ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿ ಕೊಟ್ಟ ಕುಟುಂಬಕ್ಕೆ ಉದ್ಯೋಗ ನೀಡಿ

Last Updated 5 ಅಕ್ಟೋಬರ್ 2019, 10:04 IST
ಅಕ್ಷರ ಗಾತ್ರ

ಕೋಲಾರ: ‘ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡಿದ ರೈತರ ಕುಟುಂಬದ ಒಬ್ಬ ಸದಸ್ಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

ಇಲ್ಲಿ ಶುಕ್ರವಾರ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿ, ‘ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡಿದವರಿಗೆ ಸೂಕ್ತ ಉದ್ಯೋಗ ನೀಡುತ್ತಿಲ್ಲ ಎಂದು ದೂರು ಬಂದಿವೆ. ಜಮೀನು ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ಕಲ್ಪಿಸುವುದನ್ನು ಆದ್ಯತೆಯಾಗಿ ತೆಗೆದುಕೊಳ್ಳಿ’ ಎಂದು ಸೂಚಿಸಿದರು.

‘ತಾಲ್ಲೂಕಿನ ನರಸಾಪುರ ಮತ್ತು ವೇಮಗಲ್‌ನಲ್ಲಿ ಕೈಗಾರಿಕೆಗಳು ಬೆಳೆಯುತ್ತಿವೆ. ಈ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು. ಹೆಚ್ಚು ಉದ್ಯೋಗ ಮೇಳ ನಡೆಸಿ ಅರ್ಹರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.

‘ಕೈಗಾರಿಕೆ ಸ್ಥಾಪನೆಗೆ ಭೂಮಿ ನೀಡಿದ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವುದು ಆದ್ಯ ಕರ್ತವ್ಯ. ಭೂಮಿ ನೀಡಿದವರ ಪೈಕಿ ಎಷ್ಟು ಮಂದಿಗೆ ಕೆಲಸ ನೀಡಿದ್ದೀರಿ? ಯಾರಿಗೆ ನೀಡಿಲ್ಲ ಮತ್ತು ಅದಕ್ಕೆ ಕಾರಣವೇನು ಎಂಬ ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಕಂಪನಿಗಳ ಪ್ರತಿನಿಧಿಗಳಿಗೆ ಸೂಚಿಸಿದರು.

‘ಕೈಗಾರಿಕೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲ ತುಂಬುವಾಗ ಸ್ಥಳೀಯರಿಗೆ ಹೆಚ್ಚು ಆದ್ಯತೆ ಕೊಡಬೇಕು. ಕೈಗಾರಿಕೆಗಳಿಗೆ ಅವಶ್ಯಕವಾದ ವೃತ್ತಿ ಕೌಶಲದ ಬಗ್ಗೆ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಮಾಹಿತಿ ನೀಡಿ. ಕಾರ್ಯಾಗಾರ ಹಮ್ಮಿಕೊಂಡು ಕೈಗಾರಿಕಾ ತರಬೇತಿ ಸಂಸ್ಥೆಗಳ ಶಿಕ್ಷಕರಿಗೆ ತರಬೇತಿ ನೀಡಿ. ಬಳಿಕ ಆ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕೌಶಲ ಅಭಿವೃದ್ಧಿಪಡಿಸುತ್ತಾರೆ’ ಎಂದು ಕಿವಿಮಾತು ಹೇಳಿದರು.

ಮಾಹಿತಿ ನೀಡಬೇಕು: ‘ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 3 ತಿಂಗಳಿಗೊಮ್ಮೆ ಮಿನಿ ಉದ್ಯೋಗ ಮೇಳ ನಡೆಸುವ ಬಗ್ಗೆ ಕಂಪನಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಮುಂದಿನ ಸಭೆಯಲ್ಲಿ ಎಲ್ಲಾ ಕಂಪನಿಗಳ ಪ್ರತಿನಿಧಿಗಳು ಹಾಜರಿರಬೇಕು’ ಎಂದು ತಿಳಿಸಿದರು.

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಪಡೆಯಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಎಚ್.ವಿ.ದರ್ಶನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಂಪನಿ ಪ್ರತಿನಿಧಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT