ಭಾನುವಾರ, ಸೆಪ್ಟೆಂಬರ್ 26, 2021
29 °C

ಪಂಪ್‌ಸೆಟ್‌: ಮೀಟರ್‌ ಅಳವಡಿಕೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ರೈತರ ಕೃಷಿ ಉದ್ದೇಶದ ಪಂಪ್‌ಸೆಟ್‌ಗಳಿಗೆ ಡಿಜಿಟಲ್ ಮೀಟರ್‌ ಅಳವಡಿಸದಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು (ಪ್ರೊ.ನಂಜುಂಡಸ್ವಾಮಿ ಬಣ) ಇಲ್ಲಿ ಮಂಗಳವಾರ ಉಪ ವಿಭಾಗಾಧಿಕಾರಿ ಆನಂದ್‌ ಪ್ರಕಾಶ್‌ ಮೀನಾ ಅವರಿಗೆ ಮನವಿ ಸಲ್ಲಿಸಿದರು.

‘ಕೇಂದ್ರ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿದೆ. ಇದೀಗ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಹೊರಟಿದೆ. ವಿದ್ಯುತ್‌ ಕ್ಷೇತ್ರವನ್ನು ಕಾರ್ಪೊರೇಟ್‌ ಕಂಪನಿಗಳಿಗೆ ವಹಿಸಿದರೆ ಕೃಷಿ ವಲಯ ಬುಡಮೇಲಾಗಿ ರೈತರು ಕೃಷಿಯಿಂದ ವಿಮುಖರಾಗುತ್ತಾರೆ’ ಎಂದು ಸಂಘಟನೆ ಸದಸ್ಯರು ಆತಂಕ ವ್ಯಕ್ತಪಡಿಸಿದರು.

‘ವಿದ್ಯುತ್, ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳು, ಕೃಷಿ ಯಂತ್ರೋಪಕರಣಗಳ ಬೆಲೆ ಗಗನಕ್ಕೇರಿದೆ. ರೈತರು ಬಡ್ಡಿ ಸಾಲ ಮಾಡಿ ಬೆಳೆದ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗುತ್ತಿಲ್ಲ. ಸರ್ಕಾರ ರೈತರ ಹಿತ ಕಾಯುವುದನ್ನು ಬಿಟ್ಟು ಕೃಷಿ ಕ್ಷೇತ್ರದ ಮೇಲೆ ಗದಾಪ್ರಹಾರ ನಡೆಸುತ್ತಿದೆ’ ಎಂದು ಸಂಘಟನೆಯ ರಾಜ್ಯ ಯುವ ಘಟಕದ ಅಧ್ಯಕ್ಷ ರಾಮುಶಿವಣ್ಣ ಅಸಮಾಧಾನ ವ್ಯಕ್ತಪಡಿಸಿದರು.

‘ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಈ ಜನ ವಿರೋಧಿ ನಡೆಯಿಂದ ಇಡೀ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬಂದಿದೆ’ ಎಂದು ಕಿಡಿಕಾರಿದರು.

ತುಘಲಕ್‌ ದರ್ಬಾರ್‌: ‘ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ. ಇದರಿಂದ ದೇಶದ ಆಹಾರ ಭದ್ರತೆ ಮೇಲೆ ದುಷ್ಪರಿಣಾಮ ಉಂಟಾಗುವುದು ಖಚಿತ. ಆಹಾರಕ್ಕಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಯಾಗಲಿದೆ. ಸರ್ಕಾರಗಳು ರೈತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ರೈತರನ್ನು ಶೋಷಿಸುತ್ತಾ ತುಘಲಕ್‌ ದರ್ಬಾರ್‌ ನಡೆಸುತ್ತಿವೆ’ ಎಂದು ಸಂಘಟನೆ ಸದಸ್ಯರು ದೂರಿದರು.

‘ರೈತರ ಪಂಪ್‌ಸೆಟ್‌ಗಳಿಗೆ ಉಚಿತವಾಗಿ ವಿದ್ಯುತ್ ಕೊಡಬೇಕು. ಜತೆಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ವಿತರಿಸಬೇಕು. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಮಂಜುನಾಥ್, ಗೌರವಾಧ್ಯಕ್ಷ ಗೋಪಾಲಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು