ಶನಿವಾರ, ಜನವರಿ 25, 2020
15 °C

ರೋಗ ತಡೆ ಜಾಗೃತಿ ಮೂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗಟ್ಟುವಿಕೆ ಬಗ್ಗೆ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕುರಿತು ಇಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿ, ‘ವೈಯಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಅರಿವು ಮೂಡಬೇಕು. ಜತೆಗೆ ಹಾಸ್ಟೆಲ್‌ ವಿದ್ಯಾರ್ಥಿಗಳು ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಕೊಳವೆ ಬಾವಿ ಹಾಗೂ ನಲ್ಲಿಯ ಪೈಪ್‌ಗಳನ್ನು ಒಳ ಚರಂಡಿಗಳಿಂದ ದೂರದಲ್ಲಿ ಅಳವಡಿಸಬೇಕು. ನೀರು ಸರಬರಾಜು ಮಾಡುವ ಮೊದಲು ಸೂಕ್ತ ಪ್ರಮಾಣದಲ್ಲಿ ಕ್ಲೋರಿನ್ ಬಳಕೆ ಮಾಡುವುದು ಮುಖ್ಯ. ಚರಂಡಿ ವ್ಯವಸ್ಥೆ ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ಗಮನ ಹರಿಸಬೇಕು. ಹೋಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು’ ಎಂದು ಸೂಚಿಸಿದರು.

‘ಸೊಳ್ಳೆ ಉತ್ಪತ್ತಿಯಾಗುವ ತಾಣಗಳಲ್ಲಿ ವಾರಕ್ಕೊಮ್ಮೆ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸಬೇಕು. ಕಾರ್ಮಿಕರು ವಾಸಿಸುವ ಕಾಲೊನಿಗಳಲ್ಲಿ ಒಳ ಚರಂಡಿ ವ್ಯವಸ್ಥೆ ಸಮರ್ಪಕವಾಗಿರಬೇಕು. ಕುಡಿಯಲು ಶುದ್ಧ ನೀರು ಬಳಸಬೇಕು’ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ ಹೇಳಿದರು.

‘ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಹಾಗೂ ಕಿಟಕಿಗಳಿಗೆ ಜಾಲರಿ ಅಳವಡಿಸುವುದನ್ನು ಪ್ರೋತ್ಸಾಹಿಸಬೇಕು. ಇದರಿಂದ ಮಾನವ ಹಾಗೂ ಸೊಳ್ಳೆಗಳ ನಡುವಿನ ಸಂಪರ್ಕ ತಡೆಗಟ್ಟಬಹುದು’ ಎಂದರು.

ವಿಶ್ವ ಆರೋಗ್ಯ ಸಂಸ್ಥೆಯ ನೋಡಲ್ ಅಧಿಕಾರಿ ಮಿಸ್ಬಾ ಅಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಎಂ.ಎನ್.ಪಾಲಿ, ನಗರಸಭೆ ಆಯುಕ್ತ ಶ್ರೀಕಾಂತ್, ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು