ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | 16,959 ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪರೀಕ್ಷೆ

ದ್ವಿತೀಯ ಪಿಯು ಪರೀಕ್ಷೆಗೆ ಮುನ್ನೆಚ್ಚರಿಕೆ ಕ್ರಮ, ಗುರುತಿನ ಚೀಟಿ ಇದ್ದರೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ
Last Updated 18 ಜೂನ್ 2020, 2:53 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ 26 ಕೇಂದ್ರಗಳಲ್ಲಿ ಜೂ.18 ರಂದು 16959 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆಯಲಿದ್ದು, ಕೋವಿಡ್-19 ಸೋಂಕು ತಡೆಗೆ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದರು .

ಜಿಲ್ಲಾಧಿಕಾರಿಗಳು ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಯಾವುದೇ ಲೋಪಗಳಿಲ್ಲದಂತೆ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರತ್ಯೇಕ ಕೊಠಡಿ: ಇತರ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಜಿಲ್ಲೆಯ 432 ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯಗಳ 66 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿದ್ದಾರೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ನೀಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಅವರಿಗೆ ಇ-ಪಾಸ್ ವ್ಯವಸ್ಥೆ ಮಾಡಿದ್ದು, ಒಮ್ಮೆ ಬಂದು ಹೋಗಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ
ನೀಡಿದರು.

ಸೋಂಕು ತಡೆಗೆ ಕ್ರಮ: ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳ ಸ್ಯಾನಿಟೈಸ್ ಮಾಡಿದ್ದು, ಕೇಂದ್ರಕ್ಕೆ ಬರುವ ಎಲ್ಲಾ ಮಕ್ಕಳು ಅಂತರ ಕಾಯ್ದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಪ್ರತಿಕೇಂದ್ರದಲ್ಲೂ 100 ಮುಖಗವಸು ಸಂಗ್ರಹಿಸಿದ್ದು, ಮಂಡಳಿ ಮಾರ್ಗ ಸೂಚಿಯಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮೋಸ್ಕ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಗುರುತಿನ ಚೀಟಿ ಇದ್ದರೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ. ಅನಧಿಕೃತ ವ್ಯಕ್ತಿಗಳು ಕೇಂದ್ರಕ್ಕೆ ಪ್ರವೇಶಿಸದಂತೆ ಮುಖ್ಯ ಅಧೀಕ್ಷಕರು ಎಚ್ಚರ ವಹಿಸಬೇಕು. ನಿರ್ಲಕ್ಷೆ ತೋರಿದ್ದಲ್ಲಿ ಮುಖ್ಯ ಅಧೀಕ್ಷಕರನ್ನೇ ಹೊಣೆ ಮಾಡಲಾಗುವುದು
ಎಂದರು.

ಪ್ರತಿ ಕೇಂದ್ರಕ್ಕೆ ಒಬ್ಬರು ಮುಖ್ಯ ಅಧೀಕ್ಷಕರಿದ್ದು, ಅವರೊಂದಿಗೆ ಜಂಟಿ ಮುಖ್ಯ ಅಧೀಕ್ಷಕರು ಕಾರ್ಯ ನಿರ್ವಹಿಸಲಿದ್ದಾರೆ. ಸೋಂಕು ತಡೆ ಬಗ್ಗೆ ವಿದ್ಯಾರ್ಥಿ, ಪೋಷಕರಿಗೂ ಅರಿವು ಮೂಡಿಸಲಾಗಿದೆ ಎಂದರು.

–––

ಸಿ.ಸಿ.ಟಿವಿ ಕ್ಯಾಮೆರಾ ಕಣ್ಗಾವಲು

ಪರೀಕ್ಷಾ ಕೇಂದ್ರದಲ್ಲಿ ಗೊಂದಲಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಿದ್ದು, ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಎಲ್ಲಾ 26 ಕೇಂದ್ರಗಳಿಗೆ ಪರೀಕ್ಷೆಗೆ ಮುನ್ನಾ ಖಜಾನೆಯಿಂದ ಪಡೆದು ಸರಬರಾಜು ಮಾಡಲು ಪೊಲೀಸ್ ಬಂದೋಬಸ್ತ್ ಇರುವ 9 ವಾಹನಗಳು 9 ಮಾರ್ಗಗಳಲ್ಲಿ ಸಾಗುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ನಕಲು ತಡೆಗೆ ಜಾಗೃತದಳ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 1, ಪೊಲೀಸ್ ಇಲಾಖೆಯಿಂದ 1, ಉಪನಿರ್ದೇಶಕರ ನೇತೃತ್ವದಲ್ಲಿ 1 ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜಾಗೃತದಳಗಳನ್ನು ರಚಿಸಲಾಗಿದೆ ಎಂದು ಡಿಡಿಪಿಯು ರಾಮಚಂದ್ರಪ್ಪ ತಿಳಿಸಿದರು.

––

ನಿಷೇಧಾಜ್ಞೆ ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೂ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಯಾಗಲಿದೆ. ಈ ಭಾಗದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಪೋನ್, ಇ-ಕ್ಯಾಮರಾ, ಲ್ಯಾಪ್‌ಟಾಪ್‌, ಎಲೆಕ್ಟ್ರಾನಿಕ್ ಕೈಗಡಿಯಾರ ಸೇರಿದಂತೆ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಎಚ್ಚರಿಕೆ ನೀಡಲಾಗಿದೆ.

––

26 ಕೇಂದ್ರಗಳಲ್ಲಿ ಪರೀಕ್ಷೆ

ಕೋಲಾರದಲ್ಲಿ 9, ಬಂಗಾರಪೇಟೆ-3, ಕೆಜಿಎಫ್-3, ಶ್ರೀನಿವಾಸಪುರ-3, ಮುಳಬಾಗಿಲು-5, ಮಾಲೂರಿನಲ್ಲಿ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋಲಾರ ತಾಲ್ಲೂಕಿನ 5,483, ಬಂಗಾರಪೇಟೆಯ 1,494, ಕೆಜಿಎಫ್ ತಾಲ್ಲೂಕಿನ 1,586, ಮಾಲೂರು ತಾಲ್ಲೂಕಿನ 2,300, ಮುಳಬಾಗಿಲು ತಾಲ್ಲೂಕಿನ 2,229, ಶ್ರೀನಿವಾಸಪುರ ತಾಲ್ಲೂಕಿನಲ್ಲಿ 1,867 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT