ಗುರುವಾರ , ಆಗಸ್ಟ್ 11, 2022
24 °C
ಡಿ.ಸಿ ಸತ್ಯಭಾಮ ಹೇಳಿಕೆ

ಸೆ.7ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಸುರಕ್ಷತಾ ಮಾರ್ಗಸೂಚಿ ಪಾಲನೆ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯ 8 ಕೇಂದ್ರಗಳಲ್ಲಿ ಸೆ.7ರಿಂದ 19ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಕೋವಿಡ್‌ ಸುರಕ್ಷತಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಪೂರಕ ಪರೀಕ್ಷೆಗೆ 2,771 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ’ ಎಂದು ತಿಳಿಸಿದರು.

‘ಕೋವಿಡ್–19 ಆತಂಕದ ನಡುವೆಯೂ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲೀಷ್, ಸಿಇಟಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ ರೀತಿ ಯಾವುದೇ ಲೋಪವಾಗದಂತೆ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.

‘ಕೋಲಾರದ 3, ಬಂಗಾರಪೇಟೆ, -ಕೆಜಿಎಫ್‌, ಶ್ರೀನಿವಾಸಪುರ-, ಮುಳಬಾಗಿಲು ಹಾಗೂ ಮಾಲೂರಿನ ತಲಾ 1 ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದೆ. ಪ್ರತಿ ಕೇಂದ್ರಕ್ಕೆ ಒಬ್ಬರು ಮುಖ್ಯ ಅಧೀಕ್ಷಕರಿರುತ್ತಾರೆ. ಅವರೊಂದಿಗೆ ಜಂಟಿ ಮುಖ್ಯ ಅಧೀಕ್ಷಕರು ಕಾರ್ಯ ನಿರ್ವಹಿಸುತ್ತಾರೆ. ಪ್ರಶ್ನೆಪತ್ರಿಕೆ ಬಂಡಲ್‌ ಸ್ವೀಕರಿಸಿ ಮಧ್ಯಾಹ್ನ ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್ ಕೇಂದ್ರದಿಂದ ಹೋಗುವವರೆಗೂ ಕೇಂದ್ರದಲ್ಲೇ ಇದ್ದು, ನಿಗಾ ವಹಿಸಬೇಕು’ ಎಂದು ಹೇಳಿದರು.

ನಿಷೇಧಾಜ್ಞೆ ಜಾರಿ: ‘ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷೆ ನಡೆಯುವ ದಿನ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30 ರವರೆಗೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಜತೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಿಸಬೇಕು’ ಎಂದು ಆದೇಶಿಸಿದರು.

‘ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಇ-ಕ್ಯಾಮೆರಾ, ಲ್ಯಾಪ್‌ಟಾಪ್‌ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಎಲೆಕ್ಟ್ರಾನಿಕ್ ಕೈಗಡಿಯಾರ ಸಹ ತೆಗೆದುಕೊಂಡು ಹೋಗುವಂತಿಲ್ಲ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಕುಡಿಯುವ ನೀರು, ಶೌಚಾಲಯ, ಬೆಳಕಿನ ವ್ಯವಸ್ಥೆ ಸರಿ ಇರಬೇಕು’ ಎಂದರು.

ಸ್ಯಾನಿಟೈಸ್‌: ‘ಕೊರೊನಾ ಸೋಂಕು ತಡೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಕೇಂದ್ರಕ್ಕೆ ಬರುವ ಎಲ್ಲಾ ಮಕ್ಕಳು ಅಂತರ ಕಾಯ್ದುಕೊಳ್ಳಬೇಕೆಂದು ನಿರ್ದೇಶನ ನೀಡಲಾಗಿದೆ. ಕೊಠಡಿಗಳಲ್ಲಿ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಮಕ್ಕಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಥರ್ಮಲ್‌ ಸ್ಕ್ರೀನಿಂಗ್ ಮಾಡಲಾಗುತ್ತದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ ಮಾಹಿತಿ ನೀಡಿದರು.

‘ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಸಿಬ್ಬಂದಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಗುರುತಿನ ಚೀಟಿ ಇದ್ದರೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು. ಅನಧಿಕೃತ ವ್ಯಕ್ತಿಗಳು ಕೇಂದ್ರದಲ್ಲಿ ಕಂಡುಬಂದರೆ ಆಯಾ ಮುಖ್ಯ ಅಧೀಕ್ಷಕರನ್ನೇ ಹೊಣೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆ ಬಂಡಲ್‌ ರವಾನಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ನಕಲು, ಅಕ್ರಮ ತಡೆಯಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಜಾಗೃತ ದಳಗಳನ್ನು ರಚಿಸಲಾಗಿದೆ’ ಎಂದು ವಿವರಿಸಿದರು.

ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು