ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೂರು: ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಧರಣಿ

ದಲಿತ ಮತ್ತು ಅಲ್ಪಸಂಖ್ಯಾತರ ಐಕ್ಯತಾ ವೇದಿಕೆ ಒತ್ತಾಯ
Last Updated 20 ಜನವರಿ 2021, 3:19 IST
ಅಕ್ಷರ ಗಾತ್ರ

ಮಾಲೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ ದಲಿತ ಮತ್ತು ಅಲ್ಪಸಂಖ್ಯಾತರ ಐಕ್ಯತಾ ವೇದಿಕೆ ಕಾರ್ಯಕರ್ತರು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಸಿದರು.

ಜನಪದ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ತನ್ನದೇ ಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳುವಂತೆ ಆಹಾರ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನ ಬದ್ಧವಾದ ನಮ್ಮ ಹಕ್ಕುಗಳನ್ನು ರಕ್ಷಿಸಿ ಜಾರಿ ಮಾಡುವ ಬದಲು ತನ್ನ ವೈಯಕ್ತಿಕವಾದ ಮನುವಾದ, ಕೇಸರಿ ಅಜೆಂಡಗಳನ್ನು ಸಮಾಜದ ಮೇಲೆ ಹೇರುತ್ತಾ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆಸುತ್ತಿದೆ ಎಂದು ಕಿಡಿಕಾರಿದರು.

ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಆಹಾರ ಪದ್ಧತಿಯ ಮೇಲೆ ದಬ್ಬಾಳಿಕೆ ನಡೆಸಿ ಗೋಮಾತೆ ಹೆಸರಿನಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದು ಸಂವಿಧಾನ ವಿರೋಧಿ ನೀತಿಯಾಗಿದೆ. ಈ ಕಾಯ್ದೆಗಳ ಜಾರಿ ಹಿಂದೆ ದುರುದ್ದೇಶವಿದ್ದು, ಗೋರಕ್ಷಣೆ ಹಾಗೂ ಗೋಶಾಲೆ ಹೆಸರಲ್ಲಿ ಸರ್ಕಾರದಿಂದ ಅನುದಾನಗಳನ್ನು ಪಡೆದುಕೊಳ್ಳುವುದರ ಜೊತೆಗೆ ದೇಶವನ್ನೆ ಒಡೆಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಮುಂದಾಗಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ತಿರಸ್ಕರಿಸಬೇಕು. ಹಾಗೂ ಕೃಷಿ ಕಾಯ್ದೆಗಳನ್ನುಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್‌ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್, ವೆಂಕಟಾಪು ಸತ್ಯಂ, ಅಂಬೇಡ್ಕರ್ ಸಾಮಾಜಿಕ ನ್ಯಾಯ ಸಮಿತಿ ಬಿ.ವಿ.ಸಂಪಂಗಿ, ಕೆಪಿಆರ್‌ಎಸ್ ಮುನಿಸ್ವಾಮಿಗೌಡ, ವಸಂತ್ ಕುಮಾರ್, ದೊಡ್ಡಮಲ್ಲೆ ರವಿ, ಅಮ್ಜದ್, ಎಸ್.ಕೆ.ಮೌಲಾನಿ, ರಾಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT