ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಹಾಸ್ಟೆಲ್‌ಗೆ ಮೂಲಸೌಕರ್ಯ ಕಲ್ಪಿಸಿ

Last Updated 23 ಜುಲೈ 2019, 20:31 IST
ಅಕ್ಷರ ಗಾತ್ರ

ಕೋಲಾರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರಿಗೆ ಇಲ್ಲಿ ಮಂಗಳವಾರ ಮನವಿ ಸಲ್ಲಿಸಿದರು.

‘ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿನಿಲಯಗಳ ಪರಿಸ್ಥಿತಿ ಶೋಚನೀಯವಾಗಿದೆ. ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ. ಜತೆಗೆ ನೀರಿನ ಸಮಸ್ಯೆ ಗಂಭೀರವಾಗಿದೆ. ಶೌಚಾಲಯಗಳು ಶಿಥಿಲಗೊಂಡಿದ್ದು, ಸ್ವಚ್ಛತೆ ಇಲ್ಲವಾಗಿದೆ’ ಎಂದು ಸಮಿತಿ ಸದಸ್ಯರು ದೂರಿದರು.

‘ಬಹುತೇಕ ಹಾಸ್ಟೆಲ್‌ಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳು ಜೀವ ಭಯದಲ್ಲಿ ದಿನ ದೂಡುವಂತಾಗಿದೆ. ಹಾಸ್ಟೆಲ್‌ಗಳಲ್ಲಿ ವಾರ್ಡನ್‌, ಅಡುಗೆ ಸಿಬ್ಬಂದಿ ಹುದ್ದೆಗಳು ಖಾಲಿಯಿವೆ. ಹುಳು ಬಿದ್ದ ತರಕಾರಿ ಮತ್ತು ಕಳಪೆ ಆಹಾರ ಪದಾರ್ಥಗಳನ್ನು ಬಳಸಿ ಅಡುಗೆ ಮಾಡಲಾಗುತ್ತಿದೆ. ಹಾಸ್ಟೆಲ್‌ಗೆ ಮಂಜೂರಾದ ಆಹಾರ ಪದಾರ್ಥಗಳನ್ನು ವಾರ್ಡನ್‌ ಹಾಗೂ ಅಡುಗೆ ಸಿಬ್ಬಂದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸಮಿತಿಯ ರಾಜ್ಯ ಘಟಕದ ಸಂಚಾಲಕ ರಮೇಶ್ ಆರೋಪಿಸಿದರು.

‘ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿದರೆ ಸಾಕಷ್ಟು ಹಾಸ್ಟೆಲ್‌ಗಳಲ್ಲಿ ಕೊಠಡಿಗಳ ಸಂಖ್ಯೆ ತುಂಬಾ ಕಡಿಮೆಯಿದೆ. ಹೀಗಾಗಿ ಒಂದೊಂದು ಕೊಠಡಿಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ಇರಿಸಲಾಗಿದೆ. ಹಲವು ಹಾಸ್ಟೆಲ್‌ಗಳು ಮಳೆಗೆ ಸೋರುತ್ತಿದೆ. ಹಾಸ್ಟೆಲ್‌ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಕೊಡುತ್ತಿಲ್ಲ. ಮೂಲಸೌಕರ್ಯ ಸಮಸ್ಯೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿದೆ. ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಕಿಡಿಕಾರಿದರು.

ಉನ್ನತಿಗೆ ಸಹಕರಿಸಿ: ‘ವಿದ್ಯಾರ್ಥಿನಿಲಯಗಳ ಉನ್ನತಿಗೆ ಸಹಕರಿಸಬೇಕು. ಹಾಸ್ಟೆಲ್‌ಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಪರಿಹರಿಸಬೇಕು. ವಾರ್ಡನ್‌ ಮತ್ತು ಅಡುಗೆ ಸಿಬ್ಬಂದಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು. ಆಹಾರದ ಗುಣಮಟ್ಟ ಸುಧಾರಿಸಬೇಕು. ಮಹಿಳಾ ವಿದ್ಯಾರ್ಥಿನಿಲಯಗಳಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು’ ಎಂದು ಸಮಿತಿ ಸದಸ್ಯರು ಮನವಿ ಮಾಡಿದರು.

ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಮುನಿಯಪ್ಪ, ಸಂಘಟನಾ ಸಂಚಾಲಕರಾದ ವೆಂಕಟರವಣಪ್ಪ, ಎಚ್.ಮುನಿಚೌಡಪ್ಪ, ವೆಂಕಟೇಶ್, ಗೋವಿಂದರಾಜು, ಕೇಶವ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT