ಮಂಗಳವಾರ, ಜನವರಿ 26, 2021
24 °C
ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ಹಂಚಲು ಆಗ್ರಹ

ದಸಂಸ ಸದಸ್ಯರಿಂದ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ತಾಲ್ಲೂಕಿನ ಕೋಟಿಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಜಮೀನನ್ನು ಕೆಲ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಅದರ ಒತ್ತುವರಿ ತೆರವುಗೊಳಿಸಿ ನಿವೇಶನ, ವಸತಿ ರಹಿತರಿಗೆ ನಿವೇಶನಗಳು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಲ್ಲಿ ಸೋಮವಾರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಹೂವಳ್ಳಿ ಸಿ.ನಾಗೇಶ್ ಮಾತನಾಡಿ, ‘ಕೋಟಿಗಾನಹಳ್ಳಿಯ ಸರ್ಕಾರಿ ಜಮೀನಿನಲ್ಲಿ ದಲಿತ ಕುಟುಂಬದ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ, ಉಪವಿಭಾಗಾಧಿಕಾರಿ ನ್ಯಾಯಾಲಯದಿಂದ ಆದೇಶವಾಗಿದ್ದರೂ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ’ ಎಂದು ದೂರಿದರು.

‘ಗ್ರಾಮದಲ್ಲಿನ ಸರ್ಕಾರಿ ಜಾಗ ಗ್ರಾಮ ಪಂಚಾಯಿತಿಗೆ ಸೇರಿರುವ ಸ್ವತ್ತಾಗಿದ್ದು, ಈ ಜಮೀನಿಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳ ಸಮೇತ ಒತ್ತುವರಿ ತೆರವುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ, ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ದಲಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಹಿಂದೆ ತಾಲ್ಲೂಕು ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಯ ವಾಹನ ದುರ್ಬಳಿಕೆ ಮಾಡಿಕೊಂಡು ಮರಳು ದಂಧೆಯಲ್ಲಿ ತೊಡಗಿಸಿಕೊಂಡು ಹಣ ವಸೂಲಿ ಮಾಡಿದ್ದಾರೆ. ತಹಶೀಲ್ದಾರ್ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಸಿಬ್ಬಂದಿಯ ಮೇಲೆ ಪ್ರಕರಣ ದಾಖಲಿಸಬೇಕು’ ಎಂದು
ಆಗ್ರಹಿಸಿದರು.

‘ತಾಲ್ಲೂಕಿನ ಕೊಂಡಸಂದ್ರ ಗ್ರಾಮದ ಸ.ನಂ30ರಲ್ಲಿ ದಲಿತ ಕುಟುಂಬಗಳಿಗೆ ಜಮೀನು ಮಂಜೂರಾಗಿದ್ದು, ಅದರಂತೆ ಫಲಾನುಭವಿಗೆ ಕೂಡಲೇ ಸಾಗುವಳಿ ಚೀಟಿ ವಿತರಿಸಬೇಕು. ತಾಲ್ಲೂಕಿನ ಮಲಿಯಪ್ಪನಹಳ್ಳಿ ಗ್ರಾಮದ ಸರ್ವೆ ಸಂ.43ರ ಪೈಕಿ ಮಹೇಶ್ವರಪ್ಪ ಹೆಸರಿಗೆ ಕೂಡಲೇ ಗಣಕೀಕೃತ ಪಹಣಿ ನಮೂದು ಮಾಡಬೇಕು. ನಮ್ಮ ಹಕ್ಕೋತ್ತಾಯಗಳಿಗೆ ಪರಿಹಾರ ಸಿಗದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಎನ್.ಮೂರ್ತಿ, ಜಿಲ್ಲಾ ಸಂಚಾಲಕರ ಮುನಿಆಂಜಿನಯ್ಯು, ಪದಾಧಿಕಾರಿಗಳಾದ ಹನುಮಪ್ಪ, ರವಿ, ಆಂಜಿ ಪಾಲ್ಗೊಂಡಿದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.