ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಹೊಳೇರಹಳ್ಳಿ: ಮಾರಾಮಾರಿಯಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು
Last Updated 21 ಮೇ 2020, 16:08 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಹೊಳೇರಹಳ್ಳಿಯಲ್ಲಿ 2 ಕುಟುಂಬಗಳ ನಡುವೆ ನಡೆದಿದ್ದ ಮಾರಾಮಾರಿಯಲ್ಲಿ ಗಾಯಗೊಂಡಿದ್ದ ಮುನಿನಾರಾಯಣಮ್ಮ (60) ಅವರು ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಕುಟುಂಬ ಸದಸ್ಯರು ಇಲ್ಲಿನ ಎಸ್ಪಿ ಕಚೇರಿ ಹಾಗೂ ತಾಲ್ಲೂಕಿನ ವೇಮಗಲ್‌ ಪೊಲೀಸ್‌ ಠಾಣೆ ಎದುರು ಗುರುವಾರ ಪ್ರತಿಭಟನೆ ಮಾಡಿದರು.

‘ವೇಮಗಲ್‌ ಠಾಣೆ ಪೊಲೀಸರು ಹಲ್ಲೆ ಘಟನೆ ನಡೆದು 7 ದಿನವಾದರೂ ಪ್ರಕರಣದ ಆರೋಪಿಗಳನ್ನು ಬಂಧಿಸಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದಿರುವ ಪೊಲೀಸರು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಸದೆ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಶಾಸಕ ವರ್ತೂರು ಪ್ರಕಾಶ್‌, ‘ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಜಮೀನು ವಿವಾದದ ಕಾರಣಕ್ಕೆ ಮುನಿನಾರಾಯಣಮ್ಮ ಮತ್ತು ಕುಟುಂಬ ಸದಸ್ಯರ ಮೇಲೆ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ವಿಡಿಯೋ ವೈರಲ್‌ ಆಗಿದೆ. ಆದರೂ ಪೊಲೀಸರು ಆರೋಪಿಗಳ ಬಂಧನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜತೆ ಮಾತನಾಡಿದ್ದು, ಅವರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ನಿಮಗೆ ಅನ್ಯಾಯವಾಗಲು ಬಿಡುವುದಿಲ್ಲ, ಧೈರ್ಯವಾಗಿರಿ’ ಎಂದು ಪ್ರತಿಭಟನಾಕಾರರ ಮನವೊಲಿಸಿದರು.

‘ವೇಮಗಲ್‌ ಠಾಣೆ ಎಸ್‌ಐ ಕೇಶವಮೂರ್ತಿ ಅವರನ್ನು ಅಮಾನತು ಮಾಡಬೇಕು. ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್ ವೆಂಕಟೇಶ್, ದರಖಾಸ್ತು ಸಮಿತಿ ಮಾಜಿ ಅಧ್ಯಕ್ಷ ಬೆಗ್ಲಿ ಪ್ರಕಾಶ್ ಹಾಗೂ ಹೊಳೇರಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT