ಬುಧವಾರ, ಜುಲೈ 28, 2021
23 °C
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಸಕಲ ಸಿದ್ಧತೆ

ಕೋಲಾರ: ಪರೀಕ್ಷೆಗೆ ದಿನಗಣನೆ; ವಿದ್ಯಾರ್ಥಿಗಳ ಕಾತುರ

ಜೆ.ಆರ್‌.ಗಿರೀಶ್‌ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಾಕಷ್ಟು ಸುರಕ್ಷತಾ ಕ್ರಮದೊಂದಿಗೆ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯದೆಲ್ಲೆಡೆ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್‌ ಪರೀಕ್ಷೆಯನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಾದ ಲಾಕ್‌ಡೌನ್‌ ಕಾರಣಕ್ಕೆ ಮುಂದೂಡಲಾಗಿತ್ತು. ಆ ವೇಳೆಗಾಗಲೇ ಪರೀಕ್ಷೆಗೆ ಸಿದ್ಧರಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿಕೆ ಆಗಿದ್ದರಿಂದ ನಿರಾಶರಾಗಿದ್ದರು.

ವಿದ್ಯಾರ್ಥಿಗಳು ಪರೀಕ್ಷೆ ನಡೆಯುತ್ತದೆಯೇ ಅಥವಾ ಇಲ್ಲವೇ ಎಂದು ಎರಡೂವರೆ ತಿಂಗಳಿಂದ ಗೊಂದಲದಲ್ಲಿದ್ದರು. ಈ ಮಾನಸಿಕ ತೊಳಲಾಟಕ್ಕೆ ತೆರೆ ಎಳೆದಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಜೂನ್‌ 18ರಂದು ನಡೆಸುವುದಾಗಿ ಹೇಳಿದ್ದು, ಪರೀಕ್ಷೆ ಬರೆಯಲು ಜಿಲ್ಲೆಯ ವಿದ್ಯಾರ್ಥಿಗಳು ಸನ್ನದ್ಧರಾಗಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು 14,895 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಲಾಕ್‌ಡೌನ್‌ ಕಾರಣಕ್ಕೆ ಬೇರೆಡೆಯಿಂದ ಜಿಲ್ಲೆಯಲ್ಲಿನ ಮನೆಗೆ ಮರಳಿರುವ ಹೊರ ಜಿಲ್ಲೆಗಳ 432 ವಿದ್ಯಾರ್ಥಿಗಳಿಗೆ ಸ್ಥಳೀಯ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜತೆಗೆ ಜಿಲ್ಲೆಯಲ್ಲಿ ಓದುತ್ತಿರುವ ಹೊರ ರಾಜ್ಯಗಳ 66 ವಿದ್ಯಾರ್ಥಿಗಳು ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಕೇಂದ್ರ: ಒಟ್ಟಾರೆ 6 ತಾಲ್ಲೂಕುಗಳಲ್ಲಿ 26 ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ 623 ಮಂದಿ ಮತ್ತು ಶಿಕ್ಷಣ ಇಲಾಖೆಯ 297 ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆಗೆ ಬರುವ ಪ್ರತಿ ವಿದ್ಯಾರ್ಥಿ ಮತ್ತು ಸಿಬ್ಬಂದಿಯ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆರೋಗ್ಯ ತಪಾಸಣೆಗಾಗಿ ಪ್ರತಿ ಕೇಂದ್ರಕ್ಕೆ ಇಬ್ಬರು ಆಶಾ ಕಾರ್ಯಕರ್ತೆಯರು, ಅಗತ್ಯ ಸೇವೆಗಾಗಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಇಬ್ಬರು ಸದಸ್ಯರನ್ನು ನೇಮಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಹೆಚ್ಚುವರಿಯಾಗಿ 3 ಕೊಠಡಿ ಕಾಯ್ದಿರಿಸಲಾಗಿದೆ. ಜ್ವರ ಅಥವಾ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ, ಕೊರೊನಾ ಸೋಂಕು ಪತ್ತೆಯಾದ ಕಂಟೈನ್‌ಮೆಂಟ್‌ ಝೋನ್‌ನಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತು ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುತ್ತದೆ.

ಥರ್ಮಲ್‌ ಸ್ಕ್ಯಾನಿಂಗ್

ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲೇ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ದೇಹದ ಉಷ್ಣತೆ ಪರೀಕ್ಷೆಗಾಗಿ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುತ್ತದೆ. ಅಲ್ಲದೇ, ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್‌ನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಮನೆಯಿಂದಲೇ ಮಾಸ್ಕ್‌ ತರುವಂತೆ ಸೂಚಿಸಲಾಗಿದೆ.

ಲಾಕ್‌ಡೌನ್‌ಗೂ ಮುನ್ನ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಇತರೆ ವಿಷಯಗಳ ಪರೀಕ್ಷೆಗೆ 666 ಕೊಠಡಿಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಈಗ ಕೊರೊನಾ ಸೋಂಕಿನ ಭೀತಿ ಹೆಚ್ಚಿರುವ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಕೊಠಡಿಗಳ ಸಂಖ್ಯೆಯನ್ನು 920ಕ್ಕೆ ಹೆಚ್ಚಿಸಲಾಗಿದೆ. ವಿದ್ಯಾರ್ಥಿಯಿಂದ ವಿದ್ಯಾರ್ಥಿಗೆ ಮೂರೂವರೆ ಅಡಿ ಅಂತರ ಇರುವಂತೆ ಡೆಸ್ಕ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಲಾಗುತ್ತದೆ.

ಸೋಂಕು ನಿವಾರಕ

ಪರೀಕ್ಷಾ ಕೇಂದ್ರದಲ್ಲಿನ ಕೊಠಡಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿದೆ. ವಿದ್ಯಾರ್ಥಿಗಳು ಪ್ರವೇಶಪತ್ರದ ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಾತುರರಾಗಿದ್ದು, ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ.

ಅಂಕಿ ಅಂಶ.....
* 14,895 ನೊಂದಾಯಿತ ವಿದ್ಯಾರ್ಥಿಗಳು
* 432 ಮಂದಿ ಹೊರ ಜಿಲ್ಲೆ ವಿದ್ಯಾರ್ಥಿಗಳು
* 26 ಪರೀಕ್ಷಾ ಕೇಂದ್ರಗಳು
* 920 ಸಿಬ್ಬಂದಿ ನಿಯೋಜನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು