ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯೆ ಅನುಸಾರ ಅಲ್ಪಸಂಖ್ಯಾತರಿಗೆ ಸವಲತ್ತು ಒದಗಿಸಿ

ವಿಳಂಬ ಆಗಬಾರದು: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸೂಚನೆ
Last Updated 18 ಮೇ 2022, 14:30 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸವಲತ್ತುಗಳನ್ನು ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸೂಚಿಸಿದರು.

ಪ್ರಧಾನಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ 15 ಅಂಶಗಳ ಕಾರ್ಯಕ್ರಮ ಕುರಿತು ಇಲ್ಲಿ ಬುಧವಾರ ನಡೆದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಸರ್ಕಾರದ ವಿವಿಧ ಯೋಜನೆಗಳ ಮೂಲಕ ಅರ್ಹ ಅಲ್ಪಸಂಖ್ಯಾತರಿಗೆ ಸೌಲಭ್ಯ ಕಲ್ಪಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬ ಆಗಬಾರದು’ ಎಂದು ತಿಳಿಸಿದರು.

‘ಅರ್ಹ ಫಲಾನುಭವಿಗಳಿಗೆ ಕಾಲಮಿತಿಯೊಳಗೆ ಸರ್ಕಾರದ ಸವಲತ್ತುಗಳು ಪೂರ್ಣ ಪ್ರಮಾಣದಲ್ಲಿ ತಲುಪಬೇಕು. ಸವಲತ್ತು ಹಂಚಿಕೆಯಲ್ಲಿ ಮಧ್ಯವರ್ತಿಗಳ ಅಥವಾ ದಲ್ಲಾಳಿಗಳ ಹಸ್ತಕ್ಷೇಪ ಇರಬಾರದು. ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯಕ್ಕಾಗಿ ಸರ್ಕಾರ ಬಿಡುಗಡೆ ಮಾಡಿದ ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋಗಬಾರದು’ ಎಂದು ಎಚ್ಚರಿಕೆ ನೀಡಿದರು.

‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯದವರ ಶೈಕ್ಷಣಿಕ ಹಾಗೂ ಸರ್ವತ್ತೋಮುಖ ಅಭಿವೃದ್ಧಿಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬೇರ್ಪಟ್ಟು 1999-2000ನೇ ಸಾಲಿನಿಂದ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಮಹದೇವ ವಿವರಿಸಿದರು.

‘ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಮತ್ತು ಮಾಹಿತಿ ಕೇಂದ್ರ ಸ್ಥಾಪಿಸುವ ಮೂಲಕ ಸಮುದಾಯದವರಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಭಾರತ ಸಂವಿಧಾನದ ಅನುಚ್ಛೇದ 15(4)ರಡಿ ಶೈಕ್ಷಣಿಕ ಹಾಗೂ 16(4)ರಡಿ ಔದ್ಯೋಗಿಕ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

29 ವಸತಿ ಶಾಲೆ: ‘ಜಿಲ್ಲೆಯಲ್ಲಿರುವ 29 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕು. ವಿದ್ಯಾಸಿರಿ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 6 ವಿದ್ಯಾರ್ಥಿನಿಲಯಗಳಿದ್ದು, ಈ ಪೈಕಿ ಮೂರು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡಗಳಲ್ಲಿರುವ ವಿದ್ಯಾರ್ಥಿನಿಲಯಗಳಲ್ಲಿ ಮೂಲಸೌಕರ್ಯ ಸಮಸ್ಯೆಯಿದೆ’ ಎಂದು ಮಾಹಿತಿ ನೀಡಿದರು.

‘2021-22ನೇ ಸಾಲಿನಲ್ಲಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ 21,885 ಮಂದಿ ಅಲ್ಪಸಂಖ್ಯಾತರ ಸಮುದಾಯದವರು ಪ್ರಯೋಜನ ಪಡೆದಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಈವರೆಗೆ 90 ಮಂದಿ ಫಲಾನುಭವಿಗಳ ಅರ್ಜಿಗಳಿಗೆ ಆನ್‍ಲೈನ್‍ನಲ್ಲಿ ಮಂಜೂರಾತಿ ನೀಡಲಾಗಿದೆ. ಜಿಲ್ಲೆಯಲ್ಲಿ 44,669 ಮಂದಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿದ್ದಾರೆ. 167 ಉರ್ದು ಶಾಲೆಗಳಿಗೆ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ನವೀಕೃತ ಅರ್ಜಿಗಳು ಸೇರಿದಂತೆ ಒಟ್ಟಾರೆ 26,204 ಅರ್ಜಿ ಸಲ್ಲಿಕೆಯಾಗಿವೆ’ ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಚಿನ್ ಘೋರ್ಪಡೆ, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT