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ’ ಎಂದು ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಳಿನಿಗೌಡ ಆರೋಪಿಸಿದರು.

ಗಲ್ಲಿಗೇರಿಸಿ: ‘ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸಬೇಕು. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮತ್ತು ದುಡಿಯುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಸಮಿತಿ ರಚಿಸಬೇಕು. ಪ್ರಕರಣದ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಪ್ರಬಲ ಕಾನೂನು ಜಾರಿಗೊಳಿಸಬೇಕು. ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ಅಪರಾಧಿಗಳಿಗೆ ಶೀಘ್ರವೇ ಶಿಕ್ಷೆಯಾಗುವಂತೆ ಮಾಡಬೇಕು. ಜಸ್ಟಿಸ್ ವರ್ಮಾ ಸಮಿತಿ ಶಿಫಾರಸು ಜಾರಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಸದಸ್ಯರಾದ ಶಿವಾರೆಡ್ಡಿ, ಕಿಶೋರ್, ಕಿರಣ್, ಚಲಪತಿ, ನಾಗೇಶ್, ತಿಮ್ಮಣ್ಣ, ಲಕ್ಷ್ಮೀ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT